ಮೈಸೂರು ದಸರಾ ಕುರಿತು ಸೆ.8 ರಂದು ಬೆಂಗಳೂರಿನಲ್ಲಿ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಸೆ.05- ಡ್ರಗ್ಸ್ ವಿಷಯದಲ್ಲಿ ಯಾರೊಂದಿಗೂ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಜಿಲ್ಲಾ ವಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಪಶು ಮೊಬೈಲ್ ಆರೋಗ್ಯ ತಪಾಸಣಾ ವಾಹನಕ್ಕೆ ಚಾಲನೆ ನೀಡಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಡ್ರಗ್ಸ್ ವಿಷಯದಲ್ಲಿ ಯುವಜನತೆಯನ್ನು ತಪ್ಪು ದಾರಿಗೆ ಎಳೆಯಲಾಗುತ್ತಿದೆ. ಇದನ್ನು ಬೇರು ಸಮೇತ ಕಿತ್ತೊಗೆಯಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಗೃಹಸಚಿವ ಬಸವರಾಜ ಬೊಮ್ಮಾಯಿಯವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

ಡ್ರಗ್ಸ್ ಹಾವಳಿಯನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಎಲ್ಲಾ ರೀತಿಯ ಕಾನೂನು ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು. ನಿಮ್ಮ ಪಕ್ಷದ ಕಾರ್ತಿಕ ಎಂಬಾತನೆ ಇದರಲ್ಲಿದ್ದಾನಲ್ಲ ಎಂಬ ವರದಿಗಾರರ ಪ್ರಶ್ನೆಗೆ ಡ್ರಗ್ಸ್‍ಗೂ ನಮ್ಮ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ. ಈಗಾಗಲೇ ಆತನನ್ನು ಬಂಧಿಸಲಾಗಿದೆ. ಇದರಲ್ಲಿ ಯಾರೇ ಇರಲಿ ಅಥವಾ ಯಾವ ಪಕ್ಷದವರೇ ಇರಲಿ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ದಸರಾ ಸಭೆ: ಮೈಸೂರು ದಸರಾ ಕುರಿತು ಸೆ.8 ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದೆ. ನಂತರ ಸ್ಥಳೀಯ ಮಟ್ಟದಲ್ಲಿ ಜನಪ್ರತಿನಿಧಿಗಳು ಅಧಿಕಾರಿಗಳನ್ನೊಳಗೊಂಡ ಸಭೆ ನಡೆಸಿ ಅಂತಿಮವಾಗಿ ತೀರ್ಮಾನ ತೆಗೆದುಕೊಂಡು ಆ ನಂತರ ದಸರಾ ಆಚರಣೆ ಕುರಿತು ಪ್ರಕಟಿಸಲಾಗುವುದು ಎಂದು ಎಸ್.ಟಿ. ಸೋಮಶೇಖರ್ ತಿಳಿಸಿದರು.

ವಾಹನಕ್ಕೆ ಚಾಲನೆ: ಪಶು ಆರೋಗ್ಯ ತಪಾಸಣೆ ವಾಹನವು ಪ್ರತಿ ಗ್ರಾಮಗಳಿಗೆ ತೆರಳಲಿದೆ. ಪಶುಗಳ ಆರೋಗ್ಯ ತಪಾಸಣೆ ಮಾಡಿ ವೈದ್ಯರು ಸ್ಥಳದಲ್ಲೇ ಔಷಧಿ ಕೊಡುತ್ತಾರೆ. ಮುಂದಿ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲೂ ಮೊಬೈಲ್ ಆರೋಗ್ಯ ತಪಾಸಣಾ ವಾಹನ ಕಲ್ಪಿಸಲಾಗುತ್ತದೆ. ಇದರಿಂದ ಗ್ರಾಮೀಣ ಭಾಗದ ರೈತರಿಗೆ ಬಹಳ ಅನುಕೂಲವಾಗುತ್ತದೆ ಎಂದು ಸೋಮಶೇಖರ್ ತಿಳಿಸಿದರು.

Facebook Comments