ಕೋವಿಡ್ ಪರಿಸ್ಥಿತಿ ಎದುರಿಸಲು ಸಜ್ಜಾಗಿ : ಜಗದೀಶ್

ಈ ಸುದ್ದಿಯನ್ನು ಶೇರ್ ಮಾಡಿ

ರಾಮನಗರ, ಜು.1- ಕೋವಿಡ್ -19ರ ಪರಿಸ್ಥಿತಿಯನ್ನು ಎದುರಿಸಲು ಮುಂದಿನ ದಿನಗಳಲ್ಲಿ ಎಲ್ಲಾ ರೀತಿಯಿಂದಲೂ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಜಿ. ಜಗದೀಶ್ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮುಂಬರುವ ದಿನಗಳಲ್ಲಿ ಪರಿಸ್ಥಿತಿಯನ್ನು ಎದುರಿಸಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕಾಗಿದೆ. ಎಂತಹ ಸ್ಥಿತಿ ಎದುರಾದರೂ ಅದನ್ನು ನಿಭಾಯಿಸಲು ಜಿಲ್ಲಾಡಳಿತ ಸಿದ್ಧವಾಗಿರುವಂತೆ ಹಿರಿಯ ಅಧಿಕಾರಿಗಳಿಗೆ ತಿಳಿಸಿದರು.

ಕೋವಿಡ್ ರೋಗಿಗಳಲ್ಲಿ ಹಠಾತ್ ಆಮ್ಲಜನಕದ ಪ್ರಮಾಣದಲ್ಲಿ ಕುಸಿತವಾಗಿ ಜೀವಕ್ಕೆ ಹೆಚ್ಚಿನ ಅಪಾಯ ತಂದು ಒಡ್ಡುತ್ತದೆ. ಹೀಗಾಗಿ ಪ್ರಾಥಮಿಕ ಸಂಪರ್ಕ ಇಲ್ಲಿ ದ್ವಿತೀಯ ಸಂಪರ್ಕಕ್ಕೆ ಬಂದವರಿಗೂ ದಿನದಲ್ಲಿ ಮೂರು ಬಾರಿಯಾದರೂ ಆಕ್ಸಿಮೀಟರ್ ಬಳಸಿಕೊಂಡು ಅದರ ದೇಹದಲ್ಲಿರುವ ಆಮ್ಲಜನಕದ ಪ್ರಮಾಣವನ್ನು ಅಳೆಯಬೇಕು ಮತ್ತು ಅದಕ್ಕನುಗುಣವಾಗಿ ಚಿಕಿತ್ಸಾ ಕ್ರಮ ಕೈಗೊಳ್ಳುವಂತೆ ಆರೋಗ್ಯಾಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯಲ್ಲಿ ಐದು ಸಾವು ಸಂಭವಿಸಿರುವುದು ವಿಷಾದನೀಯ, ಮುಂದಿನ ದಿನಗಳಲ್ಲಿ ಸಾವು ಸಂಭವಿಸದಂತೆ ನೋಡಿಕೊಳ್ಳಬೇಕು. ರೋಗಿಯ ಚೇತರಿಕೆಗೆ ಅಗತ್ಯ ರೀತಿಯಲ್ಲಿ ವ್ಯವಸ್ಥೆ ಮಾಡಿಕೊಂಡು ಪರಿಸ್ಥಿತಿ ಕೈ ಮೀರದಂತೆ ರೋಗಿಯ ಜೀವ ಉಳಿಸಲು ಶ್ರಮಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿರುವ 15-20 ಹಾಸಿಗೆಗಳ ನರ್ಸಿಂಗ್ ಹೋಂ ಇಲ್ಲವೆ ಆಸ್ಪತ್ರೆಗಳನ್ನು ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಪರಿಸ್ಥಿತಿಗೆ ಅನುಗುಣವಾಗಿ ಕೋವಿಡ್ ಅಲ್ಲದ ರೋಗಿಗಳ ಚಿಕಿತ್ಸೆಗೆ ಗೊತ್ತು ಮಾಡಿಕೊಳ್ಳಬೇಕು. ಆಸ್ಪತ್ರೆಯಲ್ಲಿ ದಾಖಲಾಗಬೇಕಾದಂತಹ ಇನ್ನಿತರ ರೋಗಿಗಳಿಗೆ ಇಲ್ಲಿ ಚಿಕಿತ್ಸೆಗೆ ಅವಕಾಶ ಕಲ್ಪಿಸುವಂತೆ ಜಿಲ್ಲಾಡಳಿತಕ್ಕೆ ತಿಳಿಸಿದರು.

ಪ್ರತಿ ತಾಲ್ಲೂಕಿನಲ್ಲೂ ಕೋವಿಡ್‌ನ ಪರಿಸ್ಥಿತಿಯನ್ನು ನಿಭಾಯಿಸಲು ಸಜ್ಜುಗೊಳಿಸಬೇಕು. ತಾಲ್ಲೂಕುಗಳಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಕೋವಿಡ್‌ಗೆ ಚಿಕಿತ್ಸೆ ನೀಡಲು ಸಿದ್ಧಪಡಿಸಬೇಕು. ಅವಶ್ಯಕತೆ ಬಿದ್ದ ಪಕ್ಷದಲ್ಲಿ ವಸತಿ ನಿಲಯಗಳು ಮತ್ತು ಕಲ್ಯಾಣ ಮಂಟಪಗಳನ್ನು ತಾತ್ಕಾಲಿಕವಾಗಿ ಆಸ್ಪತ್ರೆಗಳನ್ನಾಗಿ ಮಾರ್ಪಾಡಿಸಿಕೊಂಡು ಕೋವಿಡ್ ರೋಗಿಗಳನ್ನು ಉಪಚರಿಸುವ ವ್ಯವಸ್ಥೆಯನ್ನು ಇಲ್ಲಿ ಮಾಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಕ್ರಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಎ ಶೆಟ್ಟಿ, ಅಪರ ಜಿಲ್ಲಾಧಿಕಾರಿ ಬಿ.ಪಿ ವಿಜಯ್ ಸೇರಿದಂತೆ ಇನ್ನಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Facebook Comments

Sri Raghav

Admin