SSLC ಪರೀಕ್ಷೆಗೆ ಸಕಲ ತಯಾರಿಗೆ ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಇಲಾಖೆ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜೂ.25- ಜುಲೈ ಮೂರನೇ ವಾರದಲ್ಲಿ ನಡೆಸಲು ಉದ್ದೇಶಿಸಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಪರೀಕ್ಷಾ ಕಾರ್ಯದಲ್ಲಿ ತೊಗಡುವ ಎಲ್ಲಾ ಅಧಿಕಾರಿಗಳು, ಶಿಕ್ಷಕರು ಮತ್ತು ಇತರೆ ಸಿಬ್ಬಂದಿಗೆ ಆದ್ಯತೆಯ ಮೇಲೆ ಕೋವಿಡ್ ಲಸಿಕೆ ನೀಡಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಈ ಸಂಬಂಧ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗಲಿರುವ ಅಧಿಕಾರಿಗಳು, ಶಿಕ್ಷಕರು ಮತ್ತು ಸಿಬ್ಬಂದಿಯ ಪಟ್ಟಿಯನ್ನು ಆಯಾ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ನೀಡಲಿದ್ದು, ಅವರೆಲ್ಲರಿಗೂ ಪರೀಕ್ಷೆ ಆರಂಭಕ್ಕೂ ಮುನ್ನವೇ ಲಸಿಕೆ ದೊರೆಯುವಂತೆ ಕ್ರಮ ವಹಿಸಬೇಕೆಂದು ಸೂಚಿಸಿದ್ದಾರೆ.

ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಈ ಬಾರಿ 6000ಕ್ಕೂ ಹೆಚ್ಚಿನ ಪರೀಕ್ಷಾ ಕೇಂದ್ರಗಳನ್ನು ನಿಗದಿಪಡಿಸಲಾಗಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗುವ ಅಧಿಕಾರಿಗಳು, ಶಿಕ್ಷಕರು ಹಾಗೂ ಸಿಬ್ಬಂದಿಯ ಪಟ್ಟಿಯನ್ನು ಆಯಾ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ನೀಡಲಿದ್ದು, ಅವರೆಲ್ಲರಿಗೂ ಪರೀಕ್ಷೆ ಆರಂಭಕ್ಕೂ ಮುನ್ನವೇ ಲಸಿಕೆ ದೊರೆಯುವಂತೆ ಮಾಡಿ ಎಂದು ತಿಳಿಸಿದ್ದಾರೆ.

ಇದೇ ವೇಳೆ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಈಗಾಗಲೇ ಕೋವಿಡ್ ಕರ್ತವ್ಯಗಳಲ್ಲಿ ತೊಡಗಿರುವ ಬೆಂಗಳೂರು ನಗರದ ಶಿಕ್ಷಕರನ್ನು ಕೋವಿಡ್ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕೆಂದು ಬಿಬಿಎಂಪಿ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ.

ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಹ ನಡೆಯುತ್ತಿರುವುದರಿಂದ ಶಿಕ್ಷಕರು ಶಾಲಾ ಕರ್ತವ್ಯದಲ್ಲಿ ಭಾಗಿಯಾಗಿರಬೇಕಿರುವುದರಿಂದ ತಕ್ಷಣವೇ ಶಿಕ್ಷಕರನ್ನು ಕೋವಿಡ್ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕೆಂದು ಸಚಿವರು ತಿಳಿಸಿದ್ದಾರೆ.

Facebook Comments