ವಿಪಕ್ಷ ನಾಯಕನಾಗಿ ಮುಂದುವರೆಯಲು ಸಿದ್ದರಾಮಯ್ಯ ಸಮ್ಮತಿ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಜ.14- ವಿಪಕ್ಷ ಸ್ಥಾನ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಹೈಕಮಾಂಡ್ ಬಳಿ ನಾನು ನನ್ನ ಅಭಿಪ್ರಾಯವನ್ನು ಹೇಳುತ್ತೇನೆ. ಬಹಿರಂಗವಾಗಿ ಯಾವುದೇ ಚರ್ಚೆ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕ ಸ್ಥಾನಕ್ಕೆ ಉಪ ಚುನಾವಣೆ ಬಳಿಕ ರಾಜೀನಾಮೆ ನೀಡಿದ್ದನ್ನು ಹೈಕಮಾಂಡ್‍ಗೆ ವಿವರಿಸುತ್ತೇನೆ.

ಇಂದು ಬೆಳಗ್ಗೆ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ಚರ್ಚಿಯ ವೇಳೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಯಾವುದೇ ಸಮಾಲೋಚನೆ ಮಾಡಿಲ್ಲ. ಸಂಜೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಲಿದ್ದು, ಅಲ್ಲಿ ನನ್ನ ಅಭಿಪ್ರಾಯಗಳನ್ನು ತಿಳಿಸುತ್ತೇನೆ. ಮುಂದಿನ ನಿರ್ಧಾರ ತೆಗೆದುಕೊಳ್ಳುವುದು ಹೈಕಮಾಂಡ್‍ಗೆ ಬಿಟ್ಟ ವಿಷಯ.ರಾಜ್ಯಸಭೆ ಚುನಾವಣೆ ಬಗ್ಗೆ ಹೈಕಮಾಂಡ್ ಜತೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ವಿಪಕ್ಷ ನಾಯಕರಾಗಿ ಮುಂದುವರೆಯಲು ಸಮ್ಮತಿ: ದೆಹಲಿ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಅವರು ಇಂದು ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ತಾವು ವಿಪಕ್ಷ ನಾಯಕರಾಗಿ ಮುಂದುವರೆಯುವುದಾಗಿ ಸ್ಪಷ್ಟಪಡಿಸಿದ್ದಾರೆ. ಹಾಗೆಯೇ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಪ್ರಭಾವಿಯಾಗಿರುವ ಲಿಂಗಾಯಿತ ಸಮುದಾಯಕ್ಕೆ ನೀಡುವುದು ಸೂಕ್ತ ಎಂಬ ಸಲಹೆ ನೀಡಿದ್ದಾರೆ.

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಕಾರಣಗಳ ಬಗ್ಗೆ ಸುದೀರ್ಘ ವಿವರಣೆ ಕೊಟ್ಟಿರುವ ಸಿದ್ದರಾಮಯ್ಯ ಅವರು, ಪಕ್ಷ ಸಂಘಟನೆಯಲ್ಲಿ ಹಿರಿಯ ನಾಯಕರ ನಿರಾಶಕ್ತಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚುನಾವಣೆ ವೇಳೆಯಲ್ಲೂ ಕಾಂಗ್ರೆಸ್ ನಾಯಕರು ಅಧಿಕಾರದ ಬಗ್ಗೆಯೇ ಯೋಚನೆ ಮಾಡುತ್ತಿರುತ್ತಾರೆ. ಪಕ್ಷ ಸಂಘಟನೆ ಬಗ್ಗೆ ಯಾರೂ ಗಂಭೀರವಾಗಿ ಕೆಲಸ ಮಾಡುತ್ತಿಲ್ಲ ಎಂದು ದೂರಿದ್ದಾರೆ.

ಉಪ ಚುನಾವಣೆಯಲ್ಲಿ ಹಿರಿಯ ನಾಯಕರು ತಮ್ಮೊಂದಿಗೆ ಸಹಕರಿಸಿದ್ದರೆ ಕನಿಷ್ಠ 10 ಸ್ಥಾನಗಳನ್ನು ಗೆಲ್ಲಲು ಸಾಧ್ಯವಿತ್ತು. ಆದರೆ, ರಾಜಕೀಯ ಕಾರಣಗಳಿಗಾಗಿ ಎಲ್ಲಾ ನಾಯಕರು ಉಪ ಚುನಾವಣೆ ವೇಳೆ ಪ್ರಚಾರದಿಂದ ದೂರ ಸರಿದರು. ಕೊನೆ ಕ್ಷಣದಲ್ಲಿ ನೆಪಮಾತ್ರಕಷ್ಟೇ ಪ್ರಚಾರಕ್ಕೆ ಆಗಮಿಸಿದ್ದರು. ಇದರಿಂದಾಗಿ ಚುನಾವಣೆಯಲ್ಲಿ ನಾವು ಸೋಲುವಂತಾಯಿತು ಎಂದು ಸಿದ್ದರಾಮಯ್ಯ ಹೈಕಮಾಂಡ್‍ಗೆ ವರದಿ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ದಿನೇಶ್‍ಗುಂಡೂರಾವ್ ಅವರನ್ನೇ ಮುಂದುವರೆಸಬೇಕು. ಒಂದು ವೇಳೆ ಬದಲಾವಣೆ ಮಾಡುವುದೇ ಆದರೆ ಉತ್ತರ ಕರ್ನಾಟಕ ಭಾಗ ಮತ್ತು ಲಿಂಗಾಯಿತ ಸಮುದಾಯಕ್ಕೆ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ ಎನ್ನಲಾಗಿದೆ.ಕೆಪಿ ಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಹಾಗೂ ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಆಕಾಂಕ್ಷಿಯಾಗಿದ್ದಾರೆ.

ಸಿದ್ದರಾಮಯ್ಯ ಅವರು ಪ್ರಾದೇಶಿಕ ಅಸಮಾನತೆ ಮತ್ತು ಸಮುದಾಯದ ಪ್ರಾತಿನಿತ್ಯದ ನೆಪ ಹೇಳಿ ಎಂ.ಬಿ.ಪಾಟೀಲ್ ಅವರ ಹೆಸರನ್ನು ಮುಂಚೂಣಿಗೆ ತರುವಂತೆ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಷಯದಲ್ಲಿ ಸಿದ್ದರಾಮಯ್ಯ ಅವರು ನೀಡುವ ಅಭಿಪ್ರಾಯ ಅತ್ಯಂತ ಮಹತ್ವದ್ದಾಗಿದೆ. ಮೂಲ ಕಾಂಗ್ರೆಸಿಗರು ನಿಷ್ಠಾವಂತ ಕಾಂಗ್ರೆಸಿಗರಿಗೆ ಪಟ್ಟ ಕಟ್ಟಬೇಕೆಂದು ಲಾಬಿ ನಡೆಸುತ್ತಿದ್ದರೆ.

ಸಿದ್ದರಾಮಯ್ಯ ತಮ್ಮ ಬೆಂಬಲಿಗರನ್ನೇ ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ಪ್ರಯತ್ನಿಸುತ್ತಿದ್ದಾರೆ. ಮೂಲ ಕಾಂಗ್ರೆಸಿಗರು ಮತ್ತು ಸಿದ್ದರಾಮಯ್ಯ ನಡುವೆ ಹಗ್ಗ ಜಗ್ಗಾಟದಲ್ಲಿ ಯಾರ ಕೈ ಮೇಲಾಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ.

Facebook Comments