ಹಿರಿಯ ಬಹುಭಾಷಾ ನಟಿ, ‘ಅಭಿನಯ ಶಾರದೆ’ ಜಯಂತಿ ಇನ್ನಿಲ್ಲ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಹಿರಿಯ ಬಹುಭಾಷಾ ನಟಿ, ಅಭಿನಯ ಶಾರದೆ ಜಯಂತಿ ನಿಧನರಾಗಿದ್ದಾರೆ. 76 ವರ್ಷ ಪ್ರಾಯದ ಜಯಂತಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾದರು. ದಕ್ಷಿಣ ಭಾರತ ಚಿತ್ರರಂಗದ ಮೇರು ನಟಿಯಾಗಿದ್ದ ಜಯಂತಿ ಅವರು ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಮತ್ತು ಮರಾಠಿ ಭಾಷೆಗಳೆಲ್ಲ ಸೇರಿ ಸುಮಾರು 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

ಕನ್ನಡ ಸೇರಿದಂತೆ ದಕ್ಷಿಣ ಭಾರತ ಚಿತ್ರರಂಗದಲ್ಲಿ ನಟಿ ಜಯಂತಿಯವರ ಹೆಸರು ಚಿರಪರಿಚಿತ. ಕನ್ನಡದಲ್ಲಿಯೇ 150ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಜಯಂತಿಯವರು ತೆಲುಗು, ತಮಿಳು, ಮಲಯಾಳಂ, ಹಿಂದಿ ಮತ್ತು ಮರಾಠಿ ಸೇರಿದಂತೆ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

ಕನ್ನಡದ ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ಜೊತೆ 45 ಚಿತ್ರಗಳಲ್ಲಿ ನಟಿಸಿದ ಹೆಗ್ಗಳಿಕೆ ಜಯಂತಿಯವರದ್ದು. 1950ರಲ್ಲಿ ಬಳ್ಳಾರಿಯಲ್ಲಿ ಜನಿಸಿದ್ದ ಜಯಂತಿಯವರ ಮೂಲ ಹೆಸರು ಕಮಲಾ ಕುಮಾರಿ.ಚಿತ್ರರಂಗಕ್ಕೆ ಬಂದ ನಂತರ ಜಯಂತಿಯಾದರು. ತಂದೆ ಬಾಲಸುಬ್ರಹ್ಮಣ್ಯಂ ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರೆ, ತಾಯಿ ಸಂತಾನಲಕ್ಷ್ಮಿ ಗೃಹಿಣಿ.

ಜಯಂತಿಯವರು ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದು ವೈ ಆರ್ ಪುಟ್ಟಸ್ವಾಮಿಯವರ ‘ಜೇನುಗೂಡು’ ಚಿತ್ರದ ಮೂಲಕ. ಅಲ್ಲಿಂದಲೇ ಕಮಲಾ ಕುಮಾರಿ ಜಯಂತಿಯಾಗಿದ್ದು.ಕನ್ನಡ ಚಿತ್ರರಂಗದಲ್ಲೆ ಮೊದಲ ಬಾರಿಗೆ ಬಿಕಿನಿ ತೊಟ್ಟು ಸುದ್ದಿಯಾಗಿದ್ದ ನಟಿ ಜಯಂತಿಯವರು ತಾವು ನಿರ್ವಹಿಸುವ ಪಾತ್ರಕ್ಕೆ ನ್ಯಾಯ ಒದಗಿಸುತ್ತಿದ್ದರು, ಪಾತ್ರ ಬೇಡುವ ರೀತಿಯಲ್ಲಿ ಅಭಿನಯಿಸುತ್ತಿದ್ದರು.

ಚಿತ್ರರಂಗದಲ್ಲಿ ಬಹುಬೇಡಿಕೆಯಲ್ಲಿದ್ದಾಗಲೇ ಪುಟ್ಟಣ್ಣ ಕಣಗಾಲ್ ಅವರ ನಾಗರಹಾವು ಚಿತ್ರದ ಒಂದೇ ಒಂದು ಹಾಡಿನಲ್ಲಿ ಕಾಣಿಸಿಕೊಂಡು ಕನ್ನಡ ಚಿತ್ರರಂಗದಲ್ಲಿ ಇತಿಹಾಸ ಸೃಷ್ಟಿಸಿದರು. ಒನಕೆ ಓಬವ್ವನ ಹಾಡಿನಲ್ಲಿ ಜಯಂತಿಯವರ ಅಭಿನಯ ಇಂದಿಗೂ ಜನಪ್ರಿಯ.

