ಪೆಟ್ರೋಲ್- ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ವಾಟಾಳ್ ವಿನೂತನ ಪ್ರತಿಭಟನೆ ನಡೆಸಿದ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.11- ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ದಿನಸಿ ಪದಾರ್ಥಗಳ ಬೆಲೆ ಏರಿಕೆ ಖಂಡಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿಂದು ವಿನೂತನ ಪ್ರತಿಭಟನೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಕಿಡಿಕಾರಿದರು. ಸಿಲಿಂಡರ್‍ಅನ್ನು ಕತ್ತೆಯ ಮೇಲಿಟ್ಟು ಪ್ರತಿಭಟಿಸುವ ಮೂಲಕ ಬೆಲೆ ಏರಿಕೆಯನ್ನು ಖಂಡಿಸಿದರು.

ನಂತರ ಮಾತನಾಡಿದ ಅವರು, ನಿರಂತರವಾಗಿ ಸಿಲಿಂಡರ್, ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುತ್ತಿರುವುದರಿಂದ ಜನಸಾಮಾನ್ಯರ ಬದುಕು ಬರ್ಬಾದ್ ಆಗಿದೆ. ದಿನಸಿ ಪದಾರ್ಥಗಳ ಬೆಲೆ ಗಗನಕ್ಕೇರಿದೆ. ಆಳುವ ಸರ್ಕಾರಗಳು ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ನೆರವಿಗೆ ಬರಬೇಕಾಗಿದ್ದ ಸರ್ಕಾರ ಬೆಲೆ ಏರಿಕೆಯ ಬರೆ ಎಳೆಯುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಪೆಟ್ರೋಲ್ ಮತ್ತು ಡೀಸೆಲ್ ದರ ಲೀಟರ್‍ಗೆ ಸುಮಾರು 100ರೂ. ತಲುಪಿದೆ. ಕೇಂದ್ರ ಸರ್ಕಾರ ಬೆಲೆ ಇಳಿಸುವ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ. ಪ್ರಧಾನಿ ಅವರು ಈ ಬಗ್ಗೆ ಮಾತನಾಡುತ್ತಿಲ್ಲ. ಅನಗತ್ಯ ವಿಷಯಗಳಿಗೆ ಕಣ್ಣೀರು ಸುರಿಸುತ್ತಾರೆ. ಸಂಸದರ್ಯಾರೂ ಬೆಲೆ ಏರಿಕೆಯ ಪ್ರಸ್ತಾಪವನ್ನೇ ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನ ಪ್ರತಿದಿನ ಕಣ್ಣೀರು ಸುರಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಅಕ್ಕಿ, ಬೇಳೆ, ಎಣ್ಣೆ ಕಾಳುಗಳ ಬೆಲೆ ಪ್ರತಿದಿನ ಏರಿಕೆಯಾಗುತ್ತಿದ್ದರೂ ಯಾರೂ ಕೊಳ್ಳುವವರೇ ಇಲ್ಲದಂತಾಗಿದೆ. ಎರಡು ತಿಂಗಳಿನಿಂದ ರೈತರು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರೂ ಅದನ್ನು ಹತ್ತಿಕ್ಕಲು ಸರ್ಕಾರ ರಸ್ತೆಗೆ ಮೊಳೆಯೊಡೆಯುವ ಮೂಲಕ ಅವರ ಹಕ್ಕನ್ನು ಕಸಿಯುತ್ತಿದೆ ಎಂದರು. ಅಲ್ಲದೆ, ಕುಡಿಯುವ ನೀರು, ವಿದ್ಯುತ್ ಸಂಪರ್ಕ ಕಡಿತ ಮಾಡುತ್ತಿದೆ ಎಂದು ಅವರು ಆರೋಪಿಸಿದರು.

Facebook Comments