ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,‌‌ ಮೇ 27- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2020-21ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ 10000 ರೂ.ಗಳ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ನೀಡಲು ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ಕ್ರೀಡಾಪಟುಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 25 ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಗೀತಾ ಅವರು ತಿಳಿಸಿದ್ದಾರೆ. ಅರ್ಹ ಕ್ರೀಡಾಪಟುಗಳು ಅಧಿಕೃತ ಜಾಲತಾಣ
http://serviceonline.gov.in/karnataka ಮೂಲಕ ಜೂನ್ 25 ರೊಳಗೆ ಅರ್ಜಿಗಳನ್ನು ಸಲ್ಲಿಸುವುದು.

ಅರ್ಜಿದಾರರು 2020-21ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ ಅಥವಾ ಪ್ರೌಢಶಾಲೆ (6 ರಿಂದ 10ನೇ ತರಗತಿ)ಯಲ್ಲಿ ಓದುತ್ತಿರಬೇಕು. ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೊಂದಾಯಿತವಾದ ಕ್ರೀಡಾ ಸಂಸ್ಥೆಗಳು 2020ರ ಏ. 1ರಿಂದ 2021ರ ಮಾ.31.ವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು.

ಅಂದರೆ ಈ ಅವಧಿಯಲ್ಲಿ ನಡೆದ ಕ್ರೀಡಾಕೂಟಗಳಲ್ಲಿನ ಸಾಧನೆಗಳನ್ನು ಮಾತ್ರ ಪರಿಗಣಿಸಲಾಗುವುದು. ರಾಷ್ಟೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ, ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ಯೋಜನೆಯಡಿಯಲ್ಲಿ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಲ್ಲಿ ಅಥವಾ ರಾಷ್ಟೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ. ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ವಿದ್ಯಾರ್ಥಿ ವೇತನದ ಮೊತ್ತಕ್ಕೆ ಮಾತ್ರ ಅರ್ಹರಿರುತ್ತಾರೆ.

ಹೆಚ್ಚಿನ ‌ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಭವನ, 1ನೇ ಮಹಡಿ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook Comments