ರಾಜ್ಯದ ಈ ಭಾಗಗಳಲ್ಲಿ ಇನ್ನೆರಡು ದಿನ ಮಳೆ ಸಾಧ್ಯತೆ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಡಿ.17-ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಿನ್ನೆಯಿಂದ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಇನ್ನೆರಡು ದಿನ ಇದೇ ಪರಿಸ್ಥಿತಿ ಮುಂದುವರೆಯಲಿದ್ದು, ಚದುರಿದಂತೆ ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆಗಳಿವೆ.  ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ನಾಳೆ ಸಂಜೆವರೆಗೂ ಮುಂದುವರೆಯಲಿದೆ. ರಾಜ್ಯದ ಅಲ್ಲಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ಸಾಧಾರಣ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ.

ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದರು.

ಇಂದು ಸಂಜೆ ಮತ್ತು ನಾಳೆ ರಾಜಧಾನಿ ಬೆಂಗಳೂರು ಸೇರಿದಂತೆ ಕೆಲವೆಡೆ ತುಂತುರು ಮಳೆಯಾಗುವ ನಿರೀಕ್ಷೆಯಿದೆ. ಮುಂಗಾರು ಹಂಗಾಮಿನ ಭತ್ತ, ರಾಗಿ, ಜೋಳ ಸೇರಿದಂತೆ ವಿವಿಧ ಬೆಳೆಗಳ ಕೊಯ್ಲು , ಒಕ್ಕಣೆ ಸಂದರ್ಭದಲ್ಲಿ ಮಳೆ ಬರುವುದರಿಂದ ರೈತರಿಗೆ ತೊಂದರೆಯಾಗುತ್ತದೆ ಎಂದರು.

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಮಹಾರಾಷ್ಟ್ರದಲ್ಲಿ ಮಳೆಯಾಗಿದೆ. ಕರಾವಳಿ ಭಾಗದಲ್ಲಿ ಗರಿಷ್ಠ ತಾಪಮಾನ ಗಣನೀಯವಾಗಿ ಏರಿಕೆಯಾಗಿದೆ. ದೇಶದಲ್ಲೇ ಅತ್ಯಧಿಕ ಪ್ರಮಾಣದ ಗರಿಷ್ಠ ತಾಪಮಾನ(34.5 ಡಿಗ್ರಿ ಸೆಲ್ಷಿಯಸ್) ರಾಜ್ಯದ ಕರಾವಳಿ ಭಾಗದಲ್ಲಿ ನಿನ್ನೆ ಹಗಲಿನ ವೇಳೆ ಕಂಡುಬಂದಿದೆ.

ಇದಲ್ಲದೆ ಡಿಸೆಂಬರ್ 25ರ ನಂತರ ಮತ್ತೊಂದು ಸುತ್ತಿನ ಮಳೆಯಾಗುವ ಮುನ್ಸೂಚನೆಗಳಿವೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಲಿದ್ದು ಯಾವ ಸ್ವರೂಪ ಪಡೆಯಲಿದೆ ಎಂಬುದನ್ನು ಕಾದುನೋಡಬೇಕಿದೆ.  ಡಿಸೆಂಬರ್ 25ರಿಂದ 27ರವರೆಗೂ ತಮಿಳುನಾಡು ಹಾಗೂ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಗಳು ಕಂಡುಬರುತ್ತಿವೆ ಎಂದು ಹೇಳಿದರು.

Facebook Comments