ಅ.10ರಿಂದ 12ರವರೆಗೆ ವಿಧಾನಸೌಧದ ಸುತ್ತ 2 ಕಿಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.7- ವಿಧಾನಮಂಡಲ ಅಧಿವೇಶನವು ಅ.10ರಿಂದ 12ರವರೆಗೆ ವಿಧಾನಸೌಧಲ್ಲಿ ನಡೆಯಲಿದ್ದು, ಈ ವೇಳೆ ಯಾವುದೇ ಅಹಿತಕರ ಘಟನೆ ಜರುಗದಂತೆ ಕ್ರಮ ಕೈಗೊಳ್ಳಲು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ವಿಧಾನಸೌಧದ ಸುತ್ತಮುತ್ತ 2 ಕಿಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ನಗರ ಪೊಲೀಸ್ ಆಯುಕ್ತರಿಂದ ಆದೇಶ ಅಧಿವೇಶನ ನಡೆಯುವ ವೇಳೆ ಅಂದರೆ ಅ.10ರಂದು ಬೆಳಗ್ಗೆ 6ರಿಂದ ಅ. 12ರ ಮಧ್ಯರಾತ್ರಿ 12 ಗಂಟೆವರೆಗೆ ವಿವಿಧ ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳು ತಮ್ಮ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ, ಮೆರವಣಿಗೆ, ವಿಧಾನಸೌಧ ಮುತ್ತಿಗೆ ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಾಧ್ಯತೆಯಿದೆ.ಈ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಕಲಂ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.

# ಅಧಿವೇಶನದ ಅವಧಿ ವಿಸ್ತರಣೆಗೆ ಪ್ರತಿಪಕ್ಷಗಳ ಆಗ್ರಹ :
ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನದ ಅವಧಿಯನ್ನು ವಿಸ್ತರಣೆ ಮಾಡುವಂತೆ ಪ್ರತಿಪಕ್ಷಗಳು ರಾಜ್ಯ ಸರ್ಕಾರವನ್ನು ಆಗ್ರಹಿಸಿವೆ.ಅ.೧೦ ರಿಂದ 12ರ ವರೆಗೆ ಮೂರು ದಿನಗಳ ಕಾಲ ಉಭನ ಸದನಗಳ ಅಧಿವೇಶನ ನಡೆಯಲಿದ್ದು, ಈ ಸಂದರ್ಭದಲ್ಲಿ ಬಜೆಟ್ ಅನುಮೋದನೆ ಪಡೆಯಬೇಕಾಗಿದೆ.

ಬೆಳಗಾವಿಯಲ್ಲಿ ನಡೆಸಬೇಕಾಗಿದ್ದ ಚಳಿಗಾಲದ ಅಧಿವೇಶನವನ್ನು ಬೆಂಗಳೂರಿನಲ್ಲಿ ನಡೆಸಲಾಗುತ್ತಿದೆ. ಕೇವಲ ಮೂರು ದಿನ ಅಧಿವೇಶನ ನಡೆಸಿ ಬಜೆಟ್‍ಗೆ ಒಪ್ಪಿಗೆ ಪಡೆಯುವುದು ಸರಿಯಲ್ಲ. ಹೀಗಾಗಿ ಕನಿಷ್ಟ ಇನ್ನೊಂದು ವಾರ ಕಾಲ ಅಧಿವೇಶನ ವಿಸ್ತರಣೆ ಮಾಡಬೇಕು ಎಂದು ಕಾಂಗ್ರೆಸ್-ಜೆಡಿಎಸ್ ಈಗಾಗಲೇ ಆಗ್ರಹಿಸಿವೆ.

ಪ್ರಸಕ್ತ ಸಾಲಿನ ಆಯವ್ಯಯದ ಬಗ್ಗೆ ಸದನದಲ್ಲಿ ಸುದೀರ್ಘ ಚರ್ಚೆಯಾಗಿಲ್ಲ. ಇಲಾಖಾವಾರು ಬೇಡಿಕೆಗಳ ಮೇಲೆ ಚರ್ಚೆ ನಡೆಸಿ ಸರ್ಕಾರದಿಂದ ಉತ್ತರ ಪಡೆಯಬೇಕಿದೆ. ಇದಕ್ಕೆ ಮೂರು ದಿನಗಳ ಕಾಲ ಸಾಕಾಗುವುದಿಲ್ಲ ಎಂದು ಉಭಯ ಪಕ್ಷಗಳು ಒತ್ತಾಯಿಸಿವೆ. ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಬಂದು ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹೀಗಾಗಿ ಬೆಳಗಾವಿಯ ಸುವರ್ಣಸೌಧದಲ್ಲೇ ಅಧಿವೇಶನವನ್ನೂ ನಡೆಸಬೇಕೆಂದು ಆಗ್ರಹಿಸಿದ್ದವು. ಇದಕ್ಕೆ ಸರ್ಕಾರ ಮಣಿಯಲಿಲ್ಲ.

