ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಆರ್ಥಿಕ ಸ್ಥಿತಿ ಉತ್ತಮವಾಗಿಲ್ಲ : ಶ್ರೀರಾಮುಲು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಸೆ.24- ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಕುರಿತು ಆರ್ಥಿಕ ಪರಿಸ್ಥಿತಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಆರ್ಥಿಕ ಸ್ಥಿತಿ ಉತ್ತಮವಾಗಿಲ್ಲ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದರು.

ವಿಧಾನಪರಿಷತ್‍ನಲ್ಲಿಂದು ಜೆಡಿಎಸ್‍ನ ಮರಿತಿಬ್ಬೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಒಂದು ಲಕ್ಷ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ನೀಡಲಾಗಿದೆ. ಹಿಂದುಳಿದ ವರ್ಗಗಳ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ನೀಡಬೇಕೆಂದು ಸದಸ್ಯರು ಬೇಡಿಕೆ ಮಂಡಿಸಿದ್ದಾರೆ. ಆದರೆ, ಆರ್ಥಿಕ ಪರಿಸ್ಥಿತಿ ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ ಎಂದರು.

ಸಚಿವರ ಉತ್ತರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಮರಿತಿಬ್ಬೇಗೌಡ ಅವರು, ಯಾರಿಗೋ ಲಾಭ ಮಾಡಿಕೊಡುವ ಸಲುವಾಗಿ ಸೇವಾ ಸಿಂಧು ಅಪ್ಲಿಕೇಷನ್ ಮಾಡಲಾಗಿದೆ. ಅದರಲ್ಲಿ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು 150 ರೂ. ಪಾವತಿಸಬೇಕು. ಕಚೇರಿಗೆ ಅಲೆಯಬೇಕು. ಪ್ರತಿ ವರ್ಷ ಪಾಸ್ ನವೀಕರಣಕ್ಕೆ ಹೊಸ ಪ್ರಕ್ರಿಯೆಗಳನ್ನೇ ಪಾಲನೆ ಮಾಡಬೇಕು. ಇದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.ನಂತರ ಕಾಂಗ್ರೆಸ್‍ನ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರ ನೀಡಿದ ಶ್ರೀರಾಮುಲು, ರಾಜ್ಯದ ಗಡಿ ಭಾಗಗಳಲ್ಲಿ 15 ಸಾರಿಗೆ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಅವುಗಳಿಗೆ 37 ಹುದ್ದೆಗಳ ಪೈಕಿ 8 ಮಂದಿ ಮಾತ್ರ ಕೆಲಸ ಮಾಡುತ್ತಿದ್ದಾರೆ. 21 ಹುದ್ದೆಗಳು ಖಾಲಿ ಇವೆ.

ಸಾರಿಗೆ ಇಲಾಖೆಗೆ 2781 ಹುದ್ದೆಗಳು ಮಂಜೂರಾಗಿದ್ದು, 1252 ಮಂದಿ ಕೆಲಸ ಮಾಡುತ್ತಿದ್ದಾರೆ. 1529 ಹುದ್ದೆಗಳು ಖಾಲಿ ಇವೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಈಗಾಗಲೇ ಕೆಪಿಎಸ್‍ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಹೇಳಿದರು.

Facebook Comments

Sri Raghav

Admin