“ಈಶ್ವರಪ್ಪ ಫಸ್ಟ್ ಟೈಮ್ ಒಳ್ಳೆ ಕೆಲ್ಸ ಮಾಡಿದ್ದಾರೆ” : ಸಿದ್ದು ಹೀಗೆ ಹೊಗಳಿದ್ದೇಕೆ ಗೊತ್ತೇ..?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.1- ಸಚಿವ ಕೆ.ಎಸ್.ಈಶ್ವರಪ್ಪ ಅವರು ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿ ಒಳ್ಳೆಯ ಕೆಲಸ ಮಾಡಿದ್ದು, ಯಾವುದೇ ಒತ್ತಡಕ್ಕೆ ಮಣಿಯದೆ ತಮ್ಮ ಮಾತಿಗೆ ಬದ್ದರಾಗಿರಬೇಕೆಂದು ಹೇಳಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಈಶ್ವರಪ್ಪ ಅವರ ದೂರನ್ನು ಆಧರಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೊಳಿಸಬೇಕೆಂದು ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ.

ಸಚಿವ ಈಶ್ವರಪ್ಪ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ರಾಜ್ಯಪಾಲರಿಗೆ ಅಧಿಕೃತವಾಗಿ ನೀಡಿರುವ ದೂರಿನಲ್ಲಿ ವಿವಿಧ ಕಾನೂನುಗಳ ಸೆಕ್ಷನ್‍ಗಳು, ನಿಯಮಾವಳಿಗಳನ್ನು ನಮೂದಿಸಿ ಗಂಭೀರ ಆರೋಪ ಮಾಡಿದ್ದಾರೆ. ಇದು ನಿನ್ನೆಯಿಂದ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ.

ಈಶ್ವರಪ್ಪ ಅವರ ದೂರನ್ನು ಲಗತ್ತಿಸಿ ಸುದೀರ್ಘ ಟ್ವಿಟ್ ಮಾಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಮುಖ್ಯಮಂತ್ರಿಗಳ ವಿರುದ್ಧ ಹಿರಿಯ ಸಚಿವ ಕೆ.ಎಸ್.ಈಶ್ವರಪ್ಪ ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದ್ದು, ರಾಜ್ಯದ ಆಡಳಿತ ಕುಸಿದು ಬಿದ್ದಿರುವುಕ್ಕೆ ಸಾಕ್ಷಿಯಾಗಿದೆ. ರಾಜ್ಯಪಾಲರು ತಕ್ಷಣ ಮಧ್ಯೆಪ್ರವೇಶಿಸಿ ಮುಖ್ಯಮಂತ್ರಿಯವರನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಅಕ್ರಮಗಳ ಬಗ್ಗೆ ವಿರೋಧ ಪಕ್ಷದ ನಾಯಕನಾಗಿ ನಾನು ಹಲವಾರು ಬಾರಿ ಪ್ರಸ್ತಾಪ ಮಾಡುತ್ತಾ ಬಂದಿದ್ದೇನೆ. ನನ್ನ ಆರೋಪಗಳಿಗೆ ಸಚಿವ ಈಶ್ವರಪ್ಪ ಈಗ ಸಾಕ್ಷ ಒದಗಿಸಿದ್ದಾರೆ. ಅವರು ಯಾವುದೇ ಒತ್ತಡಕ್ಕೆ ಮಣಿಯದೆ ತಮ್ಮ ಮಾತಿಗೆ ಬದ್ದರಾಗಿ ಉಳಿಯಬೇಕೆಂದು ಸಲಹೆ ನೀಡಿದ್ದಾರೆ.

