ಪ್ರವಾಹ ಪರಿಸ್ಥಿತಿ ಅಧ್ಯಯನಕ್ಕಾಗಿ ಕೇಂದ್ರ ತಂಡ ರವಾನೆಗೆ ಸಂಪುಟ ಸಭೆಯಲ್ಲಿ ನಿರ್ಧಾರ..?

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಆ.13- ಕರ್ನಾಟಕ, ಕೇರಳ, ಮಹಾರಾಷ್ಟ್ರ, ಗುಜರಾತ್ ಸೇರಿದಂತೆ ದೇಶದ ಕೆಲವು ರಾಜ್ಯಗಳಲ್ಲಿ ಭಾರೀ ಮಳೆ, ಭೀಕರ ಪ್ರವಾಹ ಮತ್ತು ಭೂ ಕುಸಿತಗಳಿಂದ ಉಂಟಾಗಿರುವ ಸಾವು-ನೋವು ಮತ್ತು ಅಪಾರ ಆಸ್ತಿ-ಪಾಸ್ತಿ ನಷ್ಟದ ಹಿನ್ನೆಲೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಯಿತು.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖವಾಗಿ ನೆರೆ ಹಾವಳಿಯಿಂದ ವಿವಿಧ ರಾಜ್ಯಗಳಲ್ಲಿ ಉದ್ಭವಿಸಿರುವ ಭೀಕರ ಪರಿಸ್ಥಿತಿ ಕುರಿತು ಸಮಾಲೋಚಿಸಿ ಅಗತ್ಯ ಪರಿಹಾರ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ನಿರ್ದಿಷ್ಟವಾಗಿ ಕರ್ನಾಟಕ, ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಜಲಪ್ರಳಯದಿಂದ 225ಕ್ಕೂ ಹೆಚ್ಚು ಮಂದಿ ಮೃತಪಟ್ಟು ಕೋಟ್ಯಂತರ ರೂ. ಮೌಲ್ಯದ ಆಸ್ತಿ-ಪಾಸ್ತಿ ಮತ್ತು ಬೆಳೆಗಳು ನಷ್ಟವಾಗಿರುವ ಬಗ್ಗೆ ಪ್ರಧಾನಿ ಮಾಹಿತಿ ಪಡೆದರು.

ಕರ್ನಾಟಕದ ಬೆಳಗಾವಿ ಸೇರಿದಂತೆ ಕೆಲವೆಡೆ ವೈಮಾನಿಕ ಸಮೀಕ್ಷೆ ನಡೆಸಿದ ಕೇಂದ್ರ ಸಚಿವ ಅಮಿತ್ ಷಾ ಪ್ರಧಾನಿ ಅವರಿಗೆ ಭೀಕರ ಪ್ರವಾಹ ಪರಿಸ್ಥಿತಿಯ ವಾಸ್ತವ ಚಿತ್ರಣವನ್ನೂ ವಿವರಿಸಿದರು. ಪ್ರವಾಹ ಪೀಡಿತ ರಾಜ್ಯಗಳಿಂದ ಪರಿಹಾರ ಕೋರಿ ಸಲ್ಲಿಕೆಯಾಗಿರುವ ಮನವಿಗಳನ್ನು ಪರಿಶೀಲಿಸಿ ಕೇಂದ್ರದ ಅಧ್ಯಯನ ತಂಡಗಳನ್ನು ರವಾನಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಉನ್ನತ ಮೂಲಗಳು ತಿಳಿಸಿವೆ.

370ನೆ ವಿಧಿ ರದ್ದತಿ ನಂತರ ಕಳೆದ ಒಂದು ವಾರದಿಂದ ಜಮ್ಮು-ಕಾಶ್ಮೀರ ಪ್ರಾಂತ್ಯದಲ್ಲಿ ನೆಲೆಸಿರುವ ಪರಿಸ್ಥಿತಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಪರೀಕ್ಷಿಸಲಾಯಿತು.  ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಕಾಶ್ಮೀರ ಪರಿಸ್ಥಿತಿ ಕುರಿತು ಕೇಂದ್ರ ಗೃಹ ಸಚಿವಾಲಯಕ್ಕೆ ಈಗಾಗಲೇ ವರದಿ ಸಲ್ಲಿಸಿದ್ದು, ಅದರ ಬಗ್ಗೆಯೂ ಸಹ ಸಭೆಯಲ್ಲಿ ಚರ್ಚಿಸಲಾಯಿತು.

ಉಳಿದಂತೆ ಅನುಷ್ಠಾನಗೊಳಿಸಬೇಕಾದ ಮಹತ್ವದ ಯೋಜನೆಗಳು ಮತ್ತು ಜನಪರ ಕಾರ್ಯಕ್ರಮಗಳ ಬಗ್ಗೆಯೂ ಸಭೆಯಲ್ಲಿ ಸಮಾಲೋಚಿಸಲಾಯಿತು ಎಂದು ಮೂಲಗಳು ತಿಳಿಸಿವೆ.

Facebook Comments