ಬಿಎಸ್‍ವೈಗಿಂತ ಮೊದಲೇ ದೆಹಲಿಗೆ ಹಾರಿದ ರೇಣುಕಾಚಾರ್ಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಸೆ.17-ಬಹುದಿನಗಳ ನಂತರ ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ವಿಸ್ತರಣೆ ಸಂಬಂಧ ದೆಹಲಿ ಪ್ರಯಾಣ ಕೈಗೊಳ್ಳುತ್ತಿದ್ದಂತೆ ಸಚಿವ ಸ್ಥಾನ ಆಕಾಂಕ್ಷಿಗಳ ಲಾಬಿ ಹೆಚ್ಚಾಗಿದೆ. ಈಗಾಗಲೇ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ದೆಹಲಿಗೆ ದೌಡಾಯಿಸಿ, ತಮ್ಮನ್ನು ಈ ಬಾರಿ ಸಂಪುಟಕ್ಕೆ ತೆಗೆದುಕೊಳ್ಳುವಂತೆ ವರಿಷ್ಠರ ಮೂಲಕ ಒತ್ತಡ ಹಾಕಿದ್ದಾರೆ.

ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೇರಿದಂತೆ ಕೆಲವು ಪ್ರಮುಖರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ. ದೆಹಲಿಯಲ್ಲಿರುವ ರೇಣುಕಾಚಾರ್ಯ ಪ್ರತಿಕ್ರಿಯಿಸಿ, ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ದನಾಗಿದ್ದೇನೆ. ಪ್ರಾದೇಶಿಕ ಅಸಮತೋಲನ ನಿವಾರಣೆಯಾಗಬೇಕಾದರೆ ದಾವಣಗೆರೆ ಜಿಲ್ಲೆಗೆ ಮಂತ್ರಿ ಸ್ಥಾನ ನೀಡಬೇಕೆಂದು ಮನವಿ ಮಾಡಿದರು.

ದಾವಣಗೆರೆ ಮಧ್ಯ ಕರ್ನಾಟಕದ ರಾಜಧಾನಿಯಾಗಿದ್ದು, ನಮ್ಮ ಜಿಲ್ಲೆಯಿಂದ ಯಾರೊಬ್ಬರನ್ನು ಸಂಪುಟಕ್ಕೆ ತೆಗೆದುಕೊಂಡಿಲ್ಲ. ಜಿಲ್ಲೆಗೆ ಮಂತ್ರಿ ಸ್ಥಾನ ನೀಡಬೇಕೆಂಬುದು ಕಾರ್ಯಕರ್ತರ ಆಗ್ರಹವಾಗಿದೆ. ವರಿಷ್ಠರು ಏನೇ ನಿರ್ಧಾರ ತೆಗೆದುಕೊಂಡರೂ ಅದಕ್ಕೆ ಬದ್ದರಾಗಿರುತ್ತೇವೆ ಎಂದು ಪುನರುಚ್ಚರಿಸಿದರು.  ಮೂಲಗಳ ಪ್ರಕಾರ ಸಂಪುಟ ಪುನಾರಚನೆ ಹಾಗೂ ವಿಸ್ತರಣೆಯಾಗುವ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ನವದೆಹಲಿಗೆ ಆಗಮಿಸಿದ್ದಾರೆ ಎನ್ನಲಾಗುತ್ತಿದೆ.

ಮುಖ್ಯಮಂತ್ರಿ ಯಡಿಯೂರಪ್ಪನವರ ಆಪ್ತರೆಂದೇ ಗುರುತಿಸಿಕೊಂಡಿರುವ ಎಂ.ಪಿ.ರೇಣುಕಾಚಾರ್ಯ ಈ ಬಾರಿ ಶತಾಯಗತಾಯ ಸಂಪುಟಕ್ಕೆ ಸೇರ್ಪಡೆಯಾಗಲೇಬೇಕೆಂದು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಈಗಾಗಲೇ ನವದೆಹಲಿಯಲ್ಲಿ ಪಕ್ಷದ ಕೆಲವು ಪ್ರಮುಖ ನಾಯಕರನ್ನು ಭೇಟಿಯಾಗಿದ್ದಾರೆ.

ಈ ಹಿಂದೆಯೂ ಎರಡು ಬಾರಿ ಸಂಪುಟ ವಿಸ್ತರಣೆಯಾದಾಗ ರೇಣುಕಾಚಾರ್ಯ ಅವರ ಹೆಸರು ಕೇಳಿಬಂದಿತ್ತಾರೂ ಕೂದಲೆಳೆ ಅಂತರದಲ್ಲಿ ಕೈತಪ್ಪಿತ್ತು. ಇದೀಗ 15 ದಿನಗಳ ಅಂತರದಲ್ಲಿ ಎರಡು ಬಾರಿ ದೆಹಲಿಗೆ ಭೇಟಿ ಕೊಟ್ಟು ಪಕ್ಷದ ನಾಯಕರನ್ನು ಭೇಟಿ ಮಾಡುತ್ತಿರುವುದು ಮಂತ್ರಿ ಸ್ಥಾನ ಗ್ಯಾರಂಟಿ ಎಂಬ ಮಾತುಗಳು ಕೇಳಿಬರುತ್ತಿವೆ.

ಆದರೆ ಈ ಬಗ್ಗೆ ಗುಟ್ಟು ಬಿಟ್ಟುಕೊಡದ ಅವರು, ಸಂಪುಟ ವಿಸ್ತರಣೆ, ಪುನಾರಚನೆ ಮುಖ್ಯಮಂತ್ರಿಗಳ ಪರಮಾಧಿಕಾರ. ಅವರು ಯಾವ ನಿರ್ಧಾರ ಕೈಗೊಳ್ಳುತ್ತಾರೋ ಅದಕ್ಕೆ ಎಲ್ಲರೂ ಬದ್ದರಾಗಬೇಕೆಂದು ಹೇಳಿದ್ದಾರೆ.  ದಾವಣಗೆರೆ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ 7ರಲ್ಲಿ ಬಿಜೆಪಿ ಶಾಸಕರೇ ಇರುವುದರಿಂದ ಯಾರಿಗಾದರೂ ಮಂತ್ರಿ ಸ್ಥಾನ ನೀಡಬೇಕೆಂಬ ಬೇಡಿಕೆ ಕೇಳಿಬಂದಿತ್ತು.
ಮೂರು ಬಾರಿ ಗೆದ್ದಿರುವ ತಮಗೆ ಮಂತ್ರಿ ಸ್ಥಾನ ನೀಡಬೇಕೆಂದು ರೇಣುಕಾಚಾರ್ಯ ವರಿಷ್ಠರ ಬಳಿ ಮನವಿ ಮಾಡಿಕೊಂಡಿದ್ದಾರೆ.

Facebook Comments