ಸರ್ಕಾರಿ ಶಾಲೆ ಗುಣಮಟ್ಟ ಹೆಚ್ಚಿಸಲು ಕ್ರಮ: ಸಚಿವ ಸುರೇಶ್‍ಕುಮಾರ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜ.17- ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು, ಮೂಲ ಸೌಕರ್ಯ ಕಲ್ಪಿಸುವ ಸಂಬಂಧ ವಿವಿಧ ಉದ್ದಿಮೆಗಳು ಹಾಗೂ ಪ್ರತಿನಿಧಿಗಳೊಂದಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಇಂದು ಸಂವಾದ ನಡೆಸಿದರು.  ವಿಕಾಸಸೌಧದಲ್ಲಿಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಆಯೋಜಿಸಿದ್ದ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಬಲಗೊಳಿಸಲು ಖಾಸಗಿ ಪಾಲುದಾರಿಕೆ ಕುರಿತ ಸಂವಾದದಲ್ಲಿ, ವಿವಿಧ ಬಹುರಾಷ್ಟ್ರೀಯ ಕಂಪನಿಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಉದ್ದಿಮೆ ಅಥವಾ ಕಂಪನಿಗಳ ಸಿಎಸ್‍ಆರ್ ನಿಧಿ ಬಳಸಿ ಸರ್ಕಾರಿ ಶಾಲೆಗಳ ಮೂಲಸೌಲಭ್ಯ ಅಭಿವೃದ್ದಿಪಡಿಸುವ ಸಂಬಂಧ ಸಂವಾದ ನಡೆಸಲಾಯಿತು.  ಈಗಾಗಲೇ ಟಯೋಟ, ರೋಟರಿ ಸೇರಿದಂತೆ ಹಲವು ಸಂಸ್ಥೆಗಳು ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿದೆ. ಸಿಸ್ಕೋ, ಎಚ್‍ಡಿಎಫ್‍ಸಿ ಸೇರಿದಂತೆ ಹಲವು ಕಂಪನಿಗಳು ಸರ್ಕಾರಿ ಶಾಲೆಗಳಿಗೆ ಮೂಲ ಸೌಲಭ್ಯ ಕಲ್ಪಿಸಲು ಮುಂದೆ ಬಂದಿವೆ ಎಂಬ ಮಾಹಿತಿಯನ್ನು ಸಂವಾದದ ಸಂದರ್ಭದಲ್ಲಿ ನೀಡಲಾಯಿತು.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ.ಜಗದೀಶ್ ಮಾತನಾಡಿ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣದಲ್ಲಿ ಸಾಕಷ್ಟು ಸವಾಲುಗಳು ಎದುರಾಗುತ್ತಿವೆ. ಸರ್ಕಾರ 22,805.84 ಕೋಟಿ ರೂ. ಅನುದಾನ ಒದಗಿಸಿದ್ದರು. ಶೇ.79ರಷ್ಟು ವೇತನ ಮತ್ತು ಇತರೆ ವೆಚ್ಚಕ್ಕೆ ಖರ್ಚಾಗುತ್ತಿದೆ. ಉತ್ತಮ ಗುಣಮಟ್ಟದ 276 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಿದ್ದು, ಆ ಶಾಲೆಗಳಲ್ಲಿ ಉತ್ತಮ ಮೂಲಸೌಲಭ್ಯ ಹಾಗೂ ಉತ್ತಮ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಇಂತಹ ಶಾಲೆಗಳನ್ನು ಹೋಬಳಿಗೊಂದನ್ನು ತೆರೆಯುವ ಉದ್ದೇಶವಿದೆ ಎಂದರು.

ಮಧ್ಯಾಹ್ನದ ಬಿಸಿಯೂಟ, ಉಚಿತ ಪಠ್ಯಪುಸ್ತಕ ವಿತರಣೆ ಸೇರಿದಂತೆ ಸರ್ಕಾರಿ ಶಾಲೆಗಳ ಶಿಕ್ಷಣ ಗುಣಮಟ್ಟದ ಹೆಚ್ಚಳಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.
ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗಾಗಿ ವಿಶ್ವಾಸ ಕಿರಣ ಕಾರ್ಯಕ್ರಮದಡಿ ರಜಾದಿನಗಳಲ್ಲೂ ಶಿಕ್ಷಣ ನೀಡಲಾಗುತ್ತಿದೆ. ಒಂದು ಸಾವಿರ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲೀಷ್ ಶಿಕ್ಷಣವನ್ನು ಆರಂಭಿಸಲಾಗಿದೆ.

ಸುರಕ್ಷತೆಗೆ ಆದ್ಯತೆ ನೀಡಲಾಗುತ್ತಿದ್ದು, ಸಿಸಿ ಕ್ಯಾಮೆರಾ ಅಳವಡಿಕೆಗೆ 24,324 ಲಕ್ಷ ರೂ. ವೆಚ್ಚ ಮಾಡಲಾಗುತ್ತಿದೆ. ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳಲ್ಲಿ 4,103 ಕ್ಲಸ್ಟರ್ ಸಂಪನ್ಮೂಲ ಕೇಂದ್ರಗಳಿವೆ. ಶೇ.72.19ರಷ್ಟು ಸರ್ಕಾರಿ ಶಾಲೆಗಳಿದ್ದು, ಶೇ.56.11ರಷ್ಟು ವಿದ್ಯಾರ್ಥಿಗಳಿದ್ದಾರೆ. ಶೇ.27.81ರಷ್ಟು ಖಾಸಗಿ ಶಾಲೆಗಳಿದ್ದು, ಶೇ.43.89ರಷ್ಟು ವಿದ್ಯಾರ್ಥಿಗಳಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಶೇ.64.46ರಷ್ಟು ಶಿಕ್ಷಕರಿದ್ದರೆ, ಖಾಸಗಿ ಶಾಲೆಗಳಲ್ಲಿ ಶೇ.35.54 ರಷ್ಟು ಶಿಕ್ಷಕರಿದ್ದಾರೆ ಎಂದು ಹೇಳಿದರು.

ಪ್ರಸ್ತುತ ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಒದಗಿಸಿರುವ ಮೂಲಸೌಕರ್ಯ, ಶಿಕ್ಷಣ ಗುಣಮಟ್ಟಕ್ಕೆ ತೆಗೆದುಕೊಂಡಿರುವ ಕ್ರಮಗಳು, ಎದುರಿಸಬೇಕಾದ ಸವಾಲುಗಳ ಬಗ್ಗೆಯೂ ಅವರು ಬೆಳಕು ಚೆಲ್ಲಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ಸರ್ವಶಿಕ್ಷಣ ಅಭಿಯಾನದ ಯೋಜನಾ ನಿರ್ದೇಶಕ ಎಂ.ಟಿ.ರೇಜು ಪಾಲ್ಗೊಂಡಿದ್ದರು.

Facebook Comments