SDPF, PFI ಹಾಗೂ DYAF ಸಂಘಟನೆಗಳನ್ನ ನಿಷೇಧಿಸಿ ; ಶೋಭಾ ಕರಂದ್ಲಾಜೆ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು,ಡಿ.25-ಕರ್ನಾಟಕದಲ್ಲಿ ಪದೇ ಪದೇ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತಂದು ಅಶಾಂತಿಯನ್ನು ಉಂಟು ಮಾಡುತ್ತಿರುವ ಎಸ್‍ಡಿಪಿಐ, ಪಿಎಫ್‍ಐ ಹಾಗೂ ಡಿವೈಎಫ್ ಸಂಘಟನೆಗಳಿಗೆ ಕೇಂದ್ರ ಸರ್ಕಾರ ನಿಷೇಧ ಹೇರಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿಯಲ್ಲಿ ಯಾವುದೇ ಕೋಮುಗಲಭೆ ಸಂಭವಿಸಿದರೆ ಅದರ ಹಿಂದೆ ಎಸ್‍ಡಿಪಿಐ ಮತ್ತು ಪಿಎಫ್‍ಐ ಸಂಘಟನೆಗಳ ಕಾರ್ಯಕರ್ತರೇ ಶಾಮೀಲಾಗಿರುತ್ತಾರೆ. ಕೂಡಲೇ ಕೇಂದ್ರ ಸರ್ಕಾರ ಎರಡೂ ಸಂಘಟನೆಗಳನ್ನು ನಿಷೇಧ ಮಾಡಬೇಕೆಂದು ಒತ್ತಾಯಿಸಿದರು.

ಕೇರಳಕ್ಕೆ ಭೇಟಿ ಕೊಟ್ಟ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪನವರ ಕಾರಿಗೆ ಡಿವೈಎಫ್‍ಐ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ಎಲ್ಲರಿಗೂ ಅವಕಾಶವಿದೆ. ಆದರೆ ಯಾರೂ ಕೂಡ ಕಾನೂನು ಕೈಗೆತ್ತಿಕೊಂಡರೆ ಸುಮ್ಮನಿರಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಕೇಂದ್ರ ಗೃಹಸಚಿವರಾದ ಅಮಿತ್ ಷಾ ಅವರಿಗೆ ನಾನೇ ಪತ್ರ ಬರೆದು ಈ ಮೂರು ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯ ಮಾಡುತ್ತೇನೆ. ಮೊನ್ನೆ ನಡೆದ ಮಂಗಳೂರು ಗಲಭೆಯಲ್ಲಿ ಇದೇ ಸಂಘಟನೆಯವರು ಶಾಮೀಲಾಗಿದ್ದಾರೆ ಎಂದು ಶೋಭಾ ಕರಂದ್ಲಾಜೆ ಆರೋಪಿಸಿದರು.

ಮಂಗಳೂರು ಗಲಭೆ ಒಂದು ವ್ಯವಸ್ಥಿತ ಷಡ್ಯಂತ್ರ ಎಂಬುದು ಮೇಲ್ನೋಟಕ್ಕೆ ಸಾಬೀತಾಗಿದೆ. ಪ್ರತಿಪಕ್ಷಗಳು ಅನಗತ್ಯವಾಗಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿವೆ ಪ್ರತಿಭಟನೆ ನಡೆಸಿದವರು ಅಮಾಯಕರು ಎಂದು ಹೇಳುತ್ತಿರುವವರು ಒಂದು ಬಾರಿ ಸಿಸಿಟಿವಿ ದೃಶ್ಯಾವಳಿಗಳನ್ನು ನೋಡಿ ಮಾತನಾಡಲಿ ಎಂದು ತಿರುಗೇಟು ನೀಡಿದರು.

Facebook Comments