ಕೊರೋನಾ 2.0 : ಎಚ್ಚರಿಕೆಯಿಂದ ಇರುವಂತೆ ಸಚಿವ ರಮೇಶ್ ಜಾರಕಿಹೊಳಿ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.23- ಬ್ರಿಟನ್ ದೇಶದಲ್ಲಿ ಕೊರೊನಾದ ರೂಪಾಂತರ ಹೊಂದಿದ ಸೋಂಕು ಕಂಡು ಬಂದಿರುವ ಹಿನ್ನೆಲೆಯಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರುವಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸಲಹೆ ನೀಡಿದ್ದಾರೆ. ವ್ಯಕ್ತಿಗತ ಸಾಮಾಜಿಕ ಅಂತರವನ್ನು ಸದಾ ಕಾಪಾಡಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ ಮತ್ತು ಸ್ಯಾನಿಟೈಸರ್ ಬಳಸಬೇಕು. ಆದಷ್ಟು ಜಾಗರೂಕತೆಯಿಂದ ಜೀವನ ನಿರ್ವಹಣೆ ಮಾಡುವಂತೆ ತಿಳಿಸಿದ್ದಾರೆ.

ಕೋವಿಡ್-19 ಸೋಂಕು ನಿವಾರಕ ಲಸಿಕೆಯು ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ. ಲಸಿಕೆಯನ್ನು ಸಹ ವ್ಯವಸ್ಥಿತವಾಗಿ ಜನರಿಗೆ ತಲುಪಿಸುವ ವ್ಯವಸ್ಥೆಯನ್ನು ಸರ್ಕಾರ ಮಾಡುತ್ತಿದೆ. ಅಲ್ಲಿಯವರೆಗೂ ಜನರು ಮೈಮರೆಯದೆ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಮಾರುಕಟ್ಟೆಗಳಲ್ಲಿ ಸೋಂಕು ಹರಡುವಿಕೆ ತಡೆಗೆ ವ್ಯವಸ್ಥಿತ ಮುನ್ನೆಚ್ಚರಿಕೆ ವಹಿಸಬೇಕು. ಮಳಿಗೆಗಳಲ್ಲಿ ಕಡ್ಡಾಯ 6 ಅಡಿ ಅಂತರ ಕಾಪಾಡುವಂತೆ ಗ್ರಾಹಕರಿಗೆ ಸೂಚಿಸಬೇಕು. ಪ್ರತಿ ದಿನ ಮಳಿಗೆಗಳನ್ನು ಸ್ಯಾನಿಟೈಸ್ ಮಾಡಬೇಕು. ಇದನ್ನು ಉಲ್ಲಂಘಿಸುವವರ ವಿರುದ್ಧ ಜಿಲ್ಲಾಧಿಕಾರಿಗಳು ಮತ್ತು ಲ್ಲಾಆರೋಗ್ಯಾಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಸಚಿವರು ಸೂಚಿಸಿದ್ದಾರೆ.

ಜ.1ರಿಂದ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿಗಳ ಆರಂಭಕ್ಕೆ ಸರ್ಕಾರ ಸೂಚನೆ ನೀಡಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸುರಕ್ಷತಾ ಕ್ರಮಗಳನ್ನು ತೆಗೆದು ಕೊಳ್ಳಬೇಕು. ಅದರಂತೆ ಜಿಲ್ಲಾಯ ಎಲ್ಲಾ ಶಾಲಾ-ಕಾಲೇಜುಗಳು ಸರ್ಕಾರದ ನಿರ್ದೇಶನದಂತೆ ಕೊಠಡಿಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಸೋಂಕು ನಿವಾರಕ ಔಷಧಿಗಳನ್ನು ಸಿಂಪಡಿಸಿ ವಿದ್ಯಾರ್ಥಿಗಳ ಮತ್ತು ಪಾಲಕರಲ್ಲಿರುವ ಭಯ ಹೋಗಲಾಡಿಸಬೇಕು.

ಇದಕ್ಕಾಗಿ ಪ್ರತಿ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳನ್ನು ಅವಲೋಕಿಸಲು ತಂಡ ರಚಿಸುವಂತೆ ಬೆಳಗಾವಿ ಜಿಲ್ಲಾ ಶಿಕ್ಷಣಾಧಿಕಾರಿಗಳಿಗೆ ಸಚಿವರು ಆದೇಶಿಸಿದ್ದಾರೆ.

Facebook Comments