ಸುಧಾಕರ್‌ಗೆ `ಆರೋಗ್ಯ’ ಭಾಗ್ಯ, ಶ್ರೀರಾಮುಲುಗೆ ಹಿಂಬಡ್ತಿ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.12- ನಿರೀಕ್ಷೆಯಂತೆ ರಾಜ್ಯ ಸರ್ಕಾರ ಇಬ್ಬರು ಸಚಿವರ ಖಾತೆಗಳನ್ನು ಬದಲಾವಣೆ ಮಾಡಿದ್ದು, ಸಚಿವ ಶ್ರೀರಾಮುಲುಗೆ ಸಮಾಜ ಕಲ್ಯಾಣ ಖಾತೆ ನೀಡುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮರ್ಮಾಘಾತ ನೀಡಿದ್ದಾರೆ.

ಈವರೆಗೂ ಶ್ರೀರಾಮುಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣದ ಜತೆಗೆ ಹಿಂದುಳಿದ ವರ್ಗಗಳ ಖಾತೆಯನ್ನೂ ಹೊಂದಿದ್ದರು. ಇದೀಗ ಸಿಎಂ ಅವರು ಅವರ ಬಳಿ ಇದ್ದ ಎರಡೂ ಖಾತೆಗಳನ್ನು ಹಿಂಪಡೆದು ಕೇವಲ ಸಮಾಜ ಕಲ್ಯಾಣ ಇಲಾಖೆಗೆ ಸೀಮಿತಗೊಳಿಸಿದ್ದಾರೆ.

ನಿನ್ನೆವರೆಗೂ ರಾಮುಲುಗೆ ಹಿಂದುಳಿದ ವರ್ಗಗಳ ಜತೆಗೆ ಸಮಾಜ ಕಲ್ಯಾಣ ಖಾತೆಯನ್ನೂ ನೀಡಲಾಗುತ್ತದೆ ಎಂಬ ಸುದ್ದಿ ಹಬ್ಬಿತ್ತು. ಇದೀಗ ರಾಜ್ಯಪಾಲ ವಿ.ಆರ್.ವಾಲಾ ಅವರು ಹೊರಡಿಸಿರುವ ಅಸೂಚನೆಯಲ್ಲಿ ಹಿಂದುಳಿದ ವರ್ಗಗಳ ಖಾತೆಯನ್ನು ಸಿಎಂ ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಅವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಹಣಕಾಸು, ಬೆಂಗಳೂರು ಅಭಿವೃದ್ಧಿ, ಇಂಧನ, ಗುಪ್ತಚರ, ಯೋಜನೆ, ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ, ಸಣ್ಣ-ಮಧ್ಯಮ ಕೈಗಾರಿಕೆ ಜತೆಗೆ ಹಿಂದುಳಿದ ವರ್ಗಗಳ ಖಾತೆಯನ್ನು ಇಟ್ಟುಕೊಂಡಿದ್ದಾರೆ.

ಉಳಿದಂತೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಬಳಿ ಇದ್ದ ಸಮಾಜ ಕಲ್ಯಾಣ ಖಾತೆಯನ್ನು ರಾಮುಲುಗೆ ನೀಡಲಾಗಿದೆ. ಇದೀಗ ಕಾರಜೋಳಗೆ ಕೇವಲ ಲೋಕೋಪಯೋಗಿ ಖಾತೆಯನ್ನು ಮಾತ್ರ ನೀಡಲಾಗಿದೆ. ನಿರೀಕ್ಷೆಯಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‍ಗೆ ಹೆಚ್ಚುವರಿಯಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯನ್ನು ವಹಿಸಲಾಗಿದೆ.

ಕೋವಿಡ್ ನಿಯಂತ್ರಣದಲ್ಲಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಪ್ರಮುಖ ಪಾತ್ರ ವಹಿಸಿದ ಕಾರಣ ಅಲ್ಲದೆ ಸ್ವತಃ ವೈದ್ಯರಾಗಿರುವ ಹಿನ್ನೆಲೆಯಲ್ಲಿ ನಿರೀಕ್ಷೆಯಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯನ್ನು ವಹಿಸಲಾಗಿದೆ.

ಮೂಲಗಳ ಪ್ರಕಾರ ಉಪಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ಸಂಪುಟ ವಿಸ್ತರಣೆ ಹಾಗೂ ಪುನಾರಚನೆಯಾಗಲಿದ್ದು, ಸಚಿವರ ಬಳಿ ಹೆಚ್ಚುವರಿ ಖಾತೆಗಳನ್ನು ಹಿಂಪಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಹೊಸದಾಗಿ ಸಂಪುಟಕ್ಕೆ ಸೇರ್ಪಡೆಯಾಗುವವರಿಗೆ ಈ ಖಾತೆಗಳನ್ನು ಹಂಚಿಕೆ ಮಾಡಲು ಸಿಎಂ ತೀರ್ಮಾನಿಸಿದ್ದಾರೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.

Facebook Comments

Sri Raghav

Admin