ಬೈಕ್‍ನಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿ ರೌಡಿಯ ಬರ್ಬರ ಕೊಲೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜ.23- ಬೈಕ್‍ನಲ್ಲಿ ಹೋಗುತ್ತಿದ್ದ ರೌಡಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ನಾಗರಬಾವಿ ನಿವಾಸಿ ಲೋಕೇಶ್ ಅಲಿಯಾಸ್ ಸ್ಮಶಾನ ಲೋಕಿ(35) ಕೊಲೆಯಾದ ರೌಡಿ.

ರೌಡಿಶೀಟರ್ ಸೈಕಲ್ ರವಿಯ ಸಹಚರನಾಗಿದ್ದ ಲೋಕೇಶ್, ಫೈನಾನ್ಸ್ ಮತ್ತು ಬಡ್ಡಿ ವ್ಯವಹಾರ ಮಾಡಿಕೊಂಡಿದ್ದ. ಈತ ರೌಡಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಎಂದು ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ. ಚಾಮರಾಜಪೇಟೆಯ ಅಜಾದ್‍ನಗರದ 5ನೇ ಕ್ರಾಸ್‍ನಲ್ಲಿ ರಾತ್ರಿ11.30ರ ಸುಮಾರಿನಲ್ಲಿ ಲೋಕೇಶ್ ಬೈಕ್‍ನಲ್ಲಿ ಹೋಗುತ್ತಿದ್ದಾಗ ದುಷ್ಕರ್ಮಿಗಳು ಏಕಾಏಕಿ ಬೈಕ್ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಭೀಕರವಾಗಿ ನಡುರಸ್ತೆಯಲ್ಲೇ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಸುದ್ದಿ ತಿಳಿದು ಚಾಮರಾಜಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಹಳೆ ದ್ವೇಷದಿಂದ ಈ ಕೊಲೆ ನಡೆದಿರಬಹುದೆಂಬ ಶಂಕೆ ವ್ಯಕ್ತಪಡಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಪತ್ತೆಗೆ ಶೋಧ ಕೈಗೊಂಡಿದ್ದಾರೆ.

Facebook Comments