“ಭಾರತವನ್ನು ಪ್ರತಿನಿಧಿಸುವ ಪ್ರತಿಯೊಬ್ಬ ಕ್ರೀಡಾಪಟುವೂ ಚಾಂಪಿಯನ್”

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅಕ್ಟೋಬರ್ 11,  ಭಾರತವನ್ನು ಪ್ರತಿನಿಧಿಸುವ ಪ್ರತಿಯೊಬ್ಬ ಕ್ರೀಡಾಪಟುವೂ ಚಾಂಪಿಯನ್. ದಿವ್ಯಾಂಗರು ಸೇರಿದಂತೆ ಇಂದಿನ ಯುವ ಪೀಳಿಗೆ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಮಾಡುವುದು, ರಾಜ್ಯ, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸುವಂತೆ ತರಬೇತಿ ನೀಡುವುದು, ನಾಯಕತ್ವದ ಗುಣಗಳನ್ನು ಬೆಳಸಿಕೊಳ್ಳಲು ಪ್ರೇರೇಪಿಸುವಂತೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.

ರಾಜಭವನದ ಬಾಂಕ್ವೆಟ್ ಸಭಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಟೋಕಿಯೋ ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್ ನಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ಹಾಗೂ ತರಬೇತುದಾರರಿಗೆ ಸನ್ಮಾನ ಸಮಾರಂಭದಲ್ಲಿ ಕ್ರೀಡಾಪಟುಗಳಿಗೆ ನಗದು ಪುರಸ್ಕಾರ ಪ್ರದಾನ ಮಾಡಿ ಅವರು ಮಾತನಾಡಿದರು.

ಕ್ರೀಡಾಪಟುಗಳು ಒಲಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್ ನಲ್ಲಿ ಭಾಗವಹಿಸಿ, ಪದಕಗಳನ್ನು ಗೆಲ್ಲುವ ಮೂಲಕ ವಿಶ್ವದಲ್ಲೇ ಕರ್ನಾಟಕ ರಾಜ್ಯ ಮತ್ತು ದೇಶ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಕ್ರೀಡೆ ಭವಿಷ್ಯ ಉಜ್ವಲವಾಗಲಿದೆ. ಕರ್ನಾಟಕ ಸರ್ಕಾರವು ವಿವಿಧ ಯೋಜನೆಗಳ ಮೂಲಕ ಕ್ರೀಡಾ ಚಟುವಟಿಕೆಗಳನ್ನು ಉತ್ತೇಜಿಸುತ್ತಿದೆ. ವಿವಿಧ ಹಂತಗಳಲ್ಲಿ ಸಾಧನೆ ಮಾಡಿದ ಆಟಗಾರರಿಗೆ ಬಹುಮಾನ ನೀಡುವುದರೊಂದಿಗೆ, ಆಧುನಿಕ ಕ್ರೀಡಾ ಸೌಲಭ್ಯಗಳನ್ನು ಸಹ ಆಟಗಾರರಿಗೆ ಒದಗಿಸಲಾಗುತ್ತಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಅತ್ಯಾಧುನಿಕ ಕ್ರೀಡಾ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಲಾಗಿದೆ. ಈ ಯೋಜನೆಗಳನ್ನು ಕ್ರೀಡಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಹಾಗೂ ವಿಶೇಷವಾಗಿ ದಿವ್ಯಾಂಗರ ಸಾಮರ್ಥ್ಯ, ಚೈತನ್ಯವನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಹೇಳಿದರು.

ಪ್ಯಾರಾಲಿಂಪಿಕ್ ಕ್ರೀಡಾಕೂಟವನ್ನು 1960 ರಲ್ಲಿ ಆರಂಭಿಸಲಾಯಿತು, 1968 ರಲ್ಲಿ ಭಾರತವು ಮೊದಲ ಬಾರಿಗೆ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿತು. 1972ರಲ್ಲಿ ನಡೆದ ಪ್ಯಾರಾಲಿಂಪಿಕ್ಸ್ನಲ್ಲಿ 50 ಮೀಟರ್ ಫ್ರೀಸ್ಟೈಲ್ ಸ್ವಿಮ್ಮಿಂಗ್ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದರು. ಜೋಗಿಂದರ್ ಸಿಂಗ್ ಬೇಡಿ 1984ರ ಪ್ಯಾರಾಲಿಂಪಿಕ್ಸ್ನಲ್ಲಿ ಒಂದು ಬೆಳ್ಳಿ ಮತ್ತು 2 ಕಂಚಿನ ಪದಕ ಒಟ್ಟು ಮೂರು ಪದಕ ಪಡೆಯುವ ಮೂಲಕ ಅತಿ ಹೆಚ್ಚು ಪದಕ ಗೆದ್ದಿರುವ ಭಾರತೀಯ ಪ್ಯಾರಾ ಕ್ರೀಡಾಪಟು ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ಭಾರತವು 1984 ರ ಪ್ಯಾರಾಲಿಂಪಿಕ್ಸ್ ನಂತರ ನಿರಂತರವಾಗಿ ಈ ಆಟಗಳಲ್ಲಿ ಭಾಗವಹಿಸುತ್ತಿದೆ ಎಂದು ತಿಳಿಸಿದರು.

ಟೋಕಿಯೊ ಒಲಿಂಪಿಕ್ -2020 ಕ್ರೀಡಾಕೂಟದಲ್ಲಿ ಭಾರತವು 7 ಪದಕಗಳನ್ನು ಗೆದ್ದಿದೆ. ಟೋಕಿಯೊ ಪ್ಯಾರಾಲಿಂಪಿಕ್ಸ್‌ಗೆ ಮುನ್ನ ಭಾರತವು ಒಟ್ಟು 12 ಪದಕಗಳನ್ನು ಗೆದ್ದಿತ್ತು. ಕ್ರೀಡಾಲೋಕದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಭಾರತೀಯ ಪ್ಯಾರಾ ಅಥ್ಲೀಟ್ ಗಳು ಈ ಬಾರಿ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ 19 ಪದಕಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಈ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾರತೀಯ ಆಟಗಾರರು ಏನೆಲ್ಲಾ ಪದಕಗಳನ್ನು ಗೆದ್ದಿದ್ದಾರೆ ಮತ್ತು ಅದ್ಭುತ ಪ್ರದರ್ಶನ ನೀಡುವ ಮೂಲಕ ಹೊಸ ದಾಖಲೆಗಳನ್ನು ಸೃಷ್ಟಿಸಿರುವುದಕ್ಕೆ ದೇಶ ಹೆಮ್ಮೆ ಪಡುತ್ತದೆ. ನೀವು ಸಾಧಿಸಿದ ಸಾಧನೆ ಯುವ ಆಟಗಾರರಿಗೆ ಅದ್ಭುತ ಮತ್ತು ಸ್ಫೂರ್ತಿದಾಯಕವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕ್ರೀಡಾ ಸಚಿವರಾದ ಡಾ.ಕೆ.ಸಿ ನಾರಾಯಣ ಗೌಡ, ಎಂಎಲ್ ಸಿ ಡಾ.ಕೆ ಗೋವಿಂದರಾಜ್, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯ ಉಪಾಧ್ಯಕ್ಷರಾದ ಶ್ರೀ ಕೆ.ಪಿ ಪುರುಷೋತ್ತಮ, ಯುವ ಸಬಲೀಕರಣ ಮತ್ತು ಕ್ರೀಡೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್ ಉಪಸ್ಥಿತರಿದ್ದರು.

Facebook Comments

Sri Raghav

Admin