ಮತ್ತೆ ವಾಯುಭಾರ ಕುಸಿತ, ರಾಜ್ಯದಲ್ಲಿ ಮಳೆ ಸಾಧ್ಯತೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.18- ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಉಂಟಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಗಳಿದ್ದು, ರಾಜ್ಯದಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ. ಕಳೆದ ವಾರ ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದ ಪರಿಣಾಮ ಕಲ್ಯಾಣ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು.

ಭೀಮಾನದಿ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ನದಿಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿ ಜನ-ಜಾನುವಾರು ತೀವ್ರ ಸಂಕಷ್ಟ ಎದುರಿಸುವಂತಾಗಿದ್ದು, ಈಗ ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಲಿದ್ದು, ಮತ್ತೊಂದು ಸುತ್ತಿನ ಮಳೆಯಾಗಲಿದೆ.

ಬಂಗಾಳಕೊಲ್ಲಿಯಲ್ಲಿ ನಾಳೆ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಗಳಿದ್ದು, ರಾಜ್ಯದ ಒಳನಾಡಿನಲ್ಲಿ ಸಾಧಾರಣ ಪ್ರಮಾಣದ ಮಳೆಯಾಗಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ಡಾ.ಜಿ.ಎ.ಶ್ರೀನಿವಾಸರೆಡ್ಡಿ ತಿಳಿಸಿದರು.

ವಾಯುಭಾರ ಕುಸಿತದ ಪರಿಣಾಮ ಉತ್ತರ ಕರ್ನಾಟಕ ಭಾಗದಲ್ಲೂ ಮತ್ತೆ ಮಳೆಯಾಗಲಿದೆ. ಆದರೆ, ಭಾರೀ ಮಳೆಯಾಗುವ ಮುನ್ಸೂಚನೆಗಳಿಲ್ಲ. ಸಾಧಾರಣ ಪ್ರಮಾಣದ ಮಳೆಯಾಗಬಹುದು. ರಾಜ್ಯದಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆಗಳಿವೆ ಎಂದರು.

ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗಗಳಲ್ಲಿ ಮತ್ತೆ ಮೂರು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ಕಳೆದ ವಾರ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದ ಮಳೆಯಾದ್ದರಿಂದ ಅತಿವೃಷ್ಟಿ ಉಂಟಾಗಿ ಅಪಾರ ಪ್ರಮಾಣದ ಬೆಳೆ ಹಾನಿಗೀಡಾಗಿದೆ ಎಂದು ಹೇಳಿದರು.

Facebook Comments