ಸಿಂಧಗಿ ಕ್ಷೇತ್ರದಲ್ಲಿ ನಾಳೆ ಎಚ್‍ಡಿಕೆ ಪ್ರಚಾರ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.18- ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಿಂಧಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಾಳೆಯಿಂದ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ಸಿಂಧಗಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಅಂಗಡಿ ನಾಜಿಯಾ ಪರವಾಗಿ ಮೂರ್ನಾಲ್ಕು ದಿನ ಚುನಾವಣಾ ಪ್ರಚಾರವನ್ನು ಕುಮಾರಸ್ವಾಮಿ ನಡೆಸಲಿದ್ದಾರೆ.

ಜತೆಗೆ ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಸಂಸದ ಪ್ರಜ್ವಲ್ ರೇವಣ್ಣ ಸೇರಿದಂತೆ ತಾರಾ ಪ್ರಚಾರಕರ ಪಟ್ಟಿಯಲ್ಲಿರುವ ಪಕ್ಷದ ಮುಖಂಡರು ಕೂಡ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಮೂರ್ನಾಲ್ಕು ದಿನಗಳ ಕಾಲ ಸಿಂಧಗಿ ಕ್ಷೇತ್ರದಲ್ಲೇ ಬಿಡಾರ ಹೂಡಲಿರುವ ಕುಮಾರಸ್ವಾಮಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಬೇಕಾಗಿರುವ ಸಲಹೆ-ಮಾರ್ಗದರ್ಶನಗಳನ್ನು ಪಕ್ಷದ ಮುಖಂಡರಿಗೆ ನೀಡಲಿದ್ದಾರೆ ಹಾಗೂ ಚುನಾವಣಾ ಕಾರ್ಯತಂತ್ರ ರೂಪಿಸಲಿದ್ದಾರೆ. ಮುಂಬರುವ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಈ ಉಪಚುನಾವಣೆಯನ್ನು ದಿಕ್ಸೂಚಿ ಎಂದೇ ಜೆಡಿಎಸ್ ಪರಿಗಣಿಸಿದ್ದು, ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶತಾಯ-ಗತಾಯ ಪ್ರಯತ್ನ ನಡೆಸುತ್ತಿದೆ.

ಸಿಂಧಗಿ ಕ್ಷೇತ್ರದ ನಂತರ ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಖ್ ಪರವಾಗಿ ಕುಮಾರಸ್ವಾಮಿ ಮತಯಾಚನೆ ಮಾಡಲಿದ್ದಾರೆ. ಅದೇ ರೀತಿ ಪಕ್ಷದ ಮುಖಂಡರು ಕೂಡ ಈ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಈ ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿರುವ ಜೆಡಿಎಸ್ ನಾಯಕರು ಈಗಾಗಲೇ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರು ಸಿಂಧಗಿ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಅಂಗಡಿ ನಾಜಿಯಾ ಪರವಾಗಿ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ವಿಜಯದಶಮಿ ಹಬ್ಬಕ್ಕೂ ಮುನ್ನ ಒಂದು ಸುತ್ತಿನ ಪ್ರವಾಸ ಕೈಗೊಂಡು ಜೆಡಿಎಸ್ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರವನ್ನು ಸಿಂಧಗಿ ಕ್ಷೇತ್ರದಲ್ಲಿ ಗೌಡರು ಮಾಡಿದ್ದರು. ಮತ್ತೆ ಎರಡನೆ ಹಂತದಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಪಕ್ಷದ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡುತ್ತಿದ್ದಾರೆ.

ಒಟ್ಟಾರೆ ಎರಡೂ ಕ್ಷೇತ್ರಗಳ ಅಭ್ಯರ್ಥಿಗಳ ಗೆಲುವಿಗೆ ಜೆಡಿಎಸ್ ನಾಯಕರು ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ.

Facebook Comments