ಹಲವು ಮಂದಿ ಕಾಂಗ್ರೆಸ್‍ನಿಂದ ಬಿಜೆಪಿಗೆ ಬರಲು ತುದಿಗಾಲಲ್ಲಿ ನಿಂತಿದ್ದಾರೆ : ರೇಣುಕಾಚಾರ್ಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.20- ಕಾಂಗ್ರೆಸ್‍ನಿಂದ ಬಿಜೆಪಿಗೆ ಬರಲು ಹಲವು ಮಂದಿ ತುದಿಗಾಲಲ್ಲಿ ನಿಂತಿದ್ದಾರೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಆಂತರಿಕ ಅಸಮಾಧಾನದಿಂದ ಮತ್ತು ಸ್ವಾಭಿಮಾನಕ್ಕೆ ಧಕ್ಕೆಯಾದ ಹಿನ್ನೆಲೆಯಲ್ಲಿ 17 ಮಂದಿ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದರು.

ಈಗ ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಉಪ ಚುನಾವಣೆ ಎದುರಿಸುತ್ತಿದ್ದೇವೆ. ನಮ್ಮಲ್ಲಿ ಮೂಲ, ವಲಸಿಗ ಎಂಬ ಭೇದ ಭಾವವಿಲ್ಲ. 15 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುವುದು ಸೂರ್ಯ, ಚಂದ್ರರಷ್ಟೇ ಸತ್ಯ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ಭ್ರಮೆಯಲ್ಲಿದ್ದು, ಹಗಲು ಕನಸು ಕಾಣುತ್ತಿದ್ದಾರೆ. ಅದು ಸಾಧ್ಯವಾಗುವುದಿಲ್ಲ. ಕಾಂಗ್ರೆಸ್‍ನಲ್ಲಿ ಈಗಾಗಲೇ ಭಿನ್ನಾಭಿಪ್ರಾಯ ವ್ಯಕ್ತವಾಗಿದ್ದು, ಹಿರಿಯ ಕಾಂಗ್ರೆಸಿಗರು ಸಿದ್ದು ವಿರುದ್ಧ ತಿರುಗಿ ಬಿದಿದ್ದಾರೆ. ಕಾಡಿ ಬೇಡಿ ಅವರು ವಿರೋಧ ಪಕ್ಷದ ನಾಯಕನ ಸ್ಥಾನ ಪಡೆದಿದ್ದಾರೆ ಎಂದರು.ಸಿದ್ದರಾಮಯ್ಯ ಅವರು ಜವಾಬ್ದಾರಿ ಅರಿತು ಮಾತನಾಡಬೇಕು. ಅವರು ಸಿಎಂ ಆಗಿದ್ದಾಗ ಯಾವ ರೀತಿ ಆಡಳಿತ ಇತ್ತು ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಟೀಕಾ ಪ್ರಹಾರ ಮಾಡಿದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಸ್ಥಾನ ಕಳೆದುಕೊಂಡು ಹತಾಷೆಯಿಂದ ಗೊಂದಲಕರವಾದ ಹೇಳಿಕೆ ನೀಡುತ್ತಿದ್ದಾರೆ. ಬಿಎಸ್‍ವೈ ಸರ್ಕಾರವನ್ನು ಬೀಳಲು ಬಿಡುವುದಿಲ್ಲ ಎಂದು ಒಂದೆಡೆ ಹೇಳಿದರೆ, ಮತ್ತೊಂದೆಡೆ ಬಿಜೆಪಿಯ 15 ಮಂದಿ ಅಭ್ಯರ್ಥಿಗಳನ್ನು ಸೋಲಿಸುವುದೇ ನಮ್ಮ ಗುರಿ ಎಂದು ಹೇಳುತ್ತಾರೆ. ಹೀಗೆ ಗೊಂದಲದ ಹೇಳಿಕೆ ನೀಡುತ್ತಿರುವ ಅವರು ಮಾನಸಿಕವಾಗಿ ಅಸ್ವಸ್ಥರಾಗಿರಬೇಕು ಎಂದರು.

ವಚನ ಭ್ರಷ್ಟತೆ ಆಪಾದನೆಯಿಂದ ಪಾರಾಗಲು ಬಿಜೆಪಿ ಸರ್ಕಾರ ಬೀಳಲು ಬಿಡುವುದಿಲ್ಲ ಎಂಬ ಹೇಳಿಕೆ ನೀಡಿರಬಹುದೆಂದು ಅಂದುಕೊಂಡಿದ್ದೆವು. ಆದರೆ, ಇದೀಗ ಗೊಂದಲದ ಹೇಳಿಕೆ ನೀಡುತ್ತಿದ್ದಾರೆ. ಎಚ್‍ಡಿಕೆ ಅವರಲ್ಲಿ ಸೋಲಿಸುವ-ಗೆಲ್ಲಿಸುವ ಶಕ್ತಿ ಇಲ್ಲ. ಉಪ ಚುನಾವಣೆ ಆದ ನಂತರ ಅವರ ಪಕ್ಷವೇ ಇರುವುದಿಲ್ಲ ಎಂದು ವ್ಯಂಗ್ಯವಾಡಿದರು.

Facebook Comments