ರಾಜೀನಾಮೆ ವಿಚಾರ ಮುಗಿದ ಅಧ್ಯಾಯ : ರಮೇಶ್ ಜಾರಕಿಹೊಳಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಳಗಾವಿ, ಜು.11- ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಗಿದ ಅಧ್ಯಾಯ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ ಸಿಗದಿದ್ದಕ್ಕೆ ಮುನಿಸಿಕೊಂಡಿದ್ದ ರಮೇಶ್ ಜಾರಕಿಹೊಳಿ ಅವರು ಕೆಲ ದಿನಗಳ ಹಿಂದಷ್ಟೆ ದೆಹಲಿ ಮತ್ತು ಮುಂಬೈಗೆ ತೆರಳಿ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿದ್ದರು. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ಸಂದರ್ಭದಲ್ಲಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ವದಂತಿ ಹರಡಿತ್ತು.

ಈ ಬಗ್ಗೆ ಗೋಕಾಕ್ ತಾಲ್ಲೂಕಿನ ಅಂಕಲಗಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದು ನಿಜ. ಆದರೆ, ಹಿತೈಷಿಗಳು, ಸ್ವಾಮೀಜಿಗಳು ರಾಜೀನಾಮೆ ನೀಡದಂತೆ ಸಲಹೆ ನೀಡಿದ ಹಿನ್ನೆಲೆಯಲ್ಲಿ ಸದ್ಯ ರಾಜೀನಾಮೆ ವಿಚಾರ ಕೈ ಬಿಟ್ಟಿರುವುದಾಗಿ ಸ್ಪಷ್ಟಪಡಿಸಿದರು.

ಮಿತ್ರಮಂಡಳಿ ಸ್ನೇಹಿತರನ್ನು ಭೇಟಿ ಮಾಡುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಒಂಟಿಯಾಗುವ ಪ್ರಶ್ನೆಯೇ ಇಲ್ಲ. ನಾನು ಮಿತ್ರಮಂಡಳಿ ಸದಸ್ಯರನ್ನು ಭೇಟಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಕೆಆರ್‍ಎಸ್ ಅಣೆಕಟ್ಟು ಬಿರುಕು ವಿಚಾರ ಸಂಬಂಧ ಕುಮಾರಸ್ವಾಮಿ ಹಾಗೂ ಸುಮಲತಾ ಅವರ ನಡುವಿನ ಮಾತಿನ ಸಮರ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು,

ಈ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಅಣೆಕಟ್ಟು ಬಿರುಕು ವಿಚಾರ ಸಂಬಂಧ ಕಾವೇರಿ ನೀರಾವರಿ ನಿಗಮ ನಿಯಮಿತದ ಅಧಿಕಾರಿಗಳು ಈ ಬಗ್ಗೆ ಸ್ಪಷ್ಟನೆ ನೀಡಿ ಅಣೆಕಟ್ಟು ಸುರಕ್ಷಿತವಾಗಿದೆ ಎಂದು ಹೇಳಿದ್ದಾರೆ. ಅವರ ಹೇಳಿಕೆಯೇ ಅಂತಿಮ. ಸುಮಲತಾ ಅವರು ಈ ರೀತಿಯ ಹೇಳಿಕೆಯನ್ನು ಯಾವ ಕಾರಣಕ್ಕೆ ನೀಡುತ್ತಿದ್ದಾರೆ ಎಂಬುದು ನನಗೆ ತಿಳಿಯುತ್ತಿಲ್ಲ ಎಂದರು.

Facebook Comments