ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡೀಸ್ ಇನ್ನಿಲ್ಲ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಸೆ.13- ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಹಾಗೂ ಗಾಂಧಿ ಕುಟುಂಬ ಅನುಯಾಯಿಯಾಗಿದ್ದ ಆಸ್ಕರ್ ಫರ್ನಾಂಡಿಸ್ ಅವರು ಇಂದು ಮಧ್ಯಾಹ್ನ ವಿಧಿವಶರಾಗಿದ್ದಾರೆ.ಎಂಬತ್ತು ವರ್ಷ ವಯಸ್ಸಿನ ಫರ್ನಾಂಡಿಸ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಇಹಲೋಕ ತ್ಯಜಿಸಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

ಮೃತರು ಪತ್ನಿ ಬ್ಲೊಸಮ್ ಫರ್ನಾಂಡಿಸ್, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.1941 ಮಾರ್ಚ್ 27 ರಂದು ಉಡುಪಿಯಲ್ಲಿ ಜನಿಸಿದ್ದ ಅವರು, 1980 ರಿಂದ 1996ರವರೆಗೆ ಉಡುಪಿ ಲೋಕಸಭಾ ಕ್ಷೇತ್ರದಿಂದ ಸತತವಾಗಿ ಐದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.2004ರ ಯುಪಿಎ ಸರ್ಕಾರದಲ್ಲಿ ಸಾರಿಗೆ, ಕಾರ್ಮಿಕದ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದರು.2010ರಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಗಾಂಧಿ ಕುಟುಂಬದ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು.

ಇತ್ತಿಚೆಗೆ ತಮ್ಮ ಮನೆಯಲ್ಲಿ ಯೋಗ ಮಾಡುತ್ತಿದ್ದಾಗ ಆಯತಪ್ಪಿ ಬಿದ್ದು ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಂದಿನಿಂದ ಮಂಗಳೂರಿನ ಯನಪೋಯಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಕರ್ ನಿಧನಕ್ಕೆ ಸೋನಿಯಾಗಾಂಧಿ, ರಾಹುಲ್‍ಗಾಂಧಿ, ಮನಮೋಹನ್ ಸಿಂಗ್, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್ ಸೇರಿದಂತೆ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Facebook Comments

Sri Raghav

Admin