ಬೆಂಗಳೂರಲ್ಲಿ ಕಂಡಕಂಡಲ್ಲಿ ಧಮ್ ಹೊಡಿಯೋರಿಗೆ ಕಾದಿದೆ ಗ್ರಹಚಾರ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.11- ಕೋವಿಡ್ 19 ಹಿನ್ನ್ನೆಲೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಬೀಡಿ, ಸಿಗರೇಟು ಸೇದುವಂತಿಲ್ಲ. ಗುಟ್ಕಾ, ಪಾನ್‍ಮಸಾಲಾ ಮುಂತಾದ ತಂಬಾಕು ಉತ್ಪನ್ನಗಳನ್ನು ಜಗಿದು ಉಗಿಯುವಂತಿಲ್ಲ. ಒಂದು ವೇಳೆ ನಿಯಮವನ್ನು ಯಾರಾದರೂ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಹಾರ ಭದ್ರತಾ ಕಾಯ್ದೆಯನ್ನು ಉಲ್ಲಂಘಿಸುವ ಹೋಟೆಲ ಅಂಗಡಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವಂತೆಯೂ ತಾಕೀತು ಮಾಡಿದರು.

ಶಾಲಾ-ಕಾಲೇಜು ಮಕ್ಕಳಲ್ಲಿ ತಂಬಾಕು ಉತ್ಪನ್ನಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು, ಸುತ್ತ ಮುತ್ತಾ ತಂಬಾಕು ಉತ್ಪನ್ನಗಳು ಮಾರಾಟವಾಗದಂತೆ ಎಚ್ಚರಿಕೆ ವಹಿಸಬೇಕು. ನಿಯಮ ಉಲ್ಲಂಘಿಸುವವರ ವಿರುದ್ಧ ಆರೋಗ್ಯ ಇಲಾಖೆ ಮತ್ತು ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ದಂಡ ವಿಧಿಸುವಂತೆ ಸಲಹೆ ನೀಡಿದರು.

ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರರಾದ ಡಾ.ವಿದ್ಯಾರಾಣಿ ಮಾತನಾಡಿ ಕಳೆದ ವರ್ಷ ತಂಬಾಕು ನಿಯಂತ್ರಣ ಘಟಕದ ಕಾರ್ಯಾಚರಣೆಯಲ್ಲಿ 520 ಪ್ರಕರಣಗಳನ್ನು ದಾಖಲು ಮಾಡಲಾಗಿದ್ದು, 85,200 ರೂ. ದಂಡ ಸಂಗ್ರಹಿಸಲಾಗಿದೆ.

ತಂಬಾಕು ಉತ್ಪನ್ನ ಸೇವನೆಯ ಚಟದಿಂದ ಮುಕ್ತಿ ಪಡೆಯಲು 1156 ಚಿಕಿತ್ಸೆಗೆ ದಾಖಲಾಗಿ, 44 ಜನರು ಸಂಪೂರ್ಣವಾಗಿ ತಂಬಾಕು ಚಟದಿಂದ ಮುಕ್ತರಾಗಿದ್ದಾರೆ ಎಂದರು. ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಧರ್ಮೇಂದ್ರ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Facebook Comments