ಬಿಜೆಪಿಯಿಂದ ಕಾಂಗ್ರೆಸ್‍ಗೆ ಬರಲು ಅರ್ಜಿ ಹಾಕಿದ್ದಾರೆ: ಡಿ.ಕೆ.ಶಿವಕುಮಾರ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ನ.23- ಕಾಂಗ್ರೆಸ್‍ನಿಂದ ಬಿಜೆಪಿಗೆ ಹೋಗುವವರು ಯಾರೂ ಇಲ್ಲ. ಆದರೆ ಬಿಜೆಪಿಯಿಂದಲೇ ಕಾಂಗ್ರೆಸ್‍ಗೆ ಸೇರ್ಪಡೆಯಾಗಲು ಸಾಕಷ್ಟು ಮಂದಿ ಅರ್ಜಿ ಸಲ್ಲಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.  ಕೊಪ್ಪಳದ ಹಿಟ್ನಾಳ್ ಶಾಸಕ ರಾಘವೇಂದ್ರ ಹಿಟ್ನಾಳ್ ಅವರ ಮನೆಯಲ್ಲಿ ಉಪಾಹಾರ ಸೇವಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ರೈತರ ಹಿತ ಮುಖ್ಯವಾಗಿಲ್ಲ. ಬದಲಾಗಿ ಕುರ್ಚಿ ಭದ್ರ ಮಾಡಿಕೊಳ್ಳುವುದಕ್ಕೆ ಹೆಚ್ಚಿನ ಆದ್ಯತೆ ಕೊಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೊಪ್ಪಳ, ರಾಯಚೂರು, ಬಳ್ಳಾರಿ ಭಾಗದಲ್ಲಿ ಭತ್ತದ ಬೆಲೆ ಕುಸಿತವಾಗಿದೆ. ಕ್ವಿಂಟಾಲ್‍ಗೆ 900 ರೂ. ಇದೆ. ಬೆಲೆ ಕುಸಿತದಿಂದ ರೈತರು ಕಂಗಾಲಾಗಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಿ ಬೆಂಬಲ ಬೆಲೆ ಘೋಷಣೆ ಮಾಡಬೇಕು. ಹೆಚ್ಚುವರಿಯಾಗಿ ಕನಿಷ್ಠ 500 ರೂ.ಗಳನ್ನಾದರೂ ಕೊಟ್ಟು ಭತ್ತ ಖರೀದಿ ಕೇಂದ್ರವನ್ನು ಆರಂಭಿಸಬೇಕು. ಜೊತೆಗೆ ಖರೀದಿ ಕೇಂದ್ರ ತೆರೆಯಲು ಆರ್ಥಿಕ ಸಹಾಯ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಕೊಬ್ಬರಿ ಖರೀದಿಗೆ ಬೆಂಬಲ ಬೆಲೆ ಕೊಡಲಾಗಿದೆ. ರೈತರಲ್ಲಿ ಕೊಬ್ಬರಿ ಬೆಳೆದವರು, ಭತ್ತ ಬೆಳೆದವರು ಎಂಬ ತಾರತಮ್ಯ ಮಾಡಬಾರದು. ಯಾವ ಕಾಲಕ್ಕೂ ರೈತರ ಪರಿಸ್ಥಿತಿ ಸುಧಾರಿಸಿಲ್ಲ. ರಸಗೊಬ್ಬರ ಬಿತ್ತನೆ ಬೀಜದ ಬೆಲೆ ಏರುತ್ತಲೇ ಇದೆ. ಉತ್ಪಾದನಾ ವೆಚ್ಚ ಹೆಚ್ಚಾಗುತ್ತಿದೆ. ಈ ನಡುವೆ ರಾಜ್ಯ ಸರ್ಕಾರ ಪ್ರತಿ ಯೂನಿಟ್‍ಗೆ 40 ಪೈಸೆ ವಿದ್ಯುತ್ ದರ ಏರಿಕೆ ಮಾಡಿದೆ. ನಮ್ಮ ಸರ್ಕಾರದ ಅವಯಲ್ಲಿ ಕನಿಷ್ಠ 7 ಗಂಟೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿತ್ತು.

ಈಗ 3ರಿಂದ 4 ಗಂಟೆ ಮಾತ್ರ ಪೂರೈಕೆ ಮಾಡಲಾಗುತ್ತಿದೆ. ವಿದ್ಯುತ್ ಸಮಸ್ಯೆಯ ಬಗ್ಗೆ ಮೂರ್ನಾಲ್ಕು ದಿನಗಳೊಳಗೆ ರಾಜ್ಯದ ಸಂಪೂರ್ಣ ಮಾಹಿತಿ ಪಡೆದುಕೊಳ್ಳುತ್ತೇನೆ. ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ.

ಆದರೂ ಸರಿಯಾಗಿ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ರೈತರ ಸಮಸ್ಯೆ ಅರಿಯಲು ನಿನ್ನೆ ವಿಜಯನಗರದ ಹೆಬ್ಬಾಗಿಲಿನಿಂದ ರಾಜ್ಯ ಪ್ರವಾಸ ಆರಂಭಿಸಿದ್ದೇನೆ. ಯಾವುದೇ ಕೃಷಿ ಉತ್ಪನ್ನಗಳ ಬೆಲೆ ಕುಸಿತ ಕಂಡರೂ ಸರ್ಕಾರ ಮಧ್ಯಪ್ರವೇಶ ಮಾಡಿ ಬೆಂಬಲ ಬೆಲೆಯಡಿ ಖರೀದಿ ಮಾಡಬೇಕೆಂದು ಒತ್ತಾಯಿಸಿದರು.

Facebook Comments