ಮನೆಗೆ ನುಗ್ಗಿ ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮಾ.24- ದುಷ್ಕರ್ಮಿಗಳು ಮನೆಗೆ ನುಗ್ಗಿ ಕೊಠಡಿಯಲ್ಲಿ ಮಲಗಿದ್ದ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಇಂದು ಮುಂಜಾನೆ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇಟ್ಟಮಡು ಮುಖ್ಯರಸ್ತೆಯ ಬೇಕರಿ ಸಮೀಪದ ನಿವಾಸಿ ಮಂಜುನಾಥ ಅಲಿಯಾಸ್ ದಡಿಯ ಮಂಜ (37) ಕೊಲೆಯಾದ ರಿಯಲ್ ಎಸ್ಟೇಟ್ ಉದ್ಯಮಿ.

ಇಂದು ಮುಂಜಾನೆ ಮಂಜುನಾಥ್ ಅವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ರೂಮ್‍ನಲ್ಲಿ ಮಲಗಿದ್ದ ಅವರ ಮೇಲೆ ಮಾರಕಾಸ್ತ್ರಗಳಿಂದ ಮನಬಂದಂತೆ ತಲೆ, ಹೊಟ್ಟೆ, ಇನ್ನಿತರ ಭಾಗಗಳಿಗೆ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸುದ್ದಿ ತಿಳಿದು ಸಿಕೆ ಅಚ್ಚುಕಟ್ಟು ಠಾಣೆ ಪೊಲೀಸರು ಸ್ಥಳಕ್ಕೆ ದಾವಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಿದ್ದಾರೆ.

ರಿಯಲ್ ಎಸ್ಟೇಟ್ ಉದ್ಯಮಿಯ ಭೀಕರ ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮಂಜುನಾಥ್ ಪೊಲೀಸ್ ಮಾಹಿತಿದಾರ. ಈತ ತಮ್ಮ ಬಗ್ಗೆ ಎಲ್ಲ ಮಾಹಿತಿಗಳನ್ನೂ ಪೊಲೀಸರಿಗೆ ನೀಡುತ್ತಾನೆ ಎಂದು ಆರೋಪಿಗಳು ಈತನ ಮನೆಗೆ ನುಗ್ಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಈ ನಿಟ್ಟಿನಲ್ಲಿ ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.
ಆರೋಪಿಗಳು ಮನೆಗೆ ನುಗ್ಗಿ ಭೀಕರ ಕೊಲೆ ಮಾಡಿರುವ ಘಟನೆಯಿಂದ ಇಟ್ಟಮಡು ಸುತ್ತಮುತ್ತಲಿನ ಜನರಲ್ಲಿ ಭಯದ ವಾತಾವರಣ ಉಂಟಾಗಿದೆ.

Facebook Comments