ಹಳೆಯ ಪ್ರಶ್ನೆ ಪತ್ರಿಕೆ ನೀಡಿದವರ ವಿರುದ್ಧ ಕ್ರಮ : ಸಚಿವ ಸುರೇಶ್ ಕುಮಾರ್

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು, ಜು.2- ವಿಜಯಪುರದ ದರ್ಬಾರ್ ಸೆಂಟರ್‍ನಲ್ಲಿ ಹಳೆಯ ಪ್ರಶ್ನೆಪತ್ರಿಕೆ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅದಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.

ಅವರು ಇಂದು ಬೆಳಗ್ಗೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದು ನಂತರ ವಿದ್ಯಾರ್ಥಿಗಳು ಉಪಹಾರ ಸೇವಿಸುತ್ತಿದ್ದ ಸಭಾಂಗಣಕ್ಕೆ ಭೇಟಿ ನೀಡಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಸಮರ್ಥವಾಗಿ ಬರೆದಿದ್ದೀರಾ ಎಂದು ವಿಚಾರಿಸಿದರು. ವಿದ್ಯಾರ್ಥಿಗಳು ಹೌದು ಎಂದು ಉತ್ಸಾಹದಿಂದ ಹೇಳಿದರು.

ಕೆಲವು ವಿದ್ಯಾರ್ಥಿಗಳಿಗೆ ಉಪಹಾರ ಬಡಿಸಿ ಉಳಿದ ಪರೀಕ್ಷೆಯನ್ನು ಆತ್ಮಸ್ಥೈರ್ಯದಿಂದ ಬರೆಯಿರಿ, ಅಲ್ ದ ಬೆಸ್ಟ್ ಎಂದು ಹೇಳುವ ಮೂಲಕ ಸುರೇಶ್‍ಕುಮಾರ್ ಧೈರ್ಯ ತುಂಬಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಾಲ್ಕು ಪ್ರಶ್ನೆ ಪತ್ರಿಕೆಗಳು ಮುಗಿದಿವೆ. ಉಳಿದ ಪ್ರಶ್ನೆ ಪತ್ರಿಕೆಗಳನ್ನು ವಿದ್ಯಾರ್ಥಿಗಳು ಚೆನ್ನಾಗಿ ಬರೆಯಲಿ ಎಂಬ ಹಿನ್ನೆಲೆಯಲ್ಲಿ ಸಿದ್ಧಗಂಗಾ ಮಠದ ಎಸ್‍ಎಸ್ ಎಲ್‍ಸಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ್ದೇನೆ.

ಇದಕ್ಕೆ ವಿಧಾನ ಪರಿಷತ್ ಸದಸ್ಯ ನಾರಾಯಣ್ ಸ್ವಾಮಿ ಅವರು ಸಾಥ್ ನೀಡಿದ್ದಾರೆ ಎಂದು ಹೇಳಿದರು. ರಾಜ್ಯಾದ್ಯಂತ ಯಾವುದೇ ಸಮಸ್ಯೆಯಿಲ್ಲದೆ ಪರೀಕ್ಷೆಗಳು ನಡೆಯುತ್ತಿವೆ. ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಸೇರಿದಂತೆ ಎಲ್ಲವೂ ಸಮರ್ಥವಾಗಿ ನಡೆಯುತ್ತಿವೆ.

ಯಾವುದೇ ಗೊಂದಲ ಇಲ್ಲ ಎಂದ ಅವರು, ವಿಜಯಪುರದಲ್ಲಿ ನಿನ್ನೆ ಪರೀಕ್ಷೆಯಲ್ಲಿ ರಿಪಿಟರ್ಸ್ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡುವುದರಲ್ಲಿ ಗೊಂದಲ ಉಂಟಾಗಿದೆ ಎಂಬ ಮಾಹಿತಿ ಬಂದಿದೆ ಎಂದು ತಿಳಿಸಿದರು.

ಈಗ ಅದರ ಬಗ್ಗೆ ಅಲ್ಲಿನ ಅಧಿಕಾರಿಗಳಿಂದ ಮಾಹಿತಿ ಕೇಳಿದ್ದೇನೆ. ಮಾಹಿತಿ ಬಂದ ಕೂಡಲೇ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದು ಎಂದು ಅವರು ತಿಳಿಸಿದರು. ರಾಜ್ಯಾದ್ಯಂತ ಶೇ.98ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಶೇ.2ರಷ್ಟು ಅಂದರೆ 15 ಸಾವಿರ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಅವರು ತಿಳಿಸಿದರು.

ಪರೀಕ್ಷೆಗಳಲ್ಲಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅದರ ಹಿನ್ನೆಲೆಯಲ್ಲಿ ಇಂದು ತುಮಕೂರು ನಗರ, ಕೊರಟಗೆರೆ, ದಾಬಸ್‍ಪೇಟೆ, ನೆಲಮಂಗಲದ ಹಲವು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ ಎಂದರು.
ನಗರದ ಶಾಸಕ ಜಿ.ಬಿ.ಜ್ಯೋತಿ ಗಣೇಶ್, ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಕಾಮಾಕ್ಷಮ್ಮ ಸೇರಿದಂತೆ ಹಲವು ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.

Facebook Comments