ಪರಿಷತ್ ಚುನಾವಣೆ : ನಾಳೆ ಮಾಜಿ ಪ್ರಧಾನಿ ದೇವೇಗೌಡರಿಂದ ಪ್ರಚಾರ

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು, ನ.25- ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‍ಗೆ ನಡೆಯುತ್ತಿರುವ ಚುನಾವಣೆಯನ್ನು ಜೆಡಿಎಸ್ ಪ್ರತಿಷ್ಠೆಯಾಗಿ ಪರಿಗಣಿಸಿದ್ದು, ಗೆಲ್ಲಲೇಬೇಕೆಂಬ ಪಣ ತೊಡಲಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರು ಜೆಡಿಎಸ್ ಅಭ್ಯರ್ಥಿ ಆರ್.ಅನಿಲ್‍ಕುಮಾರ್ ಅವರ ಪರವಾಗಿ ಪರ ಪ್ರಚಾರ ನಡೆಸಲಿದ್ದಾರೆ.

ಜೆಡಿಎಸ್ ಭದ್ರಕೋಟೆಯನ್ನು ಉಳಿಸಿಕೊಳ್ಳುವ ಉದ್ದೇಶದಿಂದ ನಿವೃತ್ತ ಕೆಎಎಸ್ ಅಧಿಕಾರಿ ಅನಿಲ್ ಕುಮಾರ್ ಅವರನ್ನು ಕಣಕ್ಕಿಳಿಸಿರುವ ದೇವೇಗೌಡರು, ಈಗಾಗಲೇ ರಾಜಕೀಯ ದಾಳ ಉರುಳಿಸಿದ್ದಾರೆ. ಲೋಕಸಭೆ ಚುನಾವಣೆಯ ತಮ್ಮ ಸೋಲಿನ ಹಿನ್ನೆಲೆಯಲ್ಲಿ ಮೇಲ್ಮನೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಶಾಸಕರು ಹಾಗೂ ಮುಖಂಡರಿಗೆ ಸೂಚನೆ ನೀಡಿದ್ದಾರೆ.

ನಾಮಪತ್ರ ಸಲ್ಲಿಸಿದ ನಂತರ ನಡೆದ ಜನತಾ ಸಂಗಮ ಕಾರ್ಯಕ್ರಮದಲ್ಲಿಯೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಕಾಂಗ್ರೆಸ್ ಸೋಲಿಗೆ ಜೆಡಿಎಸ್ ತಯಾರಾಗಬೇಕು ಎಂಬ ಸಂದೇಶ ರವಾನಿಸಿದ್ದು, ಕಾರ್ಯಕರ್ತರು ಮುಖಂಡರಲ್ಲಿ ಹುಮ್ಮಸ್ಸು ಹೆಚ್ಚಾಗಿದೆ. ಹೀಗಾಗಿ ಚುನಾವಣಾ ತಂತ್ರಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ದೇವೇಗೌಡರು ಕೊರಟಗೆರೆ, ಮಧುಗಿರಿ, ಶಿರಾದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ಮತ್ತು ಮತಯಾಚನೆ ಮಾಡುವುದರೊಂದಿಗೆ ಕಾಂಗ್ರೆಸ್ ಮತ ಬುಟ್ಟಿಗೆ ಕೈ ಹಾಕಲು ಮುಂದಾಗಿದ್ದಾರೆ. ಪಕ್ಷದ ಹಾಲಿ ಶಾಸಕರು, ಮಾಜಿ ಶಾಸಕರು ಹಾಗೂ ಮುಖಂಡರು ಒಟ್ಟಾಗಿ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಎಲ್ಲರನ್ನೂ ಅನಿಲ್ ಕುಮಾರ್ ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ.

# ಬಿರುಸಿನ ಪ್ರಚಾರ:

ನಾಮಪತ್ರ ಸಲ್ಲಿಸಿದ ನಂತರ ಜೆಡಿಎಸ್‍ನಲ್ಲಿ ಚುನಾವಣಾ ಹುಮ್ಮಸ್ಸು ಹೆಚ್ಚಿದ್ದು, ಅನಿಲ್ ಕುಮಾರ್ ಅವರು ಪಾವಗಡ, ಮಧುಗಿರಿ, ಕೊರಟಗೆರೆ, ಶಿರಾ ತಾಲ್ಲೂಕುಗಳಿಗೆ ಮೇಲಿಂದ ಮೇಲೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಬೆಂಬಲಿತ ಗ್ರಾಪಂ ಸದಸ್ಯರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.

ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಎಲೆರಾಂಪುರದ ಕುಂಚಟಿಗ ಮಠದ ಶ್ರೀ ಹನುಮಂತನಾಥ ಸ್ವಾಮೀಜಿ, ಪಟ್ಟನಾಯಕನಹಳ್ಳಿ ಶ್ರೀ ನಂಜವಧೂತ ಸ್ವಾಮೀಜಿ ಅವರ ಆಶೀರ್ವಾದ ಪಡೆದುಕೊಂಡಿದ್ದಾರೆ.

# ಜೆಡಿಎಸ್‍ಗೆ ಅಸ್ತಿತ್ವದ ಪ್ರಶ್ನೆ:

ವಿಧಾನ ಪರಿಷತ್ ಸದಸ್ಯರಾಗಿ ಜೆಡಿಎಸ್‍ನಿಂದ ಆಯ್ಕೆಯಾಗಿದ್ದ ಬೆಮಲ್ ಕಾಂತರಾಜು ಅವರು, ಕಾಂಗ್ರೆಸ್ ಪಕ್ಷಕ್ಕೆ ಸೇರಲು ಮುಂದಾಗಿರುವುದರಿಂದ ಜಿಲ್ಲಾಯಲ್ಲಿ ಜೆಡಿಎಸ್ ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಲು ಚುನಾವಣೆಯಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.

ಜಿಲ್ಲಾಯಲ್ಲಿ ಜೆಡಿಎಸ್ ಶಕ್ತಿ ಕಳೆದುಕೊಳ್ಳುತ್ತಿದೆ ಎಂಬ ಭಾವನೆಯನ್ನು ಹರಡುತ್ತಿರುವ ಪ್ರತಿಪಕ್ಷಗಳಿಗೆ ತಕ್ಕ ತಿರುಗೇಟು ನೀಡುವ ನಿಟ್ಟಿನಲ್ಲಿ ಚುನಾವಣೆಯಲ್ಲಿ ಗೆಲ್ಲಲು ದಳಪತಿಗಳು ತಂತ್ರಗಾರಿಕೆ ರೂಪಿಸುತ್ತಿದ್ದು, ಪಕ್ಷದ ಸಂಘಟಿತ ಹೋರಾಟಕ್ಕೆ ಒತ್ತು ನೀಡಿದ್ದಾರೆ. ಪಕ್ಷ ಗೆಲ್ಲಿಸುವ ಹೊಣೆಗಾರಿಕೆಯನ್ನು ಹಾಲಿ ಶಾಸಕರು, ಮಾಜಿ ಶಾಸಕರಿಗೆ ನೀಡಲಾಗಿದೆ.

Facebook Comments