“ನನ್ನನ್ನು ಮಂತ್ರಿ ಮಾಡಿದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುವಂತೆ ಕೆಲಸ ಮಾಡ್ತೀನಿ”

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಸೆ.18-ನನಗೆ ಈ ಬಾರಿ ಸಂಪುಟದಲ್ಲಿ ಅವಕಾಶ ಕೊಟ್ಟರೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುವಂತೆ ಕೆಲಸ ಮಾಡುತ್ತೇನೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಪರೋಕ್ಷವಾಗಿ ಸಚಿವ ಸ್ಥಾನದ ಬೇಡಿಕೆ ಮುಂದಿಟ್ಟಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಅಬಕಾರಿ ಸಚಿವನಾಗಿ ಒಳ್ಳೆಯ ಕೆಲಸ ಮಾಡಿದ್ದೇನೆ. ನನ್ನ ಅವಧಿಯಲ್ಲಿ ಸರ್ಕಾರ ನೀಡಿದ ಗುರಿಯನ್ನು ಮೀರಿ ಆದಾಯ ಹೆಚ್ಚಳ ಮಾಡಿದ್ದೆ. ಈಗ ಅವಕಾಶ ನೀಡಿದರೆ ಉತ್ತಮ ಕೆಲಸ ಮಾಡುವ ಇಂಗಿತವನ್ನು ವ್ಯಕ್ತಪಡಿಸಿದರು.

ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರ. ಪಕ್ಷದ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ದರಾಗಬೇಕು. ನಾನು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಿಲ್ಲ. ಅವಕಾಶ ನೀಡಿದರೆ ಕೆಲಸ ಮಾಡುತ್ತೇನೆ ಎಂದು ಹೇಳಿದರು.  ಪ್ರಾದೇಶಿಕ ಅಸಮತೋಲನ ಸರಿಪಡಿಸಬೇಕಾದರೆ ದಾವಣಗೆರೆ ಜಿಲ್ಲೆಗೆ ಸಚಿವ ಸ್ಥಾನವನ್ನು ನೀಡಬೇಕು.

ಈ ಹಿಂದೆ ಜಿಲ್ಲೆಯ ಶಾಸಕರು ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸದ್ದೇವು. ಜಿಲ್ಲೆಗೊಂದು ಸಚಿವ ಸ್ಥಾನ ಸಿಗಬೇಕೆಂಬುದು ಕಾರ್ಯಕರ್ತರ ಒತ್ತಾಸೆಯಾಗಿದೆ ಎಂದರು. ದಾವಣಗೆರೆ ಮಧ್ಯಕರ್ನಾಟಕದ ರಾಜಧಾನಿಯಾಗಿದೆ. ರಾಜಕೀಯವಾಗಿ, ಶೈಕ್ಷಣಿಕವಾಗಿ ದೊಡ್ಡ ಇತಿಹಾಸವಿದೆ. ಜೊತೆಗೆ ನಮ್ಮ ಜಿಲ್ಲೆ ಬಿಜೆಪಿಯ ಭದ್ರಕೋಟೆ. ಇಲ್ಲಿಗೆ ಮಂತ್ರಿ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ ಎಂದು ಸಮರ್ಥಿಸಿಕೊಂಡರು.

ನಾನು ಕೇಂದ್ರ ಸಚಿವರಾದ ಸದಾನಂದಗೌಡ, ಪ್ರಹ್ಲಾದ್ ಜೋಷಿ, ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೇರಿದಂತೆ ಅನೇಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ. ಮಂತ್ರಿ ಸ್ಥಾನ ನೀಡುವುದು ಮುಖ್ಯಮಂತ್ರಿ ಹಾಗೂ ಹೈಕಮಾಂಡ್ ನಿರ್ಧಾರ ಎಂದು ಹೇಳಿದರು.

ಯಡಿಯೂರಪ್ಪ ಅವರೇ ನಮ್ಮ ನಾಯಕರು. ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ನಾಯಕತ್ವ ಬದಲಾವಣೆ ಎಂಬುದು ಊಹಾಪೆÇೀಹವಷ್ಟೇ ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಹಾಗಾಗಿ ಅವರ ನಾಯಕತ್ವಕ್ಕೆ ಯಾವುದೇ ಕಂಟಕವಿಲ್ಲ ಎಂದು ಸ್ಪಷ್ಟಪಡಿಸಿದರು.

Facebook Comments