ರಾಜ್ಯದಲ್ಲಿ ಉಂಟಾಗಿರುವ ನೆರೆ ಹಾವಳಿ, ಅತಿವೃಷ್ಟಿ, ಬರ ಪರಿಸ್ಥಿತಿ ಮೊದಲಾದ ಜ್ವಲಂತ ಸಮಸ್ಯೆಗಳ ಬಗ್ಗೆ ಸವಿವರವಾಗಿ ಚರ್ಚೆ ಮಾಡಲು ಹೆಚ್ಚಿನ ಅವಕಾಶ ಬೇಕಾಗಿದೆ. ಹೀಗಾಗಿ ಅಧಿವೇಶನದ ಅವಧಿಯನ್ನು ಕನಿಷ್ಟ ಒಂದು ವಾರವಾದರೂ ವಿಸ್ತರಿಸಬೇಕೆಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿವೆ.

ನೆರೆ ಹಾವಳಿ ಪೀಡಿತ ಪ್ರದೇಶಗಳಲ್ಲಿ ಸಮರ್ಪಕ ಪರಿಹಾರ ಕಾರ್ಯ ಕೈಗೊಂಡಿಲ್ಲ ಎಂದು ಈಗಾಗಲೇ ಪ್ರತಿಭಟನೆ ಮಾಡಿ ಸರ್ಕಾರದ ಗಮನವನ್ನು ಪ್ರತಿಪಕ್ಷಗಳು ಸೆಳೆದಿವೆ. ಇದೇ ವಿಚಾರವನ್ನು ಸದನದಲ್ಲಿ ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ ನಡೆಸಿವೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೂಡ ಮೂರು ದಿನಗಳ ಅಧಿವೇಶನ ಏನೇನೂ ಸಾಲುವುದಿಲ್ಲ. ಅಧಿವೇಶನದ ಅವಧಿಯನ್ನು ವಿಸ್ತರಣೆ ಮಾಡಿ ನೆರೆ-ಬರ, ರೈತರ ಸಾಲಮನ್ನಾ, ಬಡವರ ಬಂಧು, ಋಣಮುಕ್ತ ಕಾಯ್ದೆ ಅನುಷ್ಠಾನ ಮೊದಲಾದ ವಿಷಯಗಳನ್ನು ಸಮಗ್ರವಾಗಿ ಚರ್ಚೆ ನಡೆಸಬೇಕು ಎಂದಿದ್ದಾರೆ.

ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೂಡ ಅಧಿವೇಶನದ ಅವಧಿಯನ್ನು ಹೆಚ್ಚಿಸುವಂತೆ ಈಗಾಗಲೇ ಆಗ್ರಹಿಸಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಕೂಡ ಕನಿಷ್ಟ ಎರಡು ವಾರಗಳ ಕಾಲ ಅಧಿವೇಶನ ನಡೆಸುವಂತೆ ಸರ್ಕಾರವನ್ನು ಕೋರಿದ್ದರು.

ಅಧಿವೇಶನದ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷರ ಅಧ್ಯಕ್ಷತೆಯಲ್ಲಿ ಸದನದ ಕಾರ್ಯ-ಕಲಾಪಗಳ ಸಲಹಾ ಸಮಿತಿ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಸಭಾನಾಯಕರು, ಪ್ರತಿಪಕ್ಷಗಳ ನಾಯಕರು ಪಾಲ್ಗೊಳ್ಳುತ್ತಾರೆ. ಆಗ ಅಧಿವೇಶನ ನಿಗದಿಯಂತೆ ನಡೆಸುವುದು ಇಲ್ಲವೆ ಅಧಿವೇಶನದ ಅವಧಿಯನ್ನು ವಿಸ್ತರಣೆ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳೂ ಇವೆ.

Facebook Comments

Sri Raghav

Admin