ಯಡಿಯೂರಪ್ಪ ಖಾತೆ ಹಂಚಲಾರದಷ್ಟು ಅಸಮರ್ಥರಾಗಿದ್ದಾರೆ: ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

ಕಲಬುರಗಿ, ಫೆ.8- ಮುಖ್ಯಮಂತ್ರಿ ಯಡಿಯೂರಪ್ಪ ಖಾತೆ ಹಂಚಲಾರದಷ್ಟು ಅಸಮರ್ಥರಾಗಿದ್ದಾರೆ. ಪ್ರತಿಯೊಂದಕ್ಕೂ ಹೈಕಮಾಂಡ್ ಎಂದು ಹೇಳುತ್ತಾರೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಒಂದೇ ಅಲ್ಲದೆ ಖಾತೆ ಹಂಚಿಕೆಗೂ ಹೈಕಮಾಂಡ್ ಮೇಲೆ ಅವಲಂಬಿತರಾಗಿದ್ದಾರೆ.

ಮುಖ್ಯಮಂತ್ರಿಯಾಗಿ ಯಾವುದೇ ಸ್ವಾತಂತ್ರ್ಯವಿಲ್ಲ. ಕಲ್ಯಾಣ ಕರ್ನಾಟಕ ಸೇರಿದಂತೆ 13 ಜಿಲ್ಲೆಗಳಿಗೆ ಸಂಪುಟದಲ್ಲಿ ಪ್ರಾತಿನಿಧ್ಯ ಸಿಕ್ಕಿಲ್ಲ. ಸಾಮಾಜಿಕ ಸಮಾನತೆ ಕಾಪಾಡಲಾಗಿಲ್ಲ. ಇದರಿಂದ ಅಸಮಾಧಾನ ಹೆಚ್ಚಾಗುತ್ತದೆ. ಸರ್ಕಾರದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದರು. ಕೇಂದ್ರ ಸರ್ಕಾರ ಬಜೆಟ್‍ನಲ್ಲಿ ರಾಜ್ಯದ ತೆರಿಗೆ ಪಾಲನ್ನು ನೀಡಿಲ್ಲ. ಇದು ಮುಂದಿನ ತಿಂಗಳು ಮಂಡನೆಯಾಗಲಿರುವ ರಾಜ್ಯ ಬಜೆಟ್ ಮೇಲೂ ಪರಿಣಾಮ ಬೀರಲಿದೆ ಎಂದು ಅವರು ಹೇಳಿದರು.

ಮೀಸಲಾತಿ ಕೊಡಬೇಡಿ ಎಂದಿಲ್ಲ: ಬಡ್ತಿ ಮೀಸಲಾತಿ ಆಯಾ ರಾಜ್ಯಗಳ ವಿವೇಚನೆಗೆ ಬಿಟ್ಟ ವಿಚಾರ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ, ಬಡ್ತಿ ಮೀಸಲಾತಿ ಕೊಡಬೇಡಿ ಎಂದು ಎಲ್ಲೂ ಹೇಳಿಲ್ಲ. ನಾವು ಮಾಡಿದ ಕಾನೂನು ಹಾಗೆಯೇ ಇದೆ. ಮೀಸಲಾತಿಯನ್ನು ತೆಗೆದುಹಾಕಲಾಗಿಲ್ಲ. ಸುಪ್ರೀಂಕೋರ್ಟ್ ಆದೇಶ ಪೂರ್ತಿಯಾಗಿ ಓದಿದ ನಂತರ ಉತ್ತರಿಸುತ್ತೇನೆ ಎಂದು ಸುದ್ದಿಗಾರರಿಗೆ ಹೇಳಿದರು.

ವಿಳಂಬ: ಕೆಪಿಸಿಸಿ ಅಧ್ಯಕ್ಷರನ್ನು ನೇಮಕ ಮಾಡುವಲ್ಲಿ ಸ್ವಲ್ಪ ವಿಳಂಬವಾಗಿದೆ. ಶೀಘ್ರದಲ್ಲೇ ನೇಮಕವಾಗಲಿದೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಹೈಕಮಾಂಡ್ ಶೀಘ್ರವೇ ತೀರ್ಮಾನ ಕೈಗೊಳ್ಳಲಿದೆ. ಯಾರೂ ನಮ್ಮ ಶಿಷ್ಯರಲ್ಲ. ಅವರೆಲ್ಲ ಈಗ ಬಿಜೆಪಿಗೆ ಹೋಗಿದ್ದಾರೆ. ಹೀಗಿರಬೇಕಾದರೆ ಅವರು ನನ್ನ ಶಿಷ್ಯರು ಹೇಗಾಗುತ್ತಾರೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

Facebook Comments