ಸಿದ್ದರಾಮಯ್ಯ ಹಾಕಿದ ಆವಾಸ್ ಏನು ಗೊತ್ತಾ..?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜ.18- ಕನ್ನಡಿಗರು ಶಾಂತಿಪ್ರಿಯರು, ಸಹನಶೀಲರು, ಸಹಬಾಳ್ವೆಯಲ್ಲಿ ನಂಬಿಕೆ ಇಟ್ಟವರು. ನಮ್ಮ ಸಜ್ಜನಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಠಿಣ ಶಬ್ಧಗಳಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಮರಾಠಿ ಭಾಷೆ ಮಾತನಾಡುವವ ಪ್ರಾಂತ್ಯಗಳು ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಮಹಾರಾಷ್ಟ್ರಕ್ಕೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿದ ಹೇಳಿಕೆಗೆ ಟ್ವಿಟರ್‍ನಲ್ಲಿ ತಿರುಗೇಟು ನೀಡಿರುವ ಸಿದ್ದರಾಮಯ್ಯ ಅವರು, ಕರ್ನಾಟಕದ ನೆಲ-ಜಲ-ಭಾಷೆಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ.

ಈ ಬಗ್ಗೆ ರಾಜಿಯೂ ಇಲ್ಲ, ರಾಜಕೀಯವೂ ಇಲ್ಲ. ಬೆಳಗಾವಿನಮ್ಮದು ಎಂದು ಸ್ಪಷ್ಟ ಪಡಿಸಿದ್ದಾರೆ. ನಮ್ಮ ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ನೀಡಿರುವ ಅಧಿಕ ಪ್ರಸಂಗತನದ ಹೇಳಿಕೆ ಖಂಡನೀಯ. ಬೆಳಗಾವಿ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು ಬರಬೇಡಿ. ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಿ ರಾಜಕೀಯ ಮಾಡಲು ಹೋಗಬೇಡಿ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಉದ್ಧವ್‍ ಠಾಕ್ರೆ ಅವರು ಈಗ ಕೇವಲ ಶಿವಸೈನಿಕ ಅಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಎನ್ನುವುದನ್ನು ಮರೆಯಬಾರದು. ಮಹಾರಾಷ್ಟ್ರ ಮುಖ್ಯಮಂತ್ರಿಯವರ ಉದ್ಧಟತನದ ಹೇಳಿಕೆಗೆ ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಅಧಿಕೃತವಾಗಿ ತಕ್ಕ ಪ್ರತ್ಯುತ್ತರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಕನ್ನಡಿಗರು ಸಹನಶೀಲರು. ನಮ್ಮ ಸಜ್ಜನಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ ಎಂದು ಎಚ್ಚರಿಸಿದ್ದಾರೆ.

Facebook Comments