ಸಿಎಂ ವಿರುದ್ಧ ಸಿದ್ದು ಆಕ್ರೋಶ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.23- ಅಕ್ರಮ ಕಲ್ಲು ಕ್ವಾರಿಗಳನ್ನು ಸಕ್ರಮಗೊಳಿಸಲು ಮುಖ್ಯ ಮಂತ್ರಿ ಯಡಿಯೂರಪ್ಪ ಅವರು ಮುಂದಾಗಿದ್ದರ ಪರಿಣಾಮದಿಂದಾಗಿ ಮತ್ತೊಂದು ಸ್ಫೋಟ ಸಂಭವಿಸಿ ಆರು ಮಂದಿ ಕೂಲಿ ಕಾರ್ಮಿಕರು ಜೀವ ಕಳೆದುಕೊಂಡಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸ್ಫೋಟದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತ ಪಡಿಸಿರುವ ಅವರು, ಶಿವಮೊಗ್ಗದ ಜಿಲೆಟಿನ್ ಸ್ಫೋಟ ಸಂಭವಿಸಿದ ತಿಂಗಳ ಒಳಗೆ ನಡೆದ ಚಿಕ್ಕಬಳ್ಳಾಪುರ ಸಮೀಪ ಕಲ್ಲು ಕ್ವಾರಿ ಸ್ಫೋಟ ರಾಜ್ಯ ಸರ್ಕಾರದ ನಿಷ್ಕ್ರಿಯತೆ, ಬೇಜವಾಬ್ದಾರಿತನ ಮತ್ತು ಅಕ್ರಮದಲ್ಲಿ ಷಾಮೀಲಾಗಿರುವ ಭ್ರಷ್ಟತನಕ್ಕೆ ಸಾಕ್ಷಿಯಾಗಿದೆ. ಮುಖ್ಯಮಂತ್ರಿಗಳೇ, ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ ? ಎಂದು ಪ್ರಶ್ನಿಸಿದ್ದಾರೆ.

ಚಿಕ್ಕಬಳ್ಳಾಪುರ ಕಲ್ಲು ಕ್ವಾರಿಯಲ್ಲಿ ಆರು ಮಂದಿ ಸಾವಿಗೀಡಾಗಿರುವುದು ಜಿಲೆಟಿನ್ ಸ್ಫೋಟದಿಂದ ಅಲ್ಲ. ಬದಲಿಗೆ ಈ ಅಮಾಯಕ ಕಾರ್ಮಿಕರು ಅಕ್ರಮ ಗಣಿಗಳನ್ನು ಸಕ್ರಮ ಮಾಡಲು ಹೊರಟಿರುವ ಮುಖ್ಯಮಂತ್ರಿಗಳ ದುರಾಡಳಿತಕ್ಕೆ ಬಲಿಯಾಗಿದ್ದಾರೆ ಎಂದು ಕಿಡಿಕಾರಿದ್ದಾರೆ. ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ಪ್ರಕರಣದ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಗೆ ಮುಖ್ಯಮಂತ್ರಿ ಅವರು ತಕ್ಷಣ ಆದೇಶಿಸಬೇಕು. ಇದಕ್ಕಿಂತ ಮೊದಲು ಈ ಘಟನೆಗೆ ಕಾರಣರಾದ ಜಿಲ್ಲೆಯ ಎಲ್ಲ ಅಧಿಕಾರಿಗಳನ್ನು ಅಮಾನತಿನಲ್ಲಿಟ್ಟು ಕ್ರಿಮಿನಲï ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಗೂ ಆಂಧ್ರಪ್ರದೇಶದ ಗಣಿಲೂಟಿಕೋರರಿಗೂ ನೇರವಾದ ಸಂಬಂಧ ಇದೆ. ವಿಧಾನಸೌಧದಿಂದ ಜಿಲ್ಲಾಮಟ್ಟದ ವರೆಗೆ ಎಲ್ಲರೂ ಇದರಲ್ಲಿ ಷಾಮೀಲಾಗಿದ್ದಾರೆ. ಚಿಕ್ಕಬಳ್ಳಾಪುರದ ಈ ಅಕ್ರಮ ಗಣಿಗಾರಿಕೆ ಜಿಲ್ಲೆಯ ಉಸ್ತುವಾರಿ ಸಚಿವ ಡಾ. ಕೆ. ಸುಧಾಕರ್ ಅವರ ಗಮನಕ್ಕೆ ಬಂದಿರಲಿಲ್ಲವೇ ? ಎಂದು ಪ್ರಶ್ನಿಸಿದ್ದಾರೆ.
ಕರ್ನಾಟಕದಲ್ಲಿ 2 ಸಾವಿರಕ್ಕೂ ಹೆಚ್ಚು ಅನಧಿಕೃತ ಕ್ರಷರ್ ಕ್ವಾರಿಗಳಿವೆ ಎಂದು ಹೇಳಲಾಗುತ್ತಿದೆ. ಇವುಗಳ ಪಟ್ಟಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಕ್ಷಣ ಬಿಡುಗಡೆಗೊಳಿಸಬೇಕು ಮತ್ತು ಅವುಗಳನ್ನು ನಿರ್ದಾಕ್ಷಿಣ್ಯವಾಗಿ ಮುಚ್ಚುವ ಕೆಲಸ ಶುರು ಮಾಡಬೇಕು ಎಂದಿದ್ದಾರೆ.

ಎಷ್ಟೇ ಪ್ರಭಾವಿಗಳಾದರೂ ಸರ್ಕಾರ ಒತ್ತಡಕ್ಕೆ ಮಣಿಯದೆ ತಪ್ಪಿತಸ್ಥರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಬೇಕು. ಮುಂದಿನ ದಿನಗಳಲ್ಲಿ ಈ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮ ಜರುಗಿಸಬೇಕು ಎಂದು ಸಲಹೆ ನೀಡಿದ್ದಾರೆ.

ಅಮಾಯಕ ಕಾರ್ಮಿಕರ ದುರ್ಮರಣಕ್ಕೆ ಕಾರಣವಾದ ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಫೋಟ ಆಘಾತಕಾರಿ ದುರ್ಘಟನೆ. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಪ್ರಕರಣದ ತನಿಖೆ ನಡೆಸುವುದರ ಜೊತೆಗೆ ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಬೇಕೆಂದು ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದ್ದಾರೆ.

Facebook Comments