ಸೌಹಾರ್ದಯುತವಾಗಿ ಪ್ರತಿಮೆ ವಿವಾದ ಬಗೆಹರಿಸಲಾಗುವುದು : ಬೊಮ್ಮಾಯಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.28-ಗಡಿ ಜಿಲ್ಲೆ ಬೆಳಗಾವಿಯಲ್ಲಿ ಉಂಟಾಗಿರುವ ಸಮಸ್ಯೆಯನ್ನು ಶಾಂತಿಯುತವಾಗಿ ಪರಿಹರಿಸಲು ಸರಕಾರ ಬದ್ದವಾಗಿದೆ. ಯಾರಾದರೂ ಹದ್ದುಮೀರಿ ವರ್ತಿಸಿದರೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಎಚ್ಚರಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರೂ ಸಹನೆಯಿಂದ ವರ್ತಿಸಬೇಕು. ಸಣ್ಣಪುಟ್ಟ ಸಮಸ್ಯೆಗಳಿದ್ದರೂ ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ. ಸಾರ್ವಜನಿಕರಿಗೆ ತೊಂದರೆ ಕೊಟ್ಟು ಕಾನೂನು ಸುವ್ಯಸವಸ್ಥೆ ಹಾಳು ಮಾಡಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದು ಗುಡುಗಿದರು.

ಅಲ್ಲಿನ ಪರಿಸ್ಥಿತಿ ಕುರಿತಂತೆ ನಾನು ಈಗಾಗಲೇ ಐಜಿ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿ ಮಾಹಿತಿ ಪಡೆದಿದ್ದೇನೆ. ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಲು ಏನೇನೋ ಬೇಕೋ ಆ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಲಾಗಿದೆ. ಸಾರ್ವಜನಿಕರು ಸಹ ಇಂತಹ ಸಂದರ್ಭದಲ್ಲಿ ಸಹನೆಯಿಂದ ವರ್ತಿಸಬೇಕು ಎಂದು ಮನವಿ ಮಾಡಿದರು.

ಸಂಗೊಳ್ಳಿ ರಾಯಣ್ಣ ಹಾಗೂ ಶಿವಾಜಿ ಇಬ್ಬರೂ ದೇಶಭಕ್ತರೇ. ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಮಹನೀಯರು. ಇಬ್ಬರ ಬಗ್ಗೆ ನಮಗೆ ಅಪಾರ ಗೌರವವಿದೆ. ಆ ಮಹಾತ್ಮರಿಗೆ ಮಸಿ ಬಳಿಯುವ ಕೆಲಸವನ್ನು ಯಾರೂ ಮಾಡಬಾರದು ಎಂದರು.

ಈಗಾಗಲೇ ನಾನು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಜೊತೆ ಮಾತುಕತೆ ನಡೆಸಿದ್ದೇನೆ. ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ ಎಂದು ಹೇಳಿದರು.

ನಿನ್ನೆ ಜಿಲ್ಲಾ ಉಸ್ತುವಾರಿ ಸಚಿವರೂ ಸಭೆ ನಡೆಸಿದ್ದಾರೆ. ಬೆಂಗಳೂರಿಂದ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಬೆಳಗಾವಿಗೆ ಹೋಗುತ್ತಿದ್ದಾರೆ. ಅಲ್ಲಿನ ಐಜಿ ಜೊತೆಗೂ ಮಾತಾಡಿದ್ದೇನೆ ಎಂದು ತಿಳಿಸಿದರು.

ಈ ಮಧ್ಯೆ ಇಂದು ಬೆಳಗ್ಗೆ ಎರಡೂ ಸಮುದಾಯದ ಜನ ಸೇರಿದ್ದರು. ಜಿಲ್ಲಾ ಉಸ್ತುವಾರಿ ಸಚಿವರು ಎರಡೂ ಸಮುದಾಯದ ಮುಖಂಡರ ಜೊತೆ ಚರ್ಚೆ ಮಾಡುತ್ತಾರೆ. ಸೌಹಾರ್ದಯುತವಾಗಿ ವಿವಾದ ಮುಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

# ಕಾನೂನು ಕೈಗೆತ್ತಿಕೊಳ್ಳಬಾರದು :
ಬೆಳಗಾವಿಯಲ್ಲಿ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು. ಸರ್ಕಾರ ನ್ಯಾಯಯುತವಾಗಿ ವಿವಾದವನ್ನು ಬಗೆಹರಿಸುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಸಂಬಂಧ ಘರ್ಷಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಾನೂನು ಪ್ರಕಾರವೇ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದರು.

ಈಗಾಗಲೇ ಮುಖ್ಯಮಂತ್ರಿ ಕೂಡ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಹಾಗಾಗಿ ಶಾಂತಿಯುತವಾಗಿ ವರ್ತಿಸಬೇಕು. ಮೊನ್ನೆ ವೈಮಾನಿಕ ಸಮೀಕ್ಷೆ ವೇಳೆ ಕೂಡ ಸಿಎಂ ಯಡಿಯೂರಪ್ಪ ಮಾತುಕತೆ ನಡೆಸಿದ್ದಾರೆ ಎಂದು ತಿಳಿಸಿದರು.

Facebook Comments

Sri Raghav

Admin