ಡಿ.4ರಂದು ಟೌನ್‍ಹಾಲ್‍ನಲ್ಲಿ ಸ್ಥಾಯಿ ಸಮಿತಿ ಚುನಾವಣೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.2- ಪಾಲಿಕೆಯ 12 ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆಗೆ ಡಿ.4ರಂದು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ನಡೆಸಲು ಉದ್ದೇಶಿಸಿದ್ದ ಚುನಾವಣೆಯನ್ನು ಟೌನ್‍ಹಾಲ್‍ನಲ್ಲಿ ನಡೆಸಲು ಪ್ರಾದೇಶಿಕ ಆಯುಕ್ತರು ತೀರ್ಮಾನಿಸಿದ್ದಾರೆ. ಡಿ.5ರಂದು ಶಿವಾಜಿನಗರ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದ್ದು , ಬಿಬಿಎಂಪಿಯ ಕೇಂದ್ರ ಕಚೇರಿ ಅದೇ ಕ್ಷೇತ್ರದ ವ್ಯಾಪ್ತಿಗೆ ಬರುವುದರಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಪ ಚುನಾವಣೆ ನಡೆಯುವ ಸಂದರ್ಭದಲ್ಲಿ ಮತದಾರರಲ್ಲದ ರಾಜಕೀಯ ಪಕ್ಷಗಳ ಮುಖಂಡರು ಕ್ಷೇತ್ರ ತೊರೆಯುವುದು ಅನಿವಾರ್ಯ. ಮಾತ್ರವಲ್ಲ 48 ಗಂಟೆಗಳ ಕಾಲ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಇಂತಹ ಪರಿಸ್ಥಿತಿಯನ್ನು ನಿಯಂತ್ರಿಸುವ ಸಲುವಾಗಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ನಡೆಸಲು ಉದ್ದೇಶಿಸಿದ್ದ ಸ್ಥಾಯಿ ಸಮಿತಿಗಳ ಚುನಾವಣೆಯನ್ನು ಟೌನ್‍ಹಾಲ್‍ಗೆ ಸ್ಥಳಾಂತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಡಿ.4ರಂದು ಬೆಳಗ್ಗೆ 8 ರಿಂದ 9.30ರವರೆಗೆ ನಾಮಪತ್ರ ಸ್ವೀಕರಿಸಲಾಗುವುದು. ಉಳಿದಂತೆ ಈ ಹಿಂದೆ ನಿಗದಿಪಡಿಸಲಾದ ಚುನಾವಣಾ ವೇಳಾಪಟ್ಟಿಯಂತೆ ಚುನಾವಣೆ ನಡೆಯಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಮುಂದೂಡಿಕೆ ಇಲ್ಲ: ಡಿ.5ರಂದು ರಾಜ್ಯದ 15 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿರುವುದರಿಂದ ಡಿ.4ರಂದು ನಡೆಸಲು ಉದ್ದೇಶಿಸಿರುವ ಬಿಬಿಎಂಪಿ ಸ್ಥಾಯಿ ಸಮಿತಿಗಳ ಚುನಾವಣೆಯನ್ನು ಮುಂದೂಡುವಂತೆ ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ಮುಖಂಡರು ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿದ್ದರು.

ಆದರೆ ಈ ಮನವಿಯನ್ನು ತಿರಸ್ಕರಿಸಿರುವ ಆಯುಕ್ತರು ಡಿ.4ರಂದೇ ಟೌನ್‍ಹಾಲ್‍ನಲ್ಲಿ ನಿಗದಿಯಂತೆ ಚುನಾವಣೆ ನಡೆಸಲು ಮುಂದಾಗಿದ್ದಾರೆ.

Facebook Comments