ರಾಜ್ಯದಲ್ಲಿ ಮುಂಗಾರು ಚುರುಕು, ರೈತರು ಫುಲ್ ಖುಷ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು. 4- ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು ಉತ್ತಮ ಮಳೆಯಾಗುತ್ತಿದೆ. ಇದರಿಂದ ಮುಂಗಾರು ಹಂಗಾಮಿನ ಬಿತ್ತನೆಯ ಸಿದ್ಧತೆಯಲ್ಲಿ ರೈತರು ನಿರತರಾಗಿದ್ದಾರೆ.

ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದರೆ, ರಾಜ್ಯದ ಬಹುತೇಕ ಕಡೆಗಳಲ್ಲಿ ಬಿತ್ತನೆ ಭೂಮಿ ಹದಗೊಳಿಸಲು ಅಗತ್ಯವಿರುವ ಪ್ರಮಾಣದಲ್ಲಿ ಮಳೆಯಾಗುತ್ತಿದೆ.

ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಒಳನಾಡಿನಲ್ಲಿ ಇದೇ ರೀತಿ ಮಳೆಯಾಗುವ ಮುನ್ಸೂಚನೆಗಳಿವೆ. ಸಂಜೆ ಹಾಗೂ ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆಗಳಿವೆ.

ಕರಾವಳಿಯಲ್ಲಿ ಅಧಿಕ ಮಳೆಯಾಗುತ್ತಿದ್ದು, ಮಲೆನಾಡು ಭಾಗದಲ್ಲೂ ಮಳೆ ಪ್ರಮಾಣ ಹೆಚ್ಚಾಗುವ ಮುನ್ಸೂಚನೆಗಳಿವೆ. ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಒಳ್ಳೆಯ ಮಳೆಯಾಗುತ್ತಿದೆ.

ಮುಂಗಾರು ಹಂಗಾಮಿನಲ್ಲಿ ವಾತಾವರಣದಲ್ಲಿ ಬದಲಾವಣೆಯಾಗಿ ನಿರಂತರವಾಗಿ ಮಳೆಯಾಗುವುದು ಸಹಜ ಪ್ರಕ್ರಿಯೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಬಂಗಾಳಕೊಲ್ಲಿ ಮತ್ತು ಅರಬ್ಬೀ ಸಮುದ್ರಗಳೆರಡರಲ್ಲೂ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ರಾಜ್ಯದ ಬಹುತೇಕ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ತಂಪಾದ ಮೇಲ್ಮೈ ಗಾಳಿ ಬೀಸುತ್ತಿದ್ದು, ಆಗಾಗ್ಗೆ ಕೆಲವೆಡೆ ಮಳೆಯಾಗುತ್ತಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದರು.

ಬಹುತೇಕ ಕಡೆಗಳಲ್ಲಿ ಸಾಧಾರಣ ಪ್ರಮಾಣದ ಮಳೆಯಾಗುತ್ತಿದ್ದು, ಕೆಲವೆಡೆ ಭಾರೀ ಮಳೆಯಾಗುತ್ತಿದೆ. ಮೇಲ್ಮೈ ಸುಳಿಗಾಳಿ ಎರಡೂ ಕಡೆ ಏಕ‌ ಕಾಲದಲ್ಲಿ ಉಂಟಾಗಿರುವುದರಿಂದ ಮುಂಗಾರು ಕ್ರಿಯಾಶೀಲವಾಗಿದೆ.

ಇದರಿಂದ ಮುಂದಿನ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. ರಾಜ್ಯದಲ್ಲಿ ವಾಡಿಕೆ ಪ್ರಮಾಣದ ಮಳೆಯಾಗುತ್ತಿದ್ದು, ಜಲಾಶಯಗಳ ಒಳ ಹರಿವು ಹೆಚ್ಚಾಗುತ್ತಿದೆ. ಕೃಷಿ ಚಟುವಟಿಕೆಗೂ ಪೂರಕವಾದ ವಾತಾವರಣವಿದೆ ಎಂದು ಹೇಳಿದರು.

Facebook Comments

Sri Raghav

Admin