ಎಸ್‍ಎಸ್‍ಎಲ್‍ಸಿ ಪರೀಕ್ಷೆ ರದ್ದುಪಡಿಸಲು ತನ್ವೀರ್ ಸೇಠ್ ಒತ್ತಾಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.12- ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ರದ್ದುಪಡಿಸುವಂತೆ ಮಾಜಿ ಸಚಿವ ತನ್ವೀರ್ ಸೇಠ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಅವರು ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ರದ್ದುಮಾಡುವ ಮೂಲಕ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿರುವ ಆತಂಕವನ್ನು ದೂರ ಮಾಡಬೇಕು ಎಂದಿದ್ದಾರೆ.

ಕಳೆದ 2017-18ನೆ ಸಾಲಿನಿಂದ ಜಾರಿಗೆ ತಂದಿರುವ ಶಿಕ್ಷಣ ಕಿರಣ ತಂತ್ರಾಂಶದಲ್ಲಿ ಎಲ್ಲ ವಿದ್ಯಾರ್ಥಿಗಳ ಶೈಕ್ಷಣಿಕ ಮಾಹಿತಿ ಲಭ್ಯವಿರುವುದನ್ನು ಆಧರಿಸಿ ಫಲಿತಾಂಶ ಘೋಷಣೆ ಮಾಡಲು ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಸಲಹೆ ಮಾಡಿದ್ದಾರೆ.

ಈಗಾಗಲೇ ತೆಲಂಗಾಣ, ತಮಿಳುನಾಡು ರಾಜ್ಯಗಳು 10ನೆ ತರಗತಿ ಪರೀಕ್ಷೆಯನ್ನು ರದ್ದುಪಡಿಸಿ ಎಲ್ಲ ವಿದ್ಯಾರ್ಥಿಗಳನ್ನೂ ಉತ್ತೀರ್ಣ ಮಾಡುವ ಮಹತ್ವದ ನಿರ್ಣಯವನ್ನು ಕೈಗೊಂಡಿವೆ.

ಆ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಶೀಘ್ರ ನಿರ್ಧಾರವನ್ನು ಪ್ರಕಟಿಸಬೇಕು. ಕೋವಿಡ್-19 ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸುವುದು ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಸೂಕ್ತವಲ್ಲ. ಪರೀಕ್ಷೆ ನಡೆಸಲಾಗುತ್ತದೆ ಎಂಬ ಸುದ್ದಿಯಿಂದ ಪೋಷಕರು ಮತ್ತು ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಲಾಕ್‍ಡೌನ್ ಸಂದರ್ಭದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದರಿಂದ ಹಲವು ಮಕ್ಕಳು ಕುಟುಂಬ ಸಮೇತ ಶಾಲೆಯಿಂದ ದೂರದ ಸ್ವಂತ ಊರುಗಳಿಗೆ ತೆರಳಿದ್ದಾರೆ. ಹೀಗಾಗಿ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಬಂದು ಪರೀಕ್ಷೆ ಬರೆಯಲು ಕಷ್ಟವಾಗುತ್ತದೆ.

ಗಡಿ ಪ್ರದೇಶದ ಶಾಲೆಗಳಿಗೆ ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣ, ಆಂಧ್ರ ಪ್ರದೇಶ, ಗೋವಾ ಮತ್ತು ಕೇರಳ ರಾಜ್ಯಗಳಿಂದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಲು ತೊಂದರೆ ಇದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Facebook Comments