ರಸ್ತೆ ಗುಂಡಿಗಳಿಗೆ ಪೂಜೆ ಸಲ್ಲಿಸಿ ಆಪ್‍ನಿಂದ ವಿನೂತನ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.20- ನಗರದ ರಸ್ತೆಗಳು ಗುಂಡಿಗಳಾಗಿ ಪರಿವರ್ತನೆಯಾಗಿರುವುದನ್ನು ಖಂಡಿಸಿ ಆಮ್ ಆದ್ಮಿ ಪಕ್ಷ ಗುಂಡಿ ಬಿದ್ದ ರಸ್ತೆಗಳಿಗೆ ಪೂಜೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿತು. ನಗರದಲ್ಲಿ ಬಿದ್ದಿರುವ ರಸ್ತೆ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಅಧಿಕಾರಿಗಳು ಸೆ.30ರ ಗಡುವು ನೀಡಿದ್ದರೂ ಇದುವರೆಗೂ ಸಮರ್ಪಕವಾಗಿ ರಸ್ತೆ ಗುಂಡಿಗಳನ್ನು ಮುಚ್ಚಿಲ್ಲ.

ಇದರ ಜತೆಗೆ ಇತ್ತೀಚೆಗೆ ಬಿದ್ದ ಭಾರೀ ಮಳೆಯಿಂದ ರಸ್ತೆಗಳಲ್ಲಿ ಆಳುದ್ದ ಗುಂಡಿ ಕಾಣಿಸಿಕೊಂಡಿದ್ದು, ಸಾಕಷ್ಟು ಅನಾಹುತಗಳಾಗಿರುವ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿರೆಡ್ಡಿ ನೇತೃತ್ವದಲ್ಲಿ ನೂರಾರು ಆಪ್ ಕಾರ್ಯಕರ್ತರು 198 ವಾರ್ಡ್‍ಗಳಲ್ಲಿ ಗುಂಡಿಗಳಿಗೆ ಅರಿಶಿನ-ಕುಂಕುಮ-ಹೂ ಹಾಕಿ ಕಾಯಿ ಒಡೆದು ವಿನೂತನವಾಗಿ ಪ್ರತಿಭಟನೆ ನಡೆಸಿದರು.

ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಹಲವಾರು ಬಾರಿ ಬಿಬಿಎಂಪಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ಪೂಜೆ ಸಲ್ಲಿಸುವ ಮೂಲಕ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಪೃಥ್ವಿರೆಡ್ಡಿ ತಿಳಿಸಿದರು.

ಕಳೆದ ನಾಲ್ಕು ವರ್ಷಗಳಲ್ಲಿ 20 ಸಾವಿರ ಕೋಟಿ ಹಣ ಬಿಡುಗಡೆಯಾಗಿದ್ದರೂ ನಗರದ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳು ಮಾತ್ರ ಮಾಯವಾಗುತ್ತಿಲ್ಲ. ಹಣ ಏನಾಯಿತು ಎಂದರೆ ಅಧಿಕಾರಿಗಳು ಸಮರ್ಪಕ ಉತ್ತರ ನೀಡುತ್ತಿಲ್ಲ. ಹೀಗಾಗಿ ರಸ್ತೆ ಗುಂಡಿ ಮುಚ್ಚಲು 15 ದಿನಗಳ ಗಡುವು ನೀಡುತ್ತೇವೆ. ಇಲ್ಲವಾದರೆ ನಾವು ಕಾನೂನು ಹೋರಾಟ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.

Facebook Comments