ಕೊಡಗು ನೆರೆ ಹಾವಳಿ ಪರಿಹಾರಕ್ಕಾಗಿ ರಾಷ್ಟ್ರಪತಿಗೆ ಸಿಎಂ ಮೊರೆ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy-ramanath

ಬೆಂಗಳೂರು, ಆ.30- ಕೊಡಗು ಸೇರಿದಂತೆ ಮಲೆನಾಡು ಭಾಗದಲ್ಲಿ ಅತಿವೃಷ್ಟಿ ಯಿಂದಾಗಿರುವ ಅನಾಹುತಗಳ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಚಿವ ಬಂಡೆಪ್ಪ ಕಾಶಂಪೂರ್ ಅವರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ವರದಿ ಸಲ್ಲಿಸಿ ಕೇಂದ್ರ ಸರ್ಕಾರದಿಂದ ಪರಿಹಾರ ಕೊಡಿಸಲು ಮನವಿ ಮಾಡಿದ್ದಾರೆ. ಸರ್ಕಾರಕ್ಕೆ ನೂರು ದಿನ ಪೂರ್ಣಗೊಂಡ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ರಾಜ್ಯ ಸರ್ಕಾರದ ಪ್ರಮುಖರು ಮಧ್ಯಾಹ್ನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ  ಮಾಡಿದರು.

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಯಿಂದಾಗಿ ಶೇ.80ರಷ್ಟು ಕೊಡಗು ಜಿಲ್ಲೆಯೇ ಕೊಚ್ಚಿ ಹೋಗಿದೆ. ಪ್ರಾಥಮಿಕ ಅಂದಾಜಿನ ಪ್ರಕಾರ ಸುಮಾರು 3 ಸಾವಿರ ಕೋಟಿ ರೂ. ನಷ್ಟವಾಗಿದೆ. ಸುಮಾರು 15ಕ್ಕೂ ಹೆಚ್ಚು ಮಂದಿಯ ಜೀವ ಹಾನಿಯಾಗಿದೆ. ಸಾವಿರಾರು ಜಾನುವಾರುಗಳು ಸಾವನ್ನಪ್ಪಿವೆ. ರಸ್ತೆ, ಸೇತುವೆ, ಬೆಟ್ಟ-ಗುಡ್ಡ ಎಲ್ಲವೂ ಕೊಚ್ಚಿ ಹೋಗಿವೆ. ಸಾವಿರಾರು ಎಕರೆ ಕೃಷಿ ಬೆಳೆ, ಕಾಫಿತೋಟ ನಾಶವಾಗಿದೆ.

ರಾಜ್ಯ ಸರ್ಕಾರ ಈವರೆಗೂ ತನ್ನ ಆರ್ಥಿಕ ಸಂಪನ್ಮೂಲದಲ್ಲೇ ಪರಿಹಾರ ಕಾಮಗಾರಿಗಳನ್ನು ಕೈಗೊಂಡಿದೆ, ಈ ಬಗ್ಗೆ ಈಗಾಗಲೇ ರಾಜ್ಯಪಾಲರ ಮೂಲಕ ತಮಗೆ ವರದಿಯನ್ನು ಕಳುಹಿಸಲಾಗಿದೆ. ಕೇಂದ್ರ ಸರ್ಕಾರ ಎನ್‍ಡಿಆರ್‍ಎಫ್ ತಂಡವನ್ನು ಕಳುಹಿಸಿಕೊಟ್ಟಿದ್ದನ್ನು ಬಿಟ್ಟರೆ ಬೇರೆ ಯಾವುದೇ ರೀತಿಯ ನೆರವನ್ನು ನೀಡಿಲ್ಲ ಎಂದು ರಾಷ್ಟ್ರಪತಿಯವರಿಗೆ ವಿವರಣೆ ನೀಡಿದ್ದಾರೆ. ಕೇರಳ ರಾಜ್ಯಕ್ಕೆ ಪ್ರಧಾನಿಯವರು ಭೇಟಿ ನೀಡಿ ವೈಮಾನಿಕ ಸಮೀಕ್ಷೆ ನೀಡಿದ್ದಾರೆ. ಜೊತೆಗೆ 500 ಕೋಟಿ ರೂ. ಪರಿಹಾರ ಘೋಷಿಸಲಾಗಿದೆ. ಕರ್ನಾಟಕದಲ್ಲಿ ಕೊಡಗು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಹಾನಿಯಾಗಿದೆ. ಆದರೆ ಕೇಂದ್ರ ಸರ್ಕಾರದಿಂದ ರಕ್ಷಣಾ ಸಚಿವೆ ನಿರ್ಮಲಾಸೀತಾರಾಮನ್ ಹೊರತುಪಡಿಸಿ ಪ್ರಮುಖ ಸಚಿವರು ಭೇಟಿ ನೀಡಿಲ್ಲ. ಸ್ಥಳೀಯ ಸ್ಥಿತಿಗತಿಯನ್ನು ಅರಿತುಕೊಳ್ಳುವ ಪ್ರಯತ್ನ ಮಾಡಿಲ್ಲ. ನೆರವನ್ನೂ ನೀಡಿಲ್ಲ. ರಾಜ್ಯ ಸರ್ಕಾರ ತನ್ನ ಆರ್ಥಿಕ ಸಂಪನ್ಮೂಲ ಹಾಗೂ ಜನರ ದೇಣಿಗೆಯಿಂದ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ರಾಜ್‍ನಾಥ್‍ಸಿಂಗ್ ಅವರನ್ನು ಭೇಟಿ ಮಾಡಿರುವ ಮುಖ್ಯಮಂತ್ರಿಗಳ ನಿಯೋಗ ಸಮಗ್ರ ಲಿಖಿತ ವರದಿಯನ್ನು ಸಲ್ಲಿಸಿದೆ.  ಇದೇ ಸಂದರ್ಭದಲ್ಲಿ ಕರ್ನಾಟಕದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ರೈತರ ಸಾಲ ಮನ್ನಾ ಮಾಡಲಾಗಿದೆ. ಖಾಸಗಿ ಲೇವಾದೇವಿದಾರರಿಂದ ಜನಸಾಮಾನ್ಯರಿಗಾಗುತ್ತಿರುವ ಕಿರುಕುಳ ತಪ್ಪಿಸಲು ಖಾಸಗಿ ಲೇವಾದೇವಿ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದ್ದು, ಅದನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ತಿದ್ದುಪಡಿ ಕಾಯ್ದೆಯನ್ನು ಮೊದಲು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗುವುದು, ನಂತರ ಅಂತಿಮವಾಗಿ ರಾಷ್ಟ್ರಪತಿಯವರ ಸಹಿ ಬೇಕಿದ್ದು, ಕಾಯ್ದೆ ತಮ್ಮ ಬಳಿ ಬಂದಾಗ ಸಹಿ ಹಾಕಿ ಕೊಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

Facebook Comments

Sri Raghav

Admin