ಶರತ್ ಬಚ್ಚೇಗೌಡ ಬಿಜೆಪಿಯಿಂದ ಔಟ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ನ.19- ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಹೊಸಕೋಟೆ ಉಪಚುನಾವಣೆಯ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ.

ತಕ್ಷಣದಿಂದಲೇ ಜಾರಿಯಾಗುವಂತೆ ಶರತ್ ಬಚ್ಚೇಗೌಡ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಉಚ್ಛಾಟನೆ ಮಾಡಲಾಗಿದ್ದು, ಅವರ ಜೊತೆ ಯಾರಾದರೂ ಗುರುತಿಸಿಕೊಂಡರೆ ಅವರನ್ನೂ ಸಹ ಪಕ್ಷದಿಂದ ಕಿತ್ತು ಹಾಕಲಾಗುವುದು ಎಂದು ಎಚ್ಚರಿಸಲಾಗಿದೆ.

ಹೊಸಕೋಟೆಯ ಉಪಚುನಾವಣೆಯಲ್ಲಿ ಮಾಜಿ ಸಚಿವ ಎಂಟಿಬಿ ನಾಗರಾಜ್ ವಿರುದ್ದ ಸ್ಫರ್ಧೆ ಮಾಡದಂತೆ ಶರತ್ ಬಚ್ಚೇಗೌಡರಿಗೆ ಸೂಚನೆ ನೀಡಲಾಗಿತ್ತು. ಆದರೆ ಪಕ್ಷದ ಆದೇಶವನ್ನು ಧಿಕ್ಕರಿಸಿಯೂ ಅವರು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಹಿಂಪಡೆಯುವಂತೆ ಖುದ್ದು ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಅನೇಕರು ಪರಿ ಪರಿಯಾಗಿ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

ಈ ಹಿಂದೆ ಷರತ್ ಬಚ್ಚೇಗೌಡಗೆ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಸ್ಥಾನವನ್ನು ನೀಡಲಾಗಿತ್ತು. ಆದರೆ ಇದನ್ನು ಒಪ್ಪಿಕೊಳ್ಳದೆ ಅವರು ನಿರಾಕರಿಸಿದ್ದರು. ಹೀಗೆ ಪಕ್ಷದ ಆದೇಶವನ್ನು ಉಲ್ಲಂಘಿಸಿ ಕಣದಲ್ಲೇ ಉಳಿದಿರುವ ಕಾರಣ ಉಚ್ಛಾಟನೆ ಮಾಡಲಾಗಿದೆ.

Facebook Comments