ಭಾರಿ ಕುತೂಹಲ ಕೆರಳಿಸಿದ ನಾಳಿನ ಸಿದ್ದು-ಸೋನಿಯಾ ಭೇಟಿ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜ.12-ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಹಾಗೂ ವಿಪಕ್ಷ ನಾಯಕ ಸ್ಥಾನದ ಮುಂದುವರಿಕೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿಯವರನ್ನು ಭೇಟಿ ಮಾಡಿಮಹತ್ವದ ಚರ್ಚೆ ನಡೆಸಲಿದ್ದಾರೆ. ಹೈಕಮಾಂಡ್‍ನ ಆಹ್ವಾನದ ಮೇರೆಗೆ ನಾಳೆ ದೆಹಲಿಗೆ ತೆರಳುತ್ತಿರುವ ಸಿದ್ದರಾಮಯ್ಯ ಅವರು, ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ, ಪ್ರಧಾನಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಅಹಮ್ಮದ್ ಪಟೇಲ್ ಸೇರಿದಂತೆ ಅನೇಕ ನಾಯಕರ ಜೊತೆ ಸಮಾಲೋಚನೆ ನಡೆಸಲಿದ್ದಾರೆ.

ಉಪಚುನಾವಣೆ ಫಲಿತಾಂಶದ ಬಳಿಕ ರಾಜ್ಯದ ಯಾವುದೇ ನಾಯಕರನ್ನು ಭೇಟಿ ಮಾಡದೆ ಅಂತರ ಕಾಯ್ದುಕೊಂಡಿದ್ದ ಹೈಕಮಾಂಡ್ ಈಗ ಸೂಕ್ತ ನಿರ್ಧಾರ ಕೈಗಳ್ಳಲು ಮುಂದಾಗಿದೆ. ಉಪಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಅವರು ರಾಜೀನಾಮೆ ನೀಡಿದ್ದರು.

ದಿನೇಶ್‍ಗುಂಡೂರಾವ್ ಅವರ ರಾಜೀನಾಮೆ ಅಂಗೀಕರಿಸಬೇಕು, ಸಿದ್ದರಾಮಯ್ಯ ಅವರನ್ನು ಮುಂದುವರೆಸಬೇಕು ಎಂಬುದು ಸ್ಥಳೀಯ ನಾಯಕರ ಅಭಿಪ್ರಾಯವಾಗಿತ್ತು. ಎಐಸಿಸಿ ಮತ್ತೊಬ್ಬ ಪ್ರಧಾನ ಕಾರ್ಯದರ್ಶಿಯಾಗಿರುವ ಮಧುಸೂದನ್ ಮಿಸ್ತ್ರೀಯವರು ಹಿರಿಯ ನಾಯಕರ ಅಭಿಪ್ರಾಯ ಸಂಗ್ರಹಿಸಿದ್ದರು. ಅದರಲ್ಲೂ ಕೆಪಿಸಿಸಿಗೆ ಬೇರೆ ನಾಯಕರನ್ನು ಅಧ್ಯಕ್ಷರನ್ನಾಗಿ ಮಾಡಬೇಕೆಂಬ ಮಾತುಗಳು ಕೇಳಿ ಬಂದಿದ್ದವು.

ಸಿದ್ದರಾಮಯ್ಯ ಅವರನ್ನು ಹಲವಾರು ನಾಯಕರು ಮನವೊಲಿಸಿದ್ದು, ಅವರು ಮುಂದುವರೆಯಲು ಸಮ್ಮತಿಸಿದ್ದಾರೆ. ಆದರೆ ಹೈಕಮಾಂಡ್ ಜೊತೆ ಚರ್ಚಿಸಿದ ನಂತರವೇ ಸೂಕ್ತ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ. ನಿನ್ನೆ ನವದೆಹಲಿಯಲ್ಲಿ ನಡೆದ ಎಐಸಿಸಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆಗೆ ಸೋನಿಯಾಗಾಂಧಿಯವರಿಗೆ ಸಂಪೂರ್ಣ ಜವಾಬ್ದಾರಿ ನೀಡಲಾಗಿದೆ.

ಮಂಗಳವಾರದಿಂದ ಸೋನಿಯಾಗಾಂಧಿಯವರು ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದು, ಇನ್ನು 10 ದಿನಗಳ ಕಾಲ ಪ್ರಮುಖ ನಿರ್ಧಾರಗಳು ಹೊರಬೀಳುವ ಸಾಧ್ಯತೆ ಕಡಿಮೆ ಇದೆ. ಹೀಗಾಗಿ ಸೋಮವಾರವೇ ಬಂದು ತಮ್ಮನ್ನು ಭೇಟಿ ಮಾಡುವಂತೆ ಸಿದ್ದರಾಮಯ್ಯ ಅವರಿಗೆ ಸೋನಿಯಾಗಾಂಧಿಯವರು ಬುಲಾವ್ ನೀಡಿದ್ದಾರೆ ಎನ್ನಲಾಗಿದೆ.

ನಾಳೆಗೆ ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ ಅವರು, ಮಂಗಳವಾರ ವಾಪಸ್ ಆಗಲಿದ್ದಾರೆ. ಸೋನಿಯಾಗಾಂಧಿ ಅವರ ಭೇಟಿ ವೇಳೆ ಸಿದ್ದರಾಮಯ್ಯ ಅವರು ಮಂಡಿಸುವ ಅಭಿಪ್ರಾಯ ಬಹಳ ಮುಖ್ಯವಾಗಲಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಿದ್ದರಾಮಯ್ಯ ಅವರ ಆಪ್ತರಾದ ಎಂ.ಬಿ.ಪಾಟೀಲ್, ಸತೀಶ್ ಜಾರಕಿ ಹೊಳಿ ಸೇರಿದಂತೆ ಅನೇಕರು ಆಕಾಂಕ್ಷಿಗಳಾಗಿದ್ದಾರೆ. ಎಲ್ಲರನ್ನೂ ಹಿಂದಿಕ್ಕಿ ಡಿ.ಕೆ.ಶಿವಕುಮಾರ್ ಮುಂಚೂಣಿಯಲ್ಲಿದ್ದಾರೆ. ಹೀಗಾಗಿ ನಾಳೆ ನಡೆಯಲಿರುವ ಭೇಟಿ ಅತ್ಯಂತ ಮಹತ್ವದ್ದಾಗಿದೆ.

Facebook Comments