ಸಾರಿಗೆ ನಿಗಮಗಳ ಅಧ್ಯಯನಕ್ಕೆ ಸರ್ಕಾರದಿಂದ ಸಮಿತಿ ರಚನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.1- ರಾಜ್ಯದ ಸಾರಿಗೆ ನಿಗಮಗಳ ವಸ್ತು ಸ್ಥಿತಿ ಹಾಗೂ ಆರ್ಥಿಕ ಸ್ವಾವಲಂಬನೆ ಮತ್ತು ಸಂಪನ್ಮೂಲ ಕ್ರೋಢೀಕರಣ ಕುರಿತಾಗಿ ಅಧ್ಯಯನ ನಡೆಸಿ ವರದಿ ನೀಡಲು ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್. ಶ್ರೀನಿವಾಸಮೂರ್ತಿ ನೇತೃತ್ವದಲ್ಲಿ ಸರ್ಕಾರ ಸಮಿತಿ ರಚಿಸಿದೆ.

ಈ ಕುರಿತು ಅಧಿಕೃತ ಆದೇಶವನ್ನು ಹೊರಡಿಸಲಾಗಿದ್ದು, ಕೆಎಸ್‍ಆರ್‍ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ ಸಂಸ್ಥೆ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ನಿಗಮಗಳಲ್ಲಿ ಆರ್ಥಿಕ ಸ್ವಾವಲಂಬನೆ ಮತ್ತು ಸಂಪನ್ಮೂಲ ಕ್ರೋಢೀಕರಣ ಕುರಿತಾಗಿ ಮೂರು ತಿಂಗಳೊಳಗೆ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕೆಂದು ಸೂಚಿಸಲಾಗಿದೆ.

ಸಮಿತಿಯವರು ನಿಗಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರಿಗೆ ಅಗತ್ಯವಿರುವ ಮಾಹಿತಿ ಮತ್ತು ಸಹಕಾರವನ್ನು ನೀಡಬೇಕೆಂದು ಸೂಚನೆಯಲ್ಲಿ ಎಲ್ಲಾ ನಿಗಮಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಲಾಗಿದೆ.

ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಷ್ಟದಲ್ಲಿರುವ ಸಾರಿಗೆ ನಿಗಮವನ್ನು ಲಾಭದತ್ತ ಕೊಂಡೊಯ್ಯಲು ಸಮಿತಿಯನ್ನು ರಚಿಸುವುದಾಗಿ ಘೋಷಣೆ ಮಾಡಿದ್ದಾರೆ.

Facebook Comments