ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಸಿದ್ಧಪಡಿಸಲು ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.12- ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರ ಪಟ್ಟಿಯನ್ನು ಯಾವುದೇ ಲೋಪದೋಷವಿಲ್ಲದೆ ಸಿದ್ಧಪಡಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅದು ನಡೆದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿಯವರು ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರರ ಪರಿಷ್ಕರಣಾ ಪಟ್ಟಿ ತಯಾರಿಸಲು ತಾಲ್ಲೂಕು ಕ್ಷೇತ್ರಶಿಕ್ಷಣಾಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ಈಗಾಗಲೇ ನೇಮಿಸಲಾಗಿದ್ದು, ಶೀಘ್ರದಲ್ಲೇ ಮತದಾರರ ಪಟ್ಟಿ ತಯಾರಿಸಲು ಕ್ರಮ ವಹಿಸಬೇಕು ಎಂದರು.

ನೆಲಮಂಗಲ ತಾಲ್ಲೂಕಿನಲ್ಲಿ 517, ಹೊಸಕೋಟೆ ತಾಲ್ಲೂಕಿನಲ್ಲಿ 1054, ದೇವನಹಳ್ಳಿ 458 ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 725 ಮಂದಿ ಶಿಕ್ಷಕರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ.

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಯಾಗದ ಅರ್ಹ ಶಿಕ್ಷಕರಿಗೆ ಗಡುವು ನೀಡಿ ಹೆಸರು ಸೇರ್ಪಡೆಗೆ ಕ್ರಮ ವಹಿಸಬೇಕು
ಹಾಗೂ ಕನಿಷ್ಠ ಮೂರು ವರ್ಷ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿದವರನ್ನು ಮಾತ್ರ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಸುವಾಗ ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದುತಿಳಿಸಿದರು.

ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್.ಕೆ. ನಾಯಕ್, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಅರುಳ್ ಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಗಂಗಯ್ಯ, ದೇವನಹಳ್ಳಿ ತಾಲ್ಲೂಕು ತಹಸೀಲ್ದಾರ್ ಅಜಿತ್ ಕುಮಾರ್, ದೊಡ್ಡಬಳ್ಳಾಪುರ ತಾಲ್ಲೂಕು ತಹಸೀಲ್ದಾರ್ ಶಿವರಾಜï.ಕೆ, ಹೊಸಕೋಟೆ ತಾಲ್ಲೂಕು ತಹಸೀಲ್ದಾರ್ ಗೀತಾ, ನೆಲಮಂಗಲ ತಾಲ್ಲೂಕು ತಹಸೀಲ್ದಾರ್ ಶ್ರೀನಿವಾಸಯ್ಯ, ತಾಲ್ಲೂಕು ಕ್ಷೇತ್ರಶಿಕ್ಷಣಾಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Facebook Comments