ವಿದ್ಯಾರ್ಥಿಗಳ ಸುರಕ್ಷತೆಗಾಗಿ ಸುಸಜ್ಜಿತ ಶಾಲಾ ಕಟ್ಟಡ : ಸಚಿವ ಸಿ.ಸಿ.ಪಾಟೀಲ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.8- ಲೋಕೋಪಯೋಗಿ ಇಲಾಖೆಯಿಂದ ಸುಸಜ್ಜಿತ ಶಾಲೆ, ಪ್ರೌಢಶಾಲೆಗಳ ಕಟ್ಟಡ ಹಾಗೂ ಅಂಗನವಾಡಿ ಕಟ್ಟಡಗಳ ನಿರ್ಮಾ ಣದ ಮಹತ್ವಾಕಾಂಕ್ಷಿ ಯೋಜನೆಯನ್ನು ಆದ್ಯತೆ ಮೇರೆಗೆ ಅನುಷ್ಠಾನ ಗೊಳಿಸಲಾಗಿದ್ದು, ಈ ಯೋಜನೆಗಳು ಪೂರ್ಣಗೊಳ್ಳುವ ಹಂತದಲ್ಲಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯ ಮತ್ತು ಸುರಕ್ಷತೆ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಲೋಕೋ ಪಯೋಗಿ ಇಲಾಖೆ ಈ ಕಟ್ಟಡಗಳನ್ನು ನಿರ್ಮಿಸುವ ಜವಾ ಬ್ಧಾರಿ ವಹಿಸಿಕೊಂಡಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ಸುಸಜ್ಜಿತ ಶಾಲೆ, ಪ್ರೌಢ ಶಾಲೆಗಳ ಕಟ್ಟಡ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಅಂಗನವಾಡಿ ಕಟ್ಟಡಗಳ ನಿರ್ಮಾಣ ಯೋಜನೆ ಅನುಷ್ಠಾನಗೊಳಿಸಲಾಗಿದೆ ಎಂದರು.

ಶಿಕ್ಷಣ ಇಲಾಖೆಯ ಸಹಯೋಗದಲ್ಲಿ 756 ಕೋಟಿ ರೂ. ವೆಚ್ಚದಲ್ಲಿ ರಾಜ್ಯಾದ್ಯಂತ 3,423 ಪ್ರಾಥಮಿಕ ಹಾಗು ಪ್ರೌಢಶಾಲೆಗಳ ಕಟ್ಟಡಗಳನ್ನು ನಿರ್ಮಿಸುವ ಗುರಿ ಹೊಂದಿದ್ದು, ಈ ಪೈಕಿ ಈಗಾಗಲೇ 2,684 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಉಳಿದ ಕಾಮಗಾರಿಗಳು ಮುಕ್ತಾಯದ ಹಂತದಲ್ಲಿವೆ. ಈ ಯೋಜನೆ ಯನ್ನು ನಬಾರ್ಡನ ಆರ್.ಐ.ಡಿ.ಎಫ್-25 ಅನ್ವಯ ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ 137 ಕೋಟಿ ರೂ. ವೆಚ್ಚದಲ್ಲಿ ಒಟ್ಟು 842 ಸುಸಜ್ಜಿತ ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸುವ ಕಾಮಗಾರಿಗಳನ್ನು ಲೋಕೋಪಯೋಗಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗಿದೆ. ಈ ಪೈಕಿ 525 ಕಾಮಗಾರಿಗಳನ್ನು ಈಗಾಗಲೇ ಪೂರ್ಣಗೊಳಿಸಲಾಗಿದೆ. ಉಳಿದವುಗಳನ್ನು ಮುಂದಿನ ಫೆಬ್ರವರಿ ಅಂತ್ಯದೊಳಗೆ ಪೂರ್ಣ ಗೊಳಿಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಹೆಚ್ಚಿನ ಮಕ್ಕಳನ್ನು ಶಾಲೆಗಳತ್ತ ಆಕರ್ಷಿಸಿ ಹೊಸ ಶೈಕ್ಷಣಿಕ ಕ್ರಾಂತಿಗೆ ಅವಕಾಶವಾಗುವ ನಿಟ್ಟಿನಲ್ಲಿ ಈ ಯೋಜನೆ ತುಂಬಾ ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಹೆಚ್ಚಿನ ಮಕ್ಕಳನ್ನು ಶಾಲೆಗಳತ್ತ ಆಕರ್ಷಿಸಿ ಹೊಸ ಶೈಕ್ಷಣಿಕ ಕ್ರಾಂತಿಗೆ ಅವಕಾಶವಾಗುವ ನಿಟ್ಟಿನಲ್ಲಿ ಈ ಯೋಜನೆಯು ತುಂಬಾ ಸಹಕಾರಿಯಾಗಲಿದೆ ಎಂದು ಸಚಿವರು ಆಶಾವಾದ ವ್ಯಕ್ತಪಡಿಸಿದ್ದಾರೆ.

Facebook Comments