ಚಾಮರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವಿ.ಶ್ರೀನಿವಾಸ ಪ್ರಸಾದ್ ಅಖಾಡಕ್ಕೆ ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಮಾ.15- ಬೆಂಬಲಿಗರ ಒತ್ತಡಕ್ಕೆ ಮಣಿದು ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದ ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಖಚಿತವಾಗಿದೆ.

ಇಂದು ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಶ್ರೀನಿವಾಸಪ್ರಸಾದ್ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಸಮ್ಮತಿಸಿದರು.

ಈ ಹಿಂದೆ 2013ರಲ್ಲಿ ನಂಜನಗೂಡಿನಲ್ಲಿ ನಡೆದ ಉಪಚುನಾವಣೆಯಲ್ಲಿ ಪರಾಭವಗೊಂಡಿದ್ದರಿಂದ ಅವರು ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು. 2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ನಂಜನಗೂಡಿನಿಂದ ತಮ್ಮ ಅಳಿಯ ಹರ್ಷವರ್ಧನ್ ಅವರನ್ನು ಕಣಕ್ಕಿಳಿಸಿ ಗೆಲ್ಲಿಸಿದ್ದರು.

ಇದೀಗ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ನೀವೇ ಅಭ್ಯರ್ಥಿಯಾಗಬೇಕೆಂದು ಬಿಜೆಪಿ ನಾಯಕರು ಮನವಿ ಮಾಡಿದ್ದರಿಂದ ಸ್ಪರ್ಧಿಸಲು ಮೀನಾಮೇಷ ಎಣಿಸಿದ್ದರು. ಆದರೆ ಹಾಲಿ ಸಂಸದ ಆರ್.ಕೆ.ಧ್ರುವನಾರಾಯಣ ವಿರುದ್ದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿ ಲೆಕ್ಕಾಚಾರ ಹಾಕಿತ್ತು.

ಬಿಜೆಪಿ ಈ ಕ್ಷೇತ್ರದಿಂದ ಮಾಜಿ ಸಚಿವ ಎಂ.ಶಿವಣ್ಣ, ಮಾಜಿ ಸಂಸದ ಕಾಗವಾಡ ಶಿವಣ್ಣ ಸೇರಿದಂತೆ ಮತ್ತಿತರರು ಆಕಾಂಕ್ಷಿಗಳಾಗಿದ್ದರು. ಆದರೆ ಅವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡುವುದಾಗಿ ವರಿಷ್ಠರು ಭರವಸೆ ನೀಡಿದ್ದರಿಂದ ಹಿಂದೆ ಸರಿದಿದ್ದಾರೆ.

ಬಿಎಸ್‍ವೈ ಜೊತೆ ಮಾತುಕತೆ ನಡೆಸಿದ ಬಳಿಕ ಮಾತನಾಡಿದ ಶ್ರೀನಿವಾಸ್ ಪ್ರಸಾದ್, ನಾನು ಬೆಂಬಲಿಗರ ಒತ್ತಡಕ್ಕೆ ಮಣಿದು ಸ್ಪರ್ಧಿಸುತ್ತಿದ್ದೇನೆ. ನನಗೆ ಸಕ್ರಿಯ ರಾಜಕಾರಣ ಇಷ್ಟವಿಲ್ಲ. ಆದರೆ ಬಂಧುಗಳು ಮತ್ತು ಹಿತೈಷಿಗಳು, ಪಕ್ಷದ ಮುಖಂಡರು ನಾನೇ ನಿಲ್ಲಬೇಕೆಂದು ಒತ್ತಡ ಹಾಕಿದ್ದರಿಂದ ಪಕ್ಷದ ಒತ್ತಡಕ್ಕೆ ಮಣಿದು ಸ್ಪರ್ಧಿಸುತ್ತಿದ್ದೇನೆ. 100ಕ್ಕೆ ನೂರರಷ್ಟು ಗೆಲುವು ನನ್ನದೇ ಎಂದು ವಿಶ್ವಾಸ ವ್ಯಕ್ತಪಡಿಸಿದರು.

[ # ಎಚ್ಚರಿಕೆ : ‘ಈ ಸಂಜೆ’ ಸುದ್ದಿಗಳನ್ನು ನಕಲಿಸುವವರ ವಿರುದ್ಧ  ಕಾನೂನು ಕ್ರಮ ಕೈಗೊಳ್ಳಲಾಗುವುದು ]

Facebook Comments

Sri Raghav

Admin