“ಶೀಘ್ರದಲ್ಲಿ ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆಯಾಗಿ ಘೋಷಣೆಯಾಗಲಿದೆ”

ಈ ಸುದ್ದಿಯನ್ನು ಶೇರ್ ಮಾಡಿ

ಚಳ್ಳಕೆರೆ, ಜು.14- ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾಡಬೇಕೆಂಬ ಪ್ರಕ್ರಿಯೆ ಕೊನೆಯ ಹಂತದಲ್ಲಿದ್ದು , ಶೀಘ್ರದಲ್ಲಿಯೇ ಘೋಷಣೆಯಾಗಲಿದೆ ಎಂದು ಸಮಾಜ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಹಿರೇಹಳ್ಳಿ ಬಳಿ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಪರಿಶೀಲಿಸಿ ಮಾತನಾಡಿದ ಅವರು, ಚಿತ್ರದುರ್ಗ ಜಿಲ್ಲೆಯ ಕುಡಿಯುವ ನೀರಿನ ಮತ್ತು ನೀರಾವರಿ ಬೇಡಿಕೆಯನ್ನು ನೀಗಿಸುವ ಸಲುವಾಗಿ ಭದ್ರಾ ಮೇಲ್ದಂಡೆ ಯೋಜನೆಯನ್ನು ಜಾರಿಗೊಳಿಸಲಾಗಿದ್ದು , ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದ ಕಾಮಗಾರಿ ನಡೆಯುತ್ತಿದ್ದು , ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದ್ದು, ಮುಂಬರುವ ಫೆಬ್ರವರಿ ತಿಂಗಳೊಳಗೆ ಕಾಮಗಾರಿ ಮುಕ್ತಾಯವಾಗಲಿದೆ ಎಂದರು.

ಯೋಜನೆಯಿಂದ ಚಿತ್ರದುರ್ಗ , ತುಮಕೂರು, ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ಒಟ್ಟು 2,25,515 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರೆಯಲಿದೆ. ಮತ್ತು 367 ಕೆರೆಗಳನ್ನು ಶೇ.50ರಷ್ಟು ತುಂಬಿಸುವ ವಿಶ್ವಾಸವಿದೆ. ಮೊದಲ ಹಂತದಲ್ಲಿ ತುಂಗಾ ನದಿಯಿಂದ ಭದ್ರಾ ಜಲಾಶಯಕ್ಕೆ 17.40 ಟಿಎಂಸಿ ನೀರನ್ನು ಎರಡು ಹಂತದಲ್ಲಿ ಹರಿಸಲಾಗುವುದು. ನಂತರ ಭದ್ರಾ ಜಲಾಶಯದಿಂದ 29.90 ಟಿಎಂಸಿ ನೀರನ್ನು ಅಜ್ಜಂಪುರದ ಬಳಿ ಇರುವ ಸುರಂಗದ ಕಾಲುವೆಯ ಮೂಲಕ ವೈಜಂಕ್ಷನ್‍ಗೆ ಹರಿಸುವುದು ಮತ್ತು ವೈ ಜಂಕ್ಷನ್‍ನಿಂದ ತುಮಕೂರು, ಚಿತ್ರದುರ್ಗ, ಶಾಖಾ ಕಾಲುವೆಗಳಿಗೆ ನೀರು ಹರಿಸಲಾಗುವುದು ಎಂದರು.

Facebook Comments