ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಟಿ.ಬಿ.ಜಯಚಂದ್ರ ಹೆಸರು ಪ್ರಸ್ತಾಪ

ಈ ಸುದ್ದಿಯನ್ನು ಶೇರ್ ಮಾಡಿ

TB--JAYACHANDRA

ಬೆಂಗಳೂರು, ಜೂ.15- ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರ ಹೆಸರು ಪ್ರಬಲವಾಗಿ ಕೇಳಿಬರಲಾರಂಭಿಸಿದೆ.ಉಪಮುಖ್ಯಮಂತ್ರಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಪಕ್ಷದ ಜವಾಬ್ದಾರಿಯನ್ನು ಬಿಟ್ಟುಕೊಡಬೇಕಾಗಿದ್ದು, ತೆರವಾಗುವ ಹುದ್ದೆಗೆ ನೂತನ ಅಧ್ಯಕ್ಷರ ಆಯ್ಕೆಗೆ ಗಂಭೀರ ಚರ್ಚೆಗಳು ನಡೆಯುತ್ತಿವೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ದಿನೇಶ್‍ಗುಂಡೂರಾವ್, ಎಸ್.ಆರ್.ಪಾಟೀಲ್, ಎಂ.ಬಿ.ಪಾಟೀಲ್ ಅವರ ಹೆಸರುಗಳು ಚರ್ಚೆಯ ಹಂತದಲ್ಲಿದ್ದು, ಈ ನಡುವೆ ಟಿ.ಬಿ.ಜಯಚಂದ್ರ ಅವರ ಹೆಸರು ಪ್ರಸ್ತಾಪವಾಗಿದೆ.
ಒಕ್ಕಲಿಗ ಸಮುದಾಯದ ಡಿ.ಕೆ.ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿ ಮಾಡಬೇಕು ಎಂಬ ಬೇಡಿಕೆ ಇತ್ತು. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ಅವರ ಹೆಸರು ಕೇಳಿ ಬಂದಿತ್ತು. ಆದರೆ, ಅದೆಲ್ಲವೂ ಬದಿಗೆ ಸರಿದಿದ್ದು, ಸಚಿವ ಸ್ಥಾನ ಮಾತ್ರ ನೀಡಲಾಗಿದೆ.

ಹೀಗಾಗಿ ಒಕ್ಕಲಿಗ ಸಮುದಾಯ ಕಾಂಗ್ರೆಸ್ ವಿಷಯದಲ್ಲಿ ಅತೃಪ್ತಿ ಹೊಂದಿದ್ದು, ಅದನ್ನು ಸರಿದೂಗಿಸಲು ಕೆಪಿಸಿಸಿಗೆ ಒಕ್ಕಲಿಗ ಸಮುದಾಯದ ಟಿ.ಬಿ.ಜಯಚಂದ್ರ ಅವರನ್ನು ನೇಮಿಸಬೇಕೆಂಬ ಒತ್ತಾಯ ಕೇಳಿ ಬಂದಿದೆ.ಸಮ್ಮಿಶ್ರ ಸರ್ಕಾರದಲ್ಲಿ ಕುಂಚಿಟಿಗ ಸಮುದಾಯಕ್ಕೆ ಆದ್ಯತೆ ಸಿಕ್ಕಿಲ್ಲ. ಹೀಗಾಗಿ ಜಯಚಂದ್ರ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನೇಮಿಸಿದರೆ ಸಾಮಾಜಿಕ ನ್ಯಾಯ ಒದಗಿಸಿದಂತಾಗುತ್ತದೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಎಸ್.ಎಂ.ಕೃಷ್ಣಾ ನಂತರ ಒಕ್ಕಲಿಗರನ್ನು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನೇಮಿಸಿಲ್ಲ. ಡಿ.ಕೆ.ಶಿವಕುಮಾರ್ ಕೆಲ ಕಾಲ ಕಾರ್ಯಾಧ್ಯಕ್ಷರಾಗಿದ್ದರಾದರೂ ಅದು ಆಟಕುಂಟು ಲೆಕ್ಕಕ್ಕಿಲ್ಲ ಎಂಬಂತಿತ್ತು. ಹೀಗಾಗಿ ಈ ಬಾರಿ ಒಕ್ಕಲಿಗ ಸಮುದಾಯಕ್ಕೆ ಪಕ್ಷದ ಅಧ್ಯಕ್ಷ ಸ್ಥಾನ ನೀಡಿ ಸಮುದಾಯವನ್ನು ಸೆಳೆಯುವ ಚಿಂತನೆ ನಡೆದಿದೆ.

ಜಯಚಂದ್ರ ಅವರು 1969ರಿಂದಲೂ ಕಾಂಗ್ರೆಸ್ ಪಕ್ಷದಲ್ಲಿದ್ದು, ಒಟ್ಟು 9 ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. 6 ಬಾರಿ ಗೆದ್ದು, ಮೂರು ಬಾರಿ ಸೋಲು ಕಂಡಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಶಿರಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದಾರೆ.ಹಿಂದೆ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಅತ್ಯಂತ ಪ್ರಭಾವಿ ಸಚಿವರಾಗಿದ್ದ ಜಯಚಂದ್ರ, ಹಲವಾರು ಪ್ರಮುಖ ಕಾನೂನುಗಳನ್ನು ರೂಪಿಸುವಲ್ಲಿ ಪ್ರಧಾನ ಪಾತ್ರ ವಹಿಸಿದ್ದರು. ಯಾರೊಂದಿಗೂ ವೈಮನಸ್ಸು ಕಟ್ಟಿಕೊಳ್ಳದೆ ಎಲ್ಲರನ್ನೂ ಒಳಗೊಳ್ಳುವ ಸ್ವಭಾವದವರಾದ ಜಯಚಂದ್ರ ಅವರೇ ಪಕ್ಷದ ಅಧ್ಯಕ್ಷರಾಗಲಿ ಎಂದು ಕೆಲವರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಆದರೆ, ಚುನಾವಣೆಯಲ್ಲಿ ಸೋಲು ಕಂಡಿರುವುದು ಮತ್ತು ತುಮಕೂರು ಜಿಲ್ಲೆಗೆ ಈಗಾಗಲೇ ಉಪಮುಖ್ಯಮಂತ್ರಿ ಹುದ್ದೆ ಜತೆಗೆ ಎರಡು ಸಚಿವ ಸ್ಥಾನ ಸಿಕ್ಕಿರುವುದರಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಅದೇ ಜಿಲ್ಲೆಗೆ ನೀಡಿದರೆ ಪ್ರಾದೇಶಿಕ ಸಮತೋಲ ಸಾಧ್ಯವಾಗುವುದಿಲ್ಲ ಎಂಬ ಆಕ್ಷೇಪಗಳು ಕೇಳಿಬಂದಿವೆ.

Facebook Comments

Sri Raghav

Admin