ನಟಿ ಜಯಂತಿ, 6 ಬಾರಿ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದರು. 1960 ರಿಂದ 1980ರ ದಶಕದವರೆಗೂ ಚಿತ್ರರಂಗದಲ್ಲಿ ಬೇಡಿಕೆ ಉಳಿಸಿಕೊಂಡಿದ್ದರು. ಜೇನುಗೂಡು, ಬೆಟ್ಟದ ಹುಲಿ, ಎಡಕಲ್ಲು ಗುಡ್ಡದ ಮೇಲೆ, ಕಸ್ತೂರಿ ನಿವಾಸ ಮೊದಲಾದವು ಅವರ ಪ್ರಮುಖ ಚಿತ್ರಗಳು.

ಕನ್ನಡದಲ್ಲಿ ಡಾ ರಾಜ್ ಕುಮಾರ್, ವಿಷ್ಣುವರ್ಧನ್, ಉದಯ್ ಕುಮಾರ್, ಕಲ್ಯಾಣ್ ಕುಮಾರ್, ಶ್ರೀನಾಥ್, ಅನಂತ್ ನಾಗ್ ಮೊದಲಾದ ಚಿತ್ರಗಳಲ್ಲಿ ನಟಿಸಿದ್ದರು. ನಿರ್ಮಾಪಕಿಯೂ ನಿರ್ದೇಶಕಿಯೂ ಆಗಿರುವ ಇವರು 1965 ‘ಮಿಸ್ ಲೀಲಾವತಿ’ ಚಿತ್ರದ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿ ಬಂದಿದೆ.’ಎರಡು ಮುಖ'(1969),ಮನಸ್ಸಿನಂತೆ ಮಾಂಗಲ್ಯ'(1976),’ಧರ್ಮ ದಾರಿ ತಪ್ಪಿತು'(1981),ಮಸಣದ ಹೂವು (1985),’ಆನಂದ್ ‘(1989) ಚಿತ್ರಗಳ ಅಭಿನಯಕ್ಕಾಗಿ ಐದು ಬಾರಿ ರಾಜ್ಯ ಪ್ರಶಸ್ತಿ ಗಳಿಸಿದ್ದಾರೆ.

# ಮುಖ್ಯಮಂತ್ರಿ ಸಂತಾಪ :
ಹಿರಿಯ ನಟಿ ಜಯಂತಿ ಅವರ ನಿಧನಕ್ಕೆ ಮುಖ್ಯಮಂತ್ರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಹಲವು ಭಾಷೆಗಳ 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಜಯಂತಿ ಅವರು ಅಭಿನಯ ಶಾರದೆ ಎಂಬ ಬಿರುದಿಗೆ ಅನ್ವರ್ಥವಾಗಿದ್ದರು.

ಎಡಕಲ್ಲು ಗುಡ್ಡದ ಮೇಲೆ, ಮಿಸ್ ಲೀಲಾವತಿ, ಜೇನು ಗೂಡು, ಬಹದ್ದೂರ್ ಗಂಡು ಮೊದಲಾದ ಚಿತ್ರಗಳಲ್ಲಿನ ಅವರ ಅಭಿನಯ ಜನಮನ ಸೂರೆ ಗೊಂಡಿತ್ತು. ಎಲ್ಲ ವಿಧವಾದ ಪಾತ್ರಗಳಲ್ಲೂ ಲೀಲಾಜಾಲವಾಗಿ ಅಭಿನಯಿಸಿ ಸೈ ಎನಿಸಿಕೊಂಡಿದ್ದರು. ಅವರ ನಿಧನದಿಂದ ನಾಡು ಅದ್ಭುತ ಕಲಾವಿದೆಯನ್ನು ಕಳೆದುಕೊಂಡಿದೆ.

ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ವರ್ಗ ಹಾಗೂ ಅಪಾರ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸು ವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Facebook Comments

Sri Raghav

Admin