ಇಡೀ ರಾಜ್ಯ ಪ್ರವಾಹದಲ್ಲಿ ಮುಳುಗುತ್ತಿದೆ, ಬಿಜೆಪಿ ‘ಗಲಭೆ ರಾಜಕೀಯ’ ಮಾಡುತ್ತಿದೆ : ಸಿದ್ದರಾಮಯ್ಯ
ಬೆಂಗಳೂರು, ಆ.19- ಇಡೀ ರಾಜ್ಯ ಪ್ರವಾಹದಿಂದ ಸಂತ್ರಸ್ಥವಾಗಿದೆ. ನೆರವು ನೀಡುವ ಬದಲು ಬಿಜೆಪಿ ಸರ್ಕಾರ ಬೆಂಗಳೂರು ಗಲಭೆ ಪ್ರಕರಣದಲ್ಲಿ ರಾಜಕೀಯ ಲಾಭ ಮಾಡಿಕೊಳ್ಳುವ ಹುನ್ನಾರ ನಡೆಸಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಗೃಹ ಸಚಿವ ಬಸವರಾಜ ಬೊಮ್ಮಾಯಿ ಅತಿವೃಷ್ಟಿ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸುತ್ತಿದ್ದಾರೆ. ಕಂದಾಯ ಸಚಿವ ಆರ್.ಅಶೋಕ್ ಬೆಂಗಳೂರಿನಲ್ಲಿ ಕೂತು ಕಾವಲಭೈರಸಂದ್ರ ಗಲಭೆ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ.
ಕಂದಾಯ ಸಚಿವರಿಗೆ ಬೆಂಗಳೂರಿನಲ್ಲೇನು ಕೆಲಸ? ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಂದಾಯ ಸಚಿವರ ಕೆಲಸವಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೊದಲು ಕಂದಾಯ ಸಚಿವರನ್ನು ಪ್ರವಾಹಪೀಡಿತ ಪ್ರದೇಶಕ್ಕೆ ಕಳಿಸಿಕೊಡಲಿ ಎಂದು ಸಲಹೆ ನೀಡಿದ್ದಾರೆ. ಇಡೀ ರಾಜ್ಯ ಅತಿವೃಷ್ಟಿಯಿಂದ ತತ್ತರಿಸಿ ಹೋಗಿದೆ.
ಬಿಜೆಪಿ ಸರ್ಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯದ ರೊಟ್ಟಿ ಬಡಿಯುತ್ತಾ ಕೂತಿದೆ. ನೆರೆ ಹಾವಳಿಯಿಂದ ನೊಂದ ಜನರ ಗೋಳು ಅರಣ್ಯರೋದನವಾಗಿದೆ.
ಕಳೆದ ವರ್ಷ ಅತಿವೃಷ್ಟಿಯಿಂದ ತೊಂದರೆಗೆ ಒಳಗಾದ ಜನರಿಗೆ ಪರಿಹಾರ ಕೊಡುವಲ್ಲಿ ವೈಫಲ್ಯವಾಗಿದ್ದರಿಂದ ಈ ಬಾರಿ ಜನರ ಕಷ್ಟ-ಕಾರ್ಪಣ್ಯಗಳನ್ನು ದುಪ್ಪಟ್ಟುಗೊಂಡಿದೆ ಎಂದು ಅವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ತಮ್ಮ ಕ್ಷೇತ್ರ ಬಾದಾಮಿಯ ಜನ ಪ್ರವಾಹದಿಂದಾಗಿ ಸಂಕಷ್ಟದಲ್ಲಿದ್ದಾರೆ. ಕೊರೋನಾ ಸೋಂಕಿನ ನಂತರ ಕಡ್ಡಾಯ ವಿಶ್ರಾಂತಿಯಲ್ಲಿರುವುದರಿಂದ ಕ್ಷೇತ್ರಕ್ಕೆ ಭೇಟಿ ನೀಡುವ ಸ್ಥಿತಿಯಲ್ಲಿ ನಾನಿಲ್ಲ. ಇದಕ್ಕಾಗಿ ಕ್ಷಮೆ ಕೇಳುವುದಾಗಿ ಹೇಳಿರುವ ಸಿದ್ದರಾಮಯ್ಯ, ಅಕಾರಿಗಳು ಮತ್ತು ನಮ್ಮ ಪಕ್ಷದ ನಾಯಕರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದಿದ್ದಾರೆ.