‘ಕೈ ಕೊಡ್ತೀವಿ’ ಎಂಬ ಸಾ.ರಾ.ಮಹೇಶ್ ಹೇಳಿಕೆಗೆ ಸಿದ್ದು ಗುದ್ದು ..!

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು,ಮಾ.17-ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಬೆಂಬಲಿಸದಿದ್ದರೆ ಮೈಸೂರಿನಲ್ಲಿ ನಾವು ಕೂಡ ಕೈ ಕೊಡಬೇಕಾಗುತ್ತದೆ ಎಂಬ ಸಚಿವ ಸಾ.ರಾ.ಮಹೇಶ್ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ನಾವು ಪರಸ್ಪರ ನಂಬಿಕೆ ಮೇಲೆ ಮೈತ್ರಿ ಮಾಡಿಕೊಂಡಿದ್ದೇವೆ. ನಂಬಿಕೆ, ಅಪನಂಬಿಕೆ ಬಗ್ಗೆ ಜೆಡಿಎಸ್ ವರಿಷ್ಠರಾದ ದೇವೇಗೌಡರು ಮತ್ತು ಕುಮಾರಸ್ವಾಮಿ ಮಾತನಾಡಿದರೆ ಪ್ರತಿಕ್ರಿಯಿಸಬಹುದು. ಉಳಿದವರ ಹೇಳಿಕೆಗೆ ಅಷ್ಟು ಮಹತ್ವವಿಲ್ಲ ಎಂದು ಟಾಂಗ್ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದಲ್ಲಿ ಅನಿವಾರ್ಯ ಕಾರಣಗಳಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಇದು ನಂಬಿಕೆ ಮತ್ತು ವಿಶ್ವಾಸದ ಮೇಲೆ ಆಗಿರುವ ಮೈತ್ರಿ. ಸಚಿವರಾಗಿರುವವರೇ ಈ ರೀತಿ ಹೇಳಿದರೆ ಸರ್ಕಾರದಲ್ಲಿ ಅಪನಂಬಿಕೆ ಉಂಟಾಗುವುದಿಲ್ಲವೇ ಎಂದು ಪ್ರಶ್ನಿಸಿದರು.

ಸಾ.ರಾ.ಮಹೇಶ್ ಒಬ್ಬ ಜವಾಬ್ದಾರಿಯುತ ಸಚಿವರಾಗಿರುವವರು. ಅವರ ಈ ಹೇಳಿಕೆಯನ್ನು ಒಪ್ಪಲು ಸಾಧ್ಯವೇ ಇಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ ಮುಖಂಡರು ಮೈತ್ರಿ ಪಕ್ಷದ ಅಭ್ಯರ್ಥಿಗೆ ಬೆಂಬಲಿಸಲಿದ್ದಾರೆ. ಇನ್ನು ಚುನಾವಣಾ ಪ್ರಕ್ರಿಯೆಯೇ ಆರಂಭವಾಗಿಲ್ಲ. ಆಗಲೇ ಅನುಮಾನ ವ್ಯಕ್ತಪಡಿಸಿದರೆ ಹೇಗೆ ಎಂದು ಕಿಡಿಕಾರಿದರು.

ಉಳಿಸಿಕೊಳ್ಳಲು ಪ್ರಯತ್ನ: ತುಮಕೂರು ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್‍ನಲ್ಲೇ ಉಳಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೆವು. ಹಾಲಿ ಸಂಸದರಿರುವ ಕ್ಷೇತ್ರಗಳನ್ನು ಬಿಟ್ಟುಕೊಡಬಾರದೆಂಬ ತೀರ್ಮಾನವಾಗಿತ್ತು. ಆದರೆ ಮೈತ್ರಿ ಸರ್ಕಾರ ಇರುವುದರಿಂದ ಇಂಥ ವ್ಯತ್ಯಾಸಗಳಾಗುವುದು ಸಾಮಾನ್ಯ ಎಂದರು.

9 ಕ್ಷೇತ್ರಗಳಲ್ಲಿ ಹಾಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. ಅದೊಂದು ಕ್ಷೇತ್ರವನ್ನು ನಾವು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂಬ ನೋವು ನಮಗೂ ಇದೆ. ಕೋಮುವಾದಿ ಬಿಜೆಪಿಯನ್ನು ಸೋಲಿಸಲು ಮೈತ್ರಿ ಅನಿವಾರ್ಯವಾಗಿತ್ತು ಎಂದು ಅಭಿಪ್ರಾಯಪಟ್ಟರು.

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲೂ ಮೈತ್ರಿ ಪಕ್ಷದ ಅಭ್ಯರ್ಥಿಗಳು ಗೆಲ್ಲುವುದು ಖಚಿತ. ಬಿಜೆಪಿಯನ್ನು ಸೋಲಿಸಲು ಜನ ತುದಿಗಾಲಲ್ಲಿ ನಿಂತಿದ್ದಾರೆ. ಯಡಿಯೂರಪ್ಪ, ಈಶ್ವರಪ್ಪ, ಜಗದೀಶ್ ಶೆಟ್ಟರ್ ಸೇರಿದಂತೆ ಆ ಪಕ್ಷದ ಎಲ್ಲ ನಾಯಕರು ವರ್ಚಸ್ಸು ಕಳೆದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Facebook Comments

Sri Raghav

Admin