ಡಿಕೆಶಿ ಮತ್ತು ಸಂಪತ್‍ಕುಮಾರ್ ವಿರುದ್ಧ ಹೈಕಮಾಂಡ್‍ಗೆ ಅಖಂಡ ದೂರು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಮಾ.1- ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆದುಕೊಂಡು ಹೋಗಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಮೇಯರ್ ಸಂಪತ್‍ಕುಮಾರ್ ವಿರುದ್ಧ ಕಾಂಗ್ರೆಸ್ ಹೈಕಮಾಂಡ್‍ಗೆ ದೂರು ನೀಡುವುದಾಗಿ ಪುಲಿಕೇಶಿನಗರದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಹೇಳಿದ್ದಾರೆ.

ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರಿದ ಮಾಜಿ ಶಾಸಕ ಪ್ರಸನ್ನಕುಮಾರ್ ಅವರ ದೂರವಾಣಿ ಸಂಭಾಷಣೆಯ ಆಡಿಯೋ ಬಿಡುಗಡೆಯಾದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿರುವ ಅವರು, ತಾವು ಕ್ಷೇತ್ರ ಬಿಟ್ಟುಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪುಲಿಕೇಶಿ ನಗರ ಕ್ಷೇತ್ರದಿಂದ ನಾನು ಕಾಂಗ್ರೆಸ್ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಮುಂದಿನ ಬಾರಿಯೂ ಕೂಡ ನಾನೇ ಸ್ಪರ್ಧೆ ಮಾಡುತ್ತೇನೆ. ಪರಮೇಶ್ವರ್‍ಗಾಗಲಿ ಇನ್ಯಾರಿಗೋ ಕ್ಷೇತ್ರವನ್ನು ಬಿಟ್ಟುಕೊಡುವ ಪ್ರಶ್ನೆಯೆ ಇಲ್ಲ ಎಂದರು.

ಡಿಜೆಹಳ್ಳಿ, ಕೆಜಿಹಳ್ಳಿ ಗಲಭೆ ಪ್ರಕರಣದಲ್ಲಿ ಪೊಲೀಸರು ಮಾಜಿ ಮೇಯರ್ ಸಂಪತ್‍ರಾಜ್ ಅವರನ್ನು ಬಂಧಿಸಿದಾರೆ. ನಾನು ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಎಂದು ಹಲವು ಬಾರಿ ದೂರು ನೀಡಿದ್ದೇನೆ. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ. ಮುಂದಿನ ಬಾರಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಕರೆದುಕೊಂಡು ದೆಹಲಿಗೆ ಹೋಗಿ ಕಾಂಗ್ರೆಸ್ ಹೈಕಮಾಂಡ್‍ಗೆ ದೂರು ನೀಡುತ್ತೇನೆ ಎಂದು ಅಖಂಡ ಶ್ರೀನಿವಾಸಮೂರ್ತಿ ಹೇಳಿದರು.

Facebook Comments