ಈಶ್ವರಪ್ಪ ಅವರು ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ. ರಾಜಕೀಯ ಹಿತಾಸಕ್ತಿಗಿಂತ ರಾಜ್ಯದ ಹಿತಾಸಕ್ತಿ ಮುಖ್ಯ ಎಂದು ಸಾರಿz್ದÁರೆ, ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ. ಭ್ರಷ್ಟಾಚಾರ, ಸ್ವಜನಪಕ್ಷಪಾತ, ಅಕ್ರಮಗಳು ಕೇವಲ ಗ್ರಾಮೀಣ ಅಭಿವೃದ್ದಿ ಇಲಾಖೆಯೊಂದಕ್ಕೆ ಸಂಬಂಧಿಸಿದ್ದಲ್ಲ, ಇದು ಸರ್ಕಾರದ ಪ್ರತಿಯೊಂದು ಇಲಾಖೆಯೊಳಗಿನ ಕರ್ಮಕಾಂಡ. ಬಿಜೆಪಿ ವರಿಷ್ಠರು ಈಶ್ವರಪ್ಪನವರ ಬಾಯಿಮುಚ್ಚಿಸಲು ಪ್ರಯತ್ನಿಸದೆ ಇತರ ಸಚಿವರೂ ಮುಕ್ತವಾಗಿ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿಗಳ ವಿರುದ್ಧ ಈಶ್ವರಪ್ಪನವರು ರಾಜ್ಯಪಾಲರಿಗೆ ಮಾತ್ರ ಆರೋಪ ಪಟ್ಟಿ ಸಲ್ಲಿಸದೆ, ಅದರ ಪ್ರತಿಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೂ ಕಳಿಸಿದ್ದಾರೆ. ಅವರೆಲ್ಲರೂ ಆರೋಪ ಪಟ್ಟಿ ಬಗ್ಗೆ ತಕ್ಷಣ ಪ್ರತಿಕ್ರಿಯಿಸಿ ಆಂತರಿಕ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದಕ್ಕೆ ಕೊರೊನಾ ವೈರಸ್ ಕಾರಣ ಅಲ್ಲ, ಈ ಸರ್ಕಾರಕ್ಕೆ ಅಂಟಿರುವ ಭ್ರಷ್ಟಾಚಾರದ ವೈರಸ್ ಕಾರಣ ಎನ್ನುವುದನ್ನು ಈಶ್ವರಪ್ಪನವರ ತನ್ನ ಸಂಶೋಧನೆ ಮೂಲಕ ಬಹಿರಂಗ ಗೊಳಿಸಿದ್ದಾರೆ. ನಾವು ಅಧಿಕಾರದಲ್ಲಿದ್ದಾಗ 10 ಪರ್ಸೆಂಟ್ ಸರ್ಕಾರ ಎಂದು ಆರೋಪಿಸಿದ್ದ ಪ್ರಧಾನ ಮಂತ್ರಿಯವರೇ, ನಿಮ್ಮದೇ ಸಚಿವರು ನಿಮಗೆ ಕಳಿಸಿರುವ ನಿಮ್ಮ ಸರ್ಕಾರದ ಜಾತಕಪತ್ರವನ್ನು ಪರಿಶೀಲಿಸಿ, ನೀವೇ ರಾಜ್ಯಸರ್ಕಾರದ ಭ್ರಷ್ಟಾಚಾರಕ್ಕೆ ರೇಟಿಂಗ್ ಕೊಟ್ಟುಬಿಡಿ. ನಾ ಖಾವುಂಗಾ, ನಾ ಖಾನೆ ದೂಂಗಾ ಎಂಬ ನಿಮ್ಮ ಜಗದ್ವಿಖ್ಯಾತ ಘೋಷಣೆಯನ್ನು ಮೈ ಬಿ ಖಾವೂಂಗಾ, ತುಮ್ ಬಿ ಖಾವೋ ಎಂದು ಬದಲಿಸಿ ಬಿಡಿ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಆಪರೇಷನ್ ಕಮಲ ಪ್ರಕರಣದ ತನಿಖೆಗೆ ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ನೀಡಿರುವುದು, ರಾಜ್ಯದ ಬಿಜೆಪಿ ಸರ್ಕಾರ ಆಪರೇಷನ್ ಕಮಲ ಎಂಬ ಅನೈತಿಕ ಚಟುವಟಿಕೆಯ ಅಕ್ರಮ ಶಿಶು ಎನ್ನುವ ನಮ್ಮ ಆರೋಪವನ್ನು ಪುಷ್ಠೀಕರಿಸಿದೆ. ರಾಜ್ಯ ಬಿಜೆಪಿ ಸರ್ಕಾರದ ಅಸ್ತಿತ್ವಕ್ಕೆ ಕಾರಣವಾದ ಆಪರೇಷನ್ ಕಮಲ ಕಾರ್ಯಾಚರಣೆಯಲ್ಲಿ ವಿನಿಮಯಗೊಂಡ ಕೋಟ್ಯಂತರ ರೂಪಾಯಿಗಳ ಆಮಿಷದ ಬಗ್ಗೆ ಸಮಗ್ರಸ್ವರೂಪದ ತನಿಖೆಯಾಗಬೇಕೆಂದು ಅವರು ಒತ್ತಾಯಿಸಿದ್ದಾರೆ.

Facebook